Home ಜಿಲ್ಲೆ ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಬಸವರಾಜ

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಬಸವರಾಜ

ಸಂಜೆ ವಾಣಿ ವಾರ್ತೆ |
ಜಮಖಂಡಿ:ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಕಾನೂನು ಅರಿವು ಮೂಡಿಸುವುದರ ಜೊತೆಗೆ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಬಸವರಾಜ ಹೇಳಿದರು.

ನಗರದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಜಮಖಂಡಿ ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಹಾಗೂ ‘ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಜಾಥಾ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಮಕ್ಕಳೇ ಸಿಗರೇಟ್, ತಂಬಾಕು, ಮದ್ಯಪಾನ ಸೇರಿದಂತೆ ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಈ ಕುರಿತು ಅರಿವು ಮೂಡಿಸಿದರೆ ಅವರ ಮೂಲಕ ಪೋಷಕರು, ಕುಟುಂಬ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದರು.

ಮಕ್ಕಳಿಗೆ ಸಂವಿಧಾನವು ಹಲವು ಹಕ್ಕುಗಳನ್ನು ನೀಡಿದೆ. ಶಿಕ್ಷಣದ ಹಕ್ಕು, ಜೀವಿಸುವ ಹಕ್ಕು ಹಾಗೂ ಶೋಷಣೆಯಿಂದ ರಕ್ಷಣೆ ಪಡೆಯುವ ಹಕ್ಕು ಪ್ರತಿಯೊಬ್ಬ ಮಗುವಿಗೂ ಇದೆ. 14 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ಯೋಗಗಳಲ್ಲಿ ತೊಡಗಿಸುವುದನ್ನು ಸಂವಿಧಾನದ 24ನೇ ವಿಧಿ ನಿಷೇಧಿಸಿದೆ. ಆದರೂ ಬಾಲಕಾರ್ಮಿಕ ಪದ್ಧತಿ ಹಾಗೂ ಮಕ್ಕಳ ಮೇಲಿನ ಶೋಷಣೆ ಪ್ರಕರಣಗಳು ಕಂಡುಬರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಳ್ಳಸಾಗಣೆ ಹಾಗೂ ಮಾದಕ ದ್ರವ್ಯಗಳ ಮಾರಾಟ ಮತ್ತು ಸಾಗಣೆಯಲ್ಲಿ ಮಕ್ಕಳನ್ನು ಬಳಸಿಕೊಳ್ಳುವ ಪ್ರಕರಣಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಅಪರಿಚಿತರು ನೀಡುವ ಯಾವುದೇ ವಸ್ತು ಅಥವಾ ಚೀಲಗಳನ್ನು ಪರಿಶೀಲಿಸದೆ ತೆಗೆದುಕೊಂಡು ಹೋಗಬಾರದು. ಇಂತಹ ಚಟುವಟಿಕೆಗಳಿಂದ ದೂರವಿದ್ದು, ಯಾವುದೇ ಸಮಸ್ಯೆ ಎದುರಾದರೂ ಪೋಷಕರು ಹಾಗೂ ಶಿಕ್ಷಕರ ಗಮನಕ್ಕೆ ತರಬೇಕು ಎಂದು ಮಕ್ಕಳಿಗೆ ತಿಳಿಸಿದರು.

ಮಾದಕ ದ್ರವ್ಯಗಳ ಸೇವನೆಯಿಂದ ವ್ಯಕ್ತಿಯ ಆರೋಗ್ಯ ಮಾತ್ರವಲ್ಲದೆ ಇಡೀ ಕುಟುಂಬದ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯೂ ಹದಗೆಡುತ್ತದೆ. ಆದ್ದರಿಂದ ಮಕ್ಕಳು ತಮ್ಮ ಮನೆ ಹಾಗೂ ಶಾಲೆಗಳಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ರಾಯಭಾರಿಗಳಾಗಬೇಕು ಎಂದರು.

ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು ಹಾಗೂ ಮಧ್ಯಸ್ಥಿಕೆ ಮೂಲಕ ವಿವಾದಗಳನ್ನು ಬಗೆಹರಿಸಿಕೊಳ್ಳುವ ಅವಕಾಶಗಳಿವೆ. ಸಾರ್ವಜನಿಕರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ನ್ಯಾಯಾಲಯಗಳಲ್ಲಿ ಪ್ರಕರಣಗಳು ಹೆಚ್ಚಾಗುವುದಕ್ಕಿಂತ ಮುಂಚೆಯೇ ಕಾನೂನು ಅರಿವು ಮೂಡಿಸಿ ಸಮಸ್ಯೆಗಳನ್ನು ತಡೆಗಟ್ಟುವುದು ಮುಖ್ಯವಾಗಿದೆ ಎಂದು ಹೇಳಿದರು.

ನ್ಯಾಯವಾದಿ ಎಸ್.ಬಿ. ಕಾಳೆ ಮಾತನಾಡಿ, ಉತ್ತಮ ಆರೋಗ್ಯ ಮತ್ತು ಸದೃಢ ದೇಹಕ್ಕಾಗಿ ಪೌಷ್ಟಿಕ ಆಹಾರ ಸೇವನೆ ಅಗತ್ಯ. ತಂಬಾಕು, ಗುಟ್ಕಾ ಹಾಗೂ ಇತರ ದುಶ್ಚಟಗಳು ದೇಹದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತವೆ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್. ಸಾವಳಗಿ ಮಾತನಾಡಿ, ಮಕ್ಕಳ ಮೇಲೆ ಯಾವುದೇ ರೀತಿಯ ಶೋಷಣೆ ನಡೆಯದಂತೆ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕಿದೆ. ಮಕ್ಕಳು ಬಾಲಕಾರ್ಮಿಕ ಪದ್ಧತಿ, ಲೈಂಗಿಕ ಶೋಷಣೆ, ಧೂಮಪಾನ ಹಾಗೂ ಮದ್ಯಪಾನದಂತಹ ದುಶ್ಚಟಗಳಿಂದ ದೂರವಿದ್ದು ಉತ್ತಮ ಶಿಕ್ಷಣ ಪಡೆದು ದೇಶದ ಭವಿಷ್ಯದ ಪ್ರಜೆಗಳಾಗಿ ಬೆಳೆಯಬೇಕು ಎಂದರು.

ಇದಕ್ಕೂ ಮುನ್ನ ‘ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಜಾಥಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲಾ ಆವರಣದಿಂದ ಆರಂಭವಾದ ಜಾಥಾವು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿತು. ವಿದ್ಯಾರ್ಥಿಗಳು ಮಾದಕ ದ್ರವ್ಯಗಳನ್ನು ತ್ಯಜಿಸಿ, ಆರೋಗ್ಯಕರ ಜೀವನ ನಡೆಸುವಂತೆ ಘೋಷಣೆಗಳ ಮೂಲಕ ಜನರಲ್ಲಿ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕ ಸಂಘಮೇಶ ಬಿಜಾಪುರ ಸ್ವಾಗತಿಸಿ ವಂದಿಸಿದರು.

ಈ ಸಂದರ್ಭದಲ್ಲಿ ಪಿಎಸ್‌ಐ ಅನೀಲ ಕುಂಬಾರ, ಪಿಎಸ್‌ಐ ಶಿವಾನಂದ ಮನ್ನಿಕೇರಿ, ಸಿಡಿಪಿಒ ಆನಂದ ಪಿ., ಕಾರ್ಮಿಕ ನಿರೀಕ್ಷಕ ರಮೇಶ ವಾಂಗಿ, ಡಬ್ಲ್ಯೂವೈ ಭಜಂತ್ರಿ ಸೇರಿದಂತೆ ಶಿಕ್ಷಕರು, ನ್ಯಾಯವಾದಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.