
ಬೆಂಗಳೂರು,ನ.೧೭-ವೇಗವಾಗಿ ಹೋನಾಲ್ವರಗುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದು ಸಪ್ತಗಿರಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ವಿದ್ಯಾರ್ಥಿನಿಯರಾದ ಗಾನವಿ (೨೦) ಹಾಗೂ ವೈಷ್ಣವಿ (೨೦) ಮೃತಪಟ್ಟವರು. ಇಬ್ಬರು ಯುವಕರು ಹಾಗೂ ನಾಲ್ವರು ಯುವತಿಯರು ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಇಂದು ಮುಂಜಾನೆ ಕುಣಿಗಲ್ಗೆ ಆಕ್ಟಿವಿಟಿ ಕ್ಲಾಸ್ಗೆ ಕಾರಿನಲ್ಲಿ ತೆರಳುತ್ತಿದ್ದರು.
ವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಇಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಿಬ್ಬರಿಗೆ ನೆಲಮಂಗಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.
ನಿದ್ದೆ ಮಂಪರಿನಲ್ಲಿ ಅಪಘಾತ:
ಚಾಲಕನಿಗೆ ನಿದ್ದೆ ಮಂಪರು ಆವರಿಸಿದ್ದರಿಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಕುದೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.




















