Home ಜಿಲ್ಲೆ ಕಲಬುರಗಿ ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ ಖಂಡನೀಯ: ರಮೇಶ ಪಡಶೆಟ್ಟಿ

ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ ಖಂಡನೀಯ: ರಮೇಶ ಪಡಶೆಟ್ಟಿ

ಚಿಂಚೋಳಿ: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರುತ್ತಿದೆ ಎಂದು ಬಿಜೆಪಿ ಮುಖಂಡ ರಮೇಶ ಪಡಶೆಟ್ಟಿ (ಐನಾಪೂರ) ತೀವ್ರವಾಗಿ ಖಂಡಿಸಿದ್ದಾರೆ.

ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ಹಲವು ಭರವಸೆಗಳನ್ನು ನೀಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ಅಗತ್ಯ ವಸ್ತುಗಳು ಹಾಗೂ ಸಾರ್ವಜನಿಕ ಸಾರಿಗೆ ಸೇವೆಗಳ ದರ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಈಗಾಗಲೇ ದಿನಬಳಕೆಯ ವಸ್ತುಗಳು, ವಿದ್ಯುತ್ ಹಾಗೂ ಇಂಧನ ಬೆಲೆ ಏರಿಕೆಯಿಂದ ಜನರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಹಾಲು ಮತ್ತು ಮೊಸರು ಪ್ರತಿಯೊಂದು ಕುಟುಂಬದ ದೈನಂದಿನ ಅಗತ್ಯ ವಸ್ತುಗಳಾಗಿದ್ದು, ಅವುಗಳ ಬೆಲೆ ಏರಿಕೆಯಿಂದ ಕುಟುಂಬಗಳ ಮಾಸಿಕ ಖರ್ಚು ಮತ್ತಷ್ಟು ಹೆಚ್ಚಾಗಲಿದೆ. ಮತ್ತೊಂದೆಡೆ, ಬಸ್ ಪ್ರಯಾಣ ದರ ಏರಿಕೆಯಿಂದ ವಿದ್ಯಾರ್ಥಿಗಳು, ರೈತರು, ಕೂಲಿ ಕಾರ್ಮಿಕರು ಹಾಗೂ ನಿತ್ಯ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಭರವಸೆ ನೀಡುತ್ತಿರುವ ಸರ್ಕಾರ, ಮತ್ತೊಂದೆಡೆ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಇದು ಯಾವ ರೀತಿಯ ಜನಪರ ಆಡಳಿತ ಎಂದು ಅವರು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಸಾರಿಗೆ ಜನರ ಅನುಕೂಲಕ್ಕಾಗಿ ಇರಬೇಕೇ ಹೊರತು ಅವರ ಆರ್ಥಿಕ ಹೊರೆಯಾಗಬಾರದು. ಆದ್ದರಿಂದ ರಾಜ್ಯ ಸರ್ಕಾರ ಜನಸಾಮಾನ್ಯರ ಸಂಕಷ್ಟವನ್ನು ಅರಿತು ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಸಾರ್ವಜನಿಕರೊಂದಿಗೆ ಧ್ವನಿ ಎತ್ತಲಾಗುವುದು ಎಂದು ರಮೇಶ ಪಡಶೆಟ್ಟಿ ಎಚ್ಚರಿಸಿದ್ದಾರೆ