
ಕೋಲಾರ, ನ. ೪- ಕೋಲಾರದಲ್ಲಿ ನಡೆದ ಬಿಜೆಪಿ ಜಾಗೃತ ಜಾಥಾ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಯ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಸಾರ್ವಜನಿಕರ ಶಾಂತಿಗೆ ಭಂಗ ತರುವ ಮೂಲಕ ಜನರಲ್ಲಿ ಗೊಂದಲ ಮೂಡಿಸುವ ರಾಜಕೀಯ ನಾಟಕವಾಡುತ್ತಿದೆ ಎಂದು ತೀವ್ರವಾಗಿ ಆರೋಪಿಸಿದರು.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ಎನ್.ಡಿ.ಎ. ಸರ್ಕಾರ ಅಧಿಕಾರಕ್ಕೆ ಬರುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಗ್ಯಾರೆಂಟಿಗಳ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಬಡಜನರ ಬದುಕು ದುಸ್ತರವಾಗಿದೆ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿಯವರ ಕೈಬಲಪಡಿಸಲು ಎನ್.ಡಿ.ಎ. ಪಕ್ಷವನ್ನು ಬೆಂಬಲಿಸುವಂತೆ ಅವರು ಜನತೆಯಲ್ಲಿ ಮನವಿ ಮಾಡಿದರು.
ಇದೇ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ ಎಂಬ ಘೋಷಣೆಯೊಂದಿಗೆ ಕೋಲಾರದಿಂದ ಜನಜಾಗೃತಿ ಜಾಥಾಗೆ ಚಾಲನೆ ನೀಡಲಾಗಿದೆ ಎಂದರು.
ನರೇಂದ್ರ ಮೋದಿಯವರ ಜನಪರ ಆಡಳಿತ ಹಾಗೂ ಪ್ರಧಾನ ಸೇವಕರಾಗಿ ಪಡೆದ ಜನಪ್ರಿಯತೆಯನ್ನು ಸಹಿಸದ ಕಾಂಗ್ರೆಸ್ ಪಕ್ಷವು, ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ವಿಫಲ ಪ್ರಯತ್ನ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕೆ ದೇಶದ ಚುನಾವಣಾ ವ್ಯವಸ್ಥೆ, ಇ.ವಿ.ಎಂ., ಸುಪ್ರೀಂ ಕೋರ್ಟ್ ಹಾಗೂ ಇತರೆ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆಯೇ ವಿಶ್ವಾಸವಿಲ್ಲದಂತಾಗಿದ್ದು, ಮೋದಿಯವರ ಜನಪ್ರಿಯತೆಯನ್ನು ಸಹಿಸದೆ ನಡೆಸುತ್ತಿರುವ ಷಡ್ಯಂತ್ರಗಳ ವಿರುದ್ಧ ಜನತೆ ಎಚ್ಚೆತ್ತುಕೊಂಡು ಕಾಂಗ್ರೆಸ್ ಅನ್ನು ಬುಡಸಮೇತ ಕಿತ್ತೊಗೆಯಲು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.






















