
ಮಂಡ್ಯ, ನ.೯- ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮಂಡ್ಯ ಜಿಲ್ಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿ ಭಾರಿ ನಷ್ಟ ಉಂಟಾಗಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮಹದೇವ್ ಅವರಿಗೆ ಸೇರಿದ ವಾಣಿಜ್ಯ ಕಟ್ಟಡದಲ್ಲಿದ್ದ ರವಿ ಎಂಬುವವರಿಗೆ ಸೇರಿದ ಪಾತ್ರೆ ಅಂಗಡಿಯಲ್ಲಿ ಇಂದು ಮುಂಜಾನೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಅಂಗಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು ಎನ್ನಲಾಗಿದೆ.
ನೋಡನೋಡುತ್ತಿದ್ದಂತೆಯೇ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, ಸಮೀಪದಲ್ಲಿದ್ದ ಮೆಡಿಕಲ್ ಸ್ಟೋರ್ ಹಾಗೂ ಪ್ರಾವಿಷನ್ ಸ್ಟೋರ್ಗೂ ಬೆಂಕಿ ತಗುಲಿದೆ. ಪರಿಣಾಮ ಮೂರು ಅಂಗಡಿಗಳಲ್ಲಿದ್ದ ಪಾತ್ರೆಗಳು, ಔಷಧಿಗಳು ಹಾಗೂ ದಿನಸಿ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಕಟ್ಟಡದ ಇತರೆ ಭಾಗಗಳಿಗೆ ಬೆಂಕಿ ಹರಡುವುದು ತಪ್ಪಿದೆ.
ಘಟನೆಯು ಕ್ಯಾತನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
























