
ಚಿಕ್ಕಬಳ್ಳಾಪುರ, ನ.೮- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯು ಉತ್ತಮ ಸಾಧನೆ ಮಾಡುತ್ತಿದ್ದು, ಯುವನಿಧಿ ಯೋಜನೆಯ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ಅವರು ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಲಾಗಿದೆ. ವಿಶೇಷವಾಗಿ ಯುವನಿಧಿ ಯೋಜನೆಯಡಿ ಅರ್ಹ ಪದವೀಧರರಿಗೆ ಸೌಲಭ್ಯ ಒದಗಿಸುವಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು.
ಯುವನಿಧಿ ಯೋಜನೆಯ ಕುರಿತು ಜಿಲ್ಲೆಯ ಎಲ್ಲ ಪದವಿ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಾಗಾರಗಳನ್ನು ಆಯೋಜಿಸಿ ವಿದ್ಯಾರ್ಥಿಗಳಿಗೆ ಯೋಜನೆಯ ಉದ್ದೇಶ, ಅರ್ಹತೆ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ೨೦೨೩ನೇ ಸಾಲಿನಿಂದ ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಸಮಗ್ರವಾಗಿ ಸಂಗ್ರಹಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸುವ ಮೂಲಕ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಫಲಾನುಭವಿಗಳಿಗೆ ವಿತರಿಸಲಾಗುತ್ತಿರುವ ೧೦ ಕೆ.ಜಿ. ಅಕ್ಕಿಯ ಬದಲಾಗಿ ಅಕ್ಕಿಯೊಂದಿಗೆ ಬೇಳೆ, ಅಡುಗೆ ಎಣ್ಣೆ, ಉಪ್ಪು ಸೇರಿದಂತೆ ವಿವಿಧ ಅಗತ್ಯ ದಿನಸಿ ಪದಾರ್ಥಗಳನ್ನು ಸೇರಿಸಿ ಒಟ್ಟು ೧೦ ಕೆ.ಜಿ. ತೂಕದ ದಿನಸಿ ಕಿಟ್ ವಿತರಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಕಿಟ್ಗಳಿಗೆ ’ಇಂದಿರಾ ಕಿಟ್ ಎಂದು ಹೆಸರಿಸಲಾಗಿದ್ದು, ಮುಂದಿನ ಜನವರಿ ತಿಂಗಳಿನಿಂದ ಫಲಾನುಭವಿಗಳಿಗೆ ವಿತರಣೆ ಆರಂಭಿಸಲು ಯೋಜಿಸಲಾಗಿದೆ ಎಂದು ಹೇಳಿದರು.
ಚಿಕ್ಕಬಳ್ಳಾಪುರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನಾರಾಯಣಸ್ವಾಮಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಶೇ.೯೭ರಷ್ಟು ಹಾಗೂ ಯುವನಿಧಿ ಯೋಜನೆಯಡಿ ಶೇ.೯೨ರಷ್ಟು ಪ್ರಗತಿ ಸಾಧಿಸಲಾಗಿದೆ. ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಗಳಡಿ ಶೇ.೧೦೦ರಷ್ಟು ಪ್ರಗತಿ ದಾಖಲಿಸಲಾಗಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ ತಾಲ್ಲೂಕಿನಲ್ಲಿ ಒಟ್ಟು ೩,೪೭,೩೧೦ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಈ ಪೈಕಿ ೩,೨೭,೭೫೬ ಗ್ರಾಹಕರು ಯೋಜನೆಯ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ಅನಿವಾರ್ಯ ಕಾರಣಗಳಿಂದ ಈವರೆಗೆ ಸೌಲಭ್ಯ ಪಡೆಯಲು ಸಾಧ್ಯವಾಗದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, ಅವರನ್ನೂ ಯೋಜನೆಗಳ ವ್ಯಾಪ್ತಿಗೆ ತರಲು ವಿಶೇಷ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ. ಯಾವುದೇ ಅರ್ಹ ಫಲಾನುಭವಿಯು ಸರ್ಕಾರದ ಸೌಲಭ್ಯದಿಂದ ವಂಚಿತರಾಗದಂತೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ, ಫಲಾನುಭವಿಗಳ ನೋಂದಣಿ, ಸೌಲಭ್ಯ ವಿತರಣೆಯಲ್ಲಿನ ಸಮಸ್ಯೆಗಳು ಹಾಗೂ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ಈ ಸಂದರ್ಭ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಗುಂಡ್ಲಮಂಡಿಕಲ್ ಶ್ರೀರಾಮರೆಡ್ಡಿ, ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.























