Home ಜಿಲ್ಲೆ ಜನವಾಡ ಕ್ಷೇತ್ರದ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿ ಬದಲಿಸದಂತೆ ಮಹೇಂದ್ರಕುಮಾರ ಆಗ್ರಹ

ಜನವಾಡ ಕ್ಷೇತ್ರದ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿ ಬದಲಿಸದಂತೆ ಮಹೇಂದ್ರಕುಮಾರ ಆಗ್ರಹ

ಬೀದರ್: ಜಿಲ್ಲೆಯ ಜನವಾಡ ಕ್ಷೇತ್ರಕ್ಕೆ ಕಲ್ಪಿಸಿರುವ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯನ್ನು ಯಾವುದೇ ಕಾರಣಕ್ಕೂ ಬದಲಾಯಿಸದೆ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು. ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸಿದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿಶ್ವನಾಯಕ ಡಾ. ಬಿ.ಆರ್ ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಮಹೇಂದ್ರಕುಮಾರ ಹೊಸಮನಿ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 30-35 ವರ್ಷಗಳಿಂದ ಸಾಮಾನ್ಯ ಕ್ಷೇತ್ರವಾಗಿದ್ದ ಜನವಾಡ ಕ್ಷೇತ್ರವು ಪ್ರಸ್ತುತ ಪರಿಶಿಷ್ಟ ಜಾತಿ ಮಹಿಳೆಯರಿಗೆ ಮೀಸಲಾಗಿದೆ. ಆದರೆ, ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಈ ಮೀಸಲಾತಿಯನ್ನು ರದ್ದುಗೊಳಿಸಿ ಮತ್ತೆ ಸಾಮಾನ್ಯ ಕ್ಷೇತ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.
ಕ್ಷೇತ್ರ ಸಾಮಾನ್ಯವಾಗಿದ್ದ ಸಂದರ್ಭದಲ್ಲಿ ದಲಿತ ಸಮುದಾಯದವರು ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ಇದೀಗ ಪರಿಶಿಷ್ಟ ಜಾತಿ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ದೊರೆಯುವ ಅವಕಾಶ ಸಿಕ್ಕಿರುವಾಗ ಅದನ್ನು ಕಸಿದುಕೊಳ್ಳಲು ಮುಂದಾಗಿರುವುದು ಖಂಡನೀಯ. ಇದು ದಲಿತ ಸಮುದಾಯಕ್ಕೆ, ವಿಶೇಷವಾಗಿ ದಲಿತ ಮಹಿಳೆಯರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತರ ರಾಜಕೀಯ ಅಸ್ತಿತ್ವಕ್ಕೆ ಧಕ್ಕೆ: ಬೀದರ್ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಪರಿಗಣಿಸಿದರೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ದೊರೆಯುತ್ತಿಲ್ಲ. ನಿಯಮಾನುಸಾರ ಮೂರು ಸ್ಥಾನಗಳು ದೊರೆಯಬೇಕಿತ್ತು. ಆದರೆ, ಕೇವಲ ಒಂದು ಸ್ಥಾನ ಮಾತ್ರ ಲಭ್ಯವಾಗಿದ್ದು, ಅದನ್ನೂ ಸಾಮಾನ್ಯ ಕ್ಷೇತ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ದೂರಿದರು.
ಶಾಸಕ, ಸಂಸದ ಹಾಗೂ ವಿಧಾನಪರಿಷತ್ ಸದಸ್ಯ ಸ್ಥಾನಗಳಲ್ಲಿ ದಲಿತರಿಗೆ ಸೂಕ್ತ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ದೊರೆತಿರುವ ಮೀಸಲಾತಿಯನ್ನೂ ಕಸಿದುಕೊಂಡರೆ ದಲಿತರು ರಾಜಕೀಯವಾಗಿ ಬೆಳೆಯುವುದು ಹೇಗೆ? ದಲಿತರು ಕೇವಲ ಮತ ಚಲಾಯಿಸಲು ಮತ್ತು ಕೂಲಿ ಕೆಲಸ ಮಾಡಲು ಮಾತ್ರ ಸೀಮಿತವಾಗಬೇಕೇ? ಎಂದು ಪ್ರಶ್ನಿಸಿದರು.
ದಲಿತ ಮಹಿಳೆಯರಿಗೆ ಅನ್ಯಾಯ: ದಲಿತ ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದನ್ನು ಸಹಿಸದ ಕೆಲವರು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಜನಪ್ರತಿನಿಧಿಗಳು, ಪರಿಶಿಷ್ಟ ಜಾತಿ ಮಹಿಳೆಯರಿಗೆ ದೊರೆತಿರುವ ರಾಜಕೀಯ ಅವಕಾಶವನ್ನು ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಜನವಾಡ ಕ್ಷೇತ್ರದ ಮೀಸಲಾತಿ ಬದಲಾವಣೆಗಾಗಿ ಕೆಲವರು ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಕಾನೂನುಬದ್ಧವಾಗಿ ಕಲ್ಪಿಸಿರುವ ಮೀಸಲಾತಿಯನ್ನು ರಾಜಕೀಯ ಒತ್ತಡಕ್ಕೆ ಮಣಿದು ಬದಲಾಯಿಸಬಾರದು. ಮೀಸಲಾತಿ ವ್ಯಾಪ್ತಿಗೆ ಒಳಪಡುವ ಎಲ್ಲ ಅರ್ಹ ಮಹಿಳಾ ಅಭ್ಯರ್ಥಿಗಳಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಮತಬ್ಯಾಂಕ್ ರಾಜಕಾರಣಕ್ಕೆ ಆಕ್ರೋಶ: ಚುನಾವಣೆ ಸಂದರ್ಭದಲ್ಲಿ ದಲಿತರ ಮತಗಳನ್ನು ಪಡೆಯುವ ರಾಜಕೀಯ ಪಕ್ಷಗಳು, ಅಧಿಕಾರಕ್ಕೆ ಬಂದ ನಂತರ ಅವರ ಹಕ್ಕುಗಳನ್ನು ಕಡೆಗಣಿಸುತ್ತಿವೆ. ಸರ್ಕಾರ ರಚನೆಯಲ್ಲಿ ದಲಿತ ಸಮುದಾಯದ ಮತಗಳು ಪ್ರಮುಖ ಪಾತ್ರ ವಹಿಸಿದ್ದರೂ, ರಾಜಕೀಯ ಪ್ರಾತಿನಿಧ್ಯದ ವಿಚಾರದಲ್ಲಿ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದಲಿತ ಸಮುದಾಯ ಈಗ ರಾಜಕೀಯವಾಗಿ ಜಾಗೃತವಾಗಿದೆ. ಸಮುದಾಯದ ಹಕ್ಕುಗಳನ್ನು ನಿರ್ಲಕ್ಷಿಸುವ ಜನಪ್ರತಿನಿಧಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ತಕ್ಕ ಉತ್ತರ ನೀಡಲಾಗುವುದು. ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುವ ಮನೋಭಾವ ಬದಲಾಗಬೇಕು ಎಂದು ಹೊಸಮನಿ ಹೇಳಿದರು.
ಸರ್ಕಾರಕ್ಕೆ ಸಂಗಮೇಶ ಭಾವಿದೊಡ್ಡಿ ಮನವಿ:
ಸಾಮಾಜಿಕ ಹೋರಾಟಗಾರ ಸಂಗಮೇಶ ಭಾವಿದೊಡ್ಡಿ ಮಾತನಾಡಿ, ಜನವಾಡ ಕ್ಷೇತ್ರದ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸುವಂತೆ ಕೋರಿ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಂಬಂಧಪಟ್ಟ ಶಾಸಕರು, ಸಚಿವರು ಮತ್ತು ಚುನಾವಣಾ ಅಧಿಕಾರಿಗಳು ಎಲ್ಲ ಸಮುದಾಯಗಳ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯಯುತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಉಗ್ರ ಹೋರಾಟ: ರಮೇಶ ಪಾಸ್ವಾನ್ ಎಚ್ಚರಿಕೆ:
ಡಾ.ಅಂಬೇಡ್ಕರ್ ಪ್ರಜಾ ಸೇನೆ ರಾಜ್ಯ ಕಾರ್ಯದರ್ಶಿ ರಮೇಶ ಪಾಸ್ವಾನ್ ಮಾತನಾಡಿ, ಜನವಾಡ ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಮುಂದಾದರೆ ಸುಮ್ಮನೆ ಕೂರುವುದಿಲ್ಲ. ದಲಿತ ಸಂಘಟನೆಗಳು ಹಾಗೂ ಸಮುದಾಯದ ಮುಖಂಡರನ್ನು ಒಗ್ಗೂಡಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು. ಅಗತ್ಯವಿದ್ದರೆ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧವೂ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾಧ್ಯಕ್ಷ ಸಂದೀಪ ಕಾಂಟೆ, ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಸಾಯಿ ಶಿಂಧೆ, ಬಹುಜನ ಯುತ್ ಪೆಂಥರ್ ಜಿಲ್ಲಾಧ್ಯಕ್ಷ ಪುಟ್ಟರಾಜ ದೀನೆ, ದಲಿತ ಯುವ ಮುಖಂಡ ಸಂತೋಷ ಸಂಗಮ ಹಾಗೂ ಇತರರು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.