Home ಜಿಲ್ಲೆ ಕಲಬುರಗಿ ಕನ್ನಡ ಭಾಷೆ, ನಾಡು-ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ: ಡಾ. ಉಮೇಶ್ ಪುರದ್

ಕನ್ನಡ ಭಾಷೆ, ನಾಡು-ನುಡಿಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಿ: ಡಾ. ಉಮೇಶ್ ಪುರದ್

ಗದಗ: ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಗುರುಬಸವ ಸಿಬಿಎಸ್‍ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳು ನಾಡಗೀತೆ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಎಂಬ ಗೀತೆಯನ್ನು ಅದ್ಭುತವಾಗಿ ಹಾಡುವ ಮೂಲಕ ಕನ್ನಡ ನಾಡಿನ ಹಿರಿಮೆ ಮತ್ತು ಗೌರವವನ್ನು ಸಾರಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಿಜಿಎಂ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರು ಹಾಗೂ ಗದಗದ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷರಾದ ಡಾ. ಉಮೇಶ್ ಪುರದ್ ಅವರು ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು.
ಕನ್ನಡ ಭಾಷೆ ನಮ್ಮ ನಾಡಿನ ಹೆಮ್ಮೆ ಮತ್ತು ಸಂಸ್ಕøತಿಯ ಪ್ರತೀಕವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಗೌರವ ಮತ್ತು ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ನಾಡಿನ ಇತಿಹಾಸ, ಪರಂಪರೆ ಹಾಗೂ ಮಹನೀಯರ ಸಾಧನೆಗಳನ್ನು ಅರಿತುಕೊಂಡು ನಾಡು-ನುಡಿಯ ಸೇವೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಚಾರ್ಯರಾದ ಡಾ. ವಿಜಯಕುಮಾರ್ ಎಸ್. ಮಾಲಗಿತ್ತಿ ಮಾತನಾಡಿ, ಕನ್ನಡ ರಾಜ್ಯೋತ್ಸವವು ಕನ್ನಡಿಗರ ನಾಡು, ನುಡಿ, ಸಂಸ್ಕೃತಿ ಮತ್ತು ಏಕತೆಯನ್ನು ಸಾರುವ ಮಹತ್ವದ ಹಬ್ಬವಾಗಿದೆ ಎಂದು ತಿಳಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಕವಿಗಳ ಸಾಹಿತ್ಯಿಕ ಕೊಡುಗೆ ಹಾಗೂ ವ್ಯಕ್ತಿತ್ವವನ್ನು ಪರಿಚಯಿಸುವ ರೂಪಕವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಆಕರ್ಷಕ ನೃತ್ಯ ಪ್ರದರ್ಶನ ಹಾಗೂ ಕವನ ವಾಚನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯ ಮೂಲಕ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯ ಮಹತ್ವವನ್ನು ಸಾರಿದರು.
ಶಾಲೆಯ ವೇದಿಕೆಯನ್ನು ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವಂತೆ ಸುಂದರವಾಗಿ ಅಲಂಕರಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಶಿಕ್ಷಕರಾದ ಕಲ್ಲಪ್ಪ ಅಂಗಡಿ, ಪ್ರಕಾಶ ಶಿವಶಿಂಪಿಗೇರ, ವೀಣಾ ಎ, ನೀಲಮ್ಮ ಮಡಿವಾಳರ, ನಾಗರತ್ನ ಅಂಗಡಿ, ಸರೋಜಾ ಕುರ್ತಕೋಟಿ, ನಿರ್ಮಲಾ ಕಾರದಕಟ್ಟಿ, ಶಿವರಂಜಿನಿ ಪೂಜಾರ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯ ಗೌರವವನ್ನು ಎತ್ತಿಹಿಡಿಯುವ ಮತ್ತು ನಾಡಿನ ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸಂಕಲ್ಪದೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ವಂದನಾರ್ಪಣೆ ನೆರವೇರಿಸಲಾಯಿತು.