Home ಜಿಲ್ಲೆ ಜನರ ಪಾಲ್ಗೊಳ್ಳುವಿಕೆಯೊಂದಿಗೆ ತಳಮಟ್ಟದಿಂದಲೇ ಯೋಜನೆಗಳ ರೂಪಿಸಿ

ಜನರ ಪಾಲ್ಗೊಳ್ಳುವಿಕೆಯೊಂದಿಗೆ ತಳಮಟ್ಟದಿಂದಲೇ ಯೋಜನೆಗಳ ರೂಪಿಸಿ

ಗದಗ,ನ೩: ಜನರ ಅಗತ್ಯಗಳು ಮತ್ತು ಆಶೋತ್ತರಗಳಿಗೆ ಅನುಗುಣವಾಗಿ ಜನರ ಪಾಲ್ಗೊಳ್ಳುವಿಕೆಯ ಮೂಲಕವೇ ಜನಪರ ಯೋಜನೆಗಳನ್ನು ರೂಪಿಸಬೇಕು. ಈ ಹಿಂದೆ ಮೇಲ್ಮಟ್ಟದಿಂದ ಕೆಳಹಂತದವರೆಗೆ ಯೋಜನೆಗಳನ್ನು ಸಿದ್ಧಪಡಿಸಿ ಅನುಷ್ಠಾನಗೊಳಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಗ್ರಾಮ ಮತ್ತು ವಾರ್ಡ್ ಮಟ್ಟದಿಂದಲೇ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಮೂಲಕ ನೈಜ ವಿಕೇಂದ್ರೀಕರಣಕ್ಕೆ ಆದ್ಯತೆ ನೀಡಲಾಗುವುದು ಎಂದು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ ಆರ್ ಪಾಟೀಲ ಅವರ ನೇತೃತ್ವದಲ್ಲಿ ಜರುಗಿದ ಜನಪರ ಯೋಜನೆಗಳ ರೂಪಿಸುವಿಕೆ ಹಾಗೂ ಅನುಷ್ಠಾನಕ್ಕೆ ಸಂಬAಧಿಸಿದ ಕಾರ್ಯತಂತ್ರದ ಸಭೆಯಲ್ಲಿ ಅವರು ಮಾತನಾಡಿದರು.

ಸ್ಥಳೀಯ ಜನರ ಅಗತ್ಯಗಳನ್ನು ಗುರುತಿಸಿ, ಅವರ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ಯೋಜನೆಗಳನ್ನು ರೂಪಿಸಬೇಕು. ಈ ಹಿಂದೆ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಿಸಿದಂತೆ ಮುಂದಿನ ದಿನಗಳಲ್ಲಿ ಜನರ ಅಭಿಪ್ರಾಯ ಹಾಗೂ ಅಗತ್ಯಗಳನ್ನು ಆಧರಿಸಿ ಯೋಜನೆಗಳನ್ನು ಸಿದ್ಧಪಡಿಸಿ ಅನುಷ್ಠಾನಗೊಳಿಸಲಾಗುವುದು. ಮೀಸಲಾತಿ ವ್ಯವಸ್ಥೆಯಿಂದ ಸಮಾಜದ ಎಲ್ಲ ಸಮುದಾಯಗಳಿಗೂ ಅಧಿಕಾರದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆಯುತ್ತಿದೆ. ಆದರೆ, ಅಧಿಕಾರವನ್ನು ಸಮರ್ಪಕವಾಗಿ ಚಲಾಯಿಸಲು ಅಗತ್ಯವಾದ ಅವಕಾಶ ಮತ್ತು ಬೆಂಬಲವನ್ನು ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ತಿಳಿಸಿದರು.

ಯೋಜನಾ ಇಲಾಖೆ ನೀಡಿರುವ ಮಾರ್ಗಸೂಚಿಗಳ ಪ್ರಕಾರ ಪರಿಷ್ಕöÈತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಅದರಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ನಿಗದಿತ ಹಂತಗಳಲ್ಲಿ ಯೋಜನೆ ರೂಪಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು. ಗದಗ ಜಿಲ್ಲೆಯಲ್ಲಿ ಈ ಹಿಂದೆಯೂ ಸಚಿವರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಯೋಜನೆಗಳ ರೂಪಿಸುವಿಕೆ ಕುರಿತು ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಪ್ರಕ್ರಿಯೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಬೇಕು ಎಂದು ಸೂಚಿಸಿದರು.

ಗ್ರಾಮ, ವಾರ್ಡ್, ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜನರ ಅಭಿಪ್ರಾಯ ಸಂಗ್ರಹಿಸಿ ಅಗತ್ಯ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ಈ ಪ್ರಕ್ರಿಯೆಯನ್ನು ಕೇವಲ ಆಡಳಿತಾತ್ಮಕ ಕಾರ್ಯವೆಂದು ಪರಿಗಣಿಸದೆ, ಜನರ ಪಾಲ್ಗೊಳ್ಳುವಿಕೆಗೆ ಅವಕಾಶ ಕಲ್ಪಿಸಿ ಜವಾಬ್ದಾರಿಯಿಂದ ನಿರ್ವಹಿಸಬೇಕು. ಒಮ್ಮೆ ನಿಯಮಾನುಸಾರ ಯೋಜನೆ ಸಿದ್ಧಪಡಿಸಿ ಸಲ್ಲಿಸಿದ ನಂತರ ಅದರಲ್ಲಿ ಯಾರಿಂದಲೂ ಇಚ್ಛಾನುಸಾರ ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ. ಕಾನೂನುಬದ್ಧವಾಗಿ ರೂಪುಗೊಳ್ಳುವ ಈ ಯೋಜನೆಗಳ ಅನುಷ್ಠಾನದಲ್ಲಿ ಎಲ್ಲ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಹೇಳಿದರು.

ಸ್ಥಳೀಯ ಅಗತ್ಯಗಳಿಗೆ ಆದ್ಯತೆ ನೀಡಿ ಯೋಜನೆ ರೂಪಿಸಿ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ವಿಕೇಂದ್ರೀಕರಣವು ಸ್ಥಳೀಯ ಆಡಳಿತದ ಮೂಲ ತತ್ವವಾಗಿದೆ. ಸ್ಥಳೀಯವಾಗಿ ಅಗತ್ಯವಿರುವ ಕಾಮಗಾರಿಗಳನ್ನು ಗುರುತಿಸಿ, ಅವುಗಳನ್ನು ಆದ್ಯತೆಯ ಮೇರೆಗೆ ಪಟ್ಟಿ ಮಾಡಿ ಅನುಷ್ಠಾನಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ರಾಜ್ಯದಲ್ಲಿಯೇ ಗದಗ ಜಿಲ್ಲೆಯಿಂದ ಮೊದಲ ಬಾರಿಗೆ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಈ ನಿಟ್ಟಿನಲ್ಲಿ ಗ್ರಾಮವಾರು ಆದ್ಯತಾ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚು ಚುರುಕಾಗಿ ಕಾರ್ಯನಿರ್ವಹಿಸಿ, ವಾರ್ಡ್, ಗ್ರಾಮ, ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಬೇಕು. ಜನರ ಅಗತ್ಯಗಳನ್ನು ಆಧರಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲು ಎಲ್ಲ ಹಂತದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜನರ ಪಾಲ್ಗೊಳ್ಳುವಿಕೆಗೆ ಆದ್ಯತೆ ನೀಡಿ: ಸಿಇಒ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕುಲ್ ಜೈನ್ ಮಾತನಾಡಿ, ಸರ್ಕಾರದ ವಿಕೇಂದ್ರೀಕರಣ ಯೋಜನೆಯ ಆಶಯವನ್ನು ಅಧಿಕಾರಿಗಳು ಸಮರ್ಪಕವಾಗಿ ಅರ್ಥಮಾಡಿಕೊಳ್ಳಬೇಕು. ಯೋಜನೆಯ ಉದ್ದೇಶಕ್ಕೆ ಅನುಗುಣವಾಗಿ ಪರಿಣಾಮಕಾರಿ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವ ಬದ್ಧತೆಯನ್ನು ಅಧಿಕಾರಿಗಳು ಪ್ರದರ್ಶಿಸಬೇಕು. ಯೋಜನೆ ರೂಪಿಸುವ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು. ಸ್ಥಳೀಯ ಅಗತ್ಯಗಳು ಮತ್ತು ಜನರ ಅಭಿಪ್ರಾಯಗಳಿಗೆ ಆದ್ಯತೆ ನೀಡಿ ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಡಿಎಫ್‌ಓ ಸಂತೋಷಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ. ಕಂಬಾಳಿಮಠ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವಾಸಣ್ಣ ಕುರುಡಗಿ, ಕೃಷ್ಣ ಪರಾಪುರ, ಸಿದ್ದು ಪಾಟೀಲ್, ಶ್ರೀಮತಿ ಸುಜಾತ ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.