Home ಜಿಲ್ಲೆ ಬೆಂಗಳೂರು ಕಾರ್ಮಿಕರ ಸಂಘದಿಂದ ಅದ್ದೂರಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಕಾರ್ಮಿಕರ ಸಂಘದಿಂದ ಅದ್ದೂರಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಂಗಳೂರು, ನ.೧೮-ಚಾಮುಂಡೇಶ್ವರಿ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಆರೋಗ್ಯ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಾಯಿತು.

ಸಪ್ತಗಿರಿ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಹೃದಯರೋಗ, ನರರೋಗ, ಮೂತ್ರಪಿಂಡ ಸಂಬಂಧಿತ ಕಾಯಿಲೆಗಳು, ಕ್ಯಾನ್ಸರ್, ಕೀಲುನೋವು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಪಾಸಣೆ ನಡೆಸಲಾಯಿತು. ಸಾರ್ವಜನಿಕರು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.

ಇದರ ಜೊತೆಗೆ ರಕ್ತದಾನ ಶಿಬಿರ ಹಾಗೂ ಕಣ್ಣಿನ ತಪಾಸಣಾ ಶಿಬಿರವನ್ನೂ ಆಯೋಜಿಸಲಾಗಿತ್ತು. ರಕ್ತದಾನದ ಮಹತ್ವ ಸಾರುವ ಉದ್ದೇಶದಿಂದ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಕಣ್ಣಿನ ಆರೋಗ್ಯದ ಬಗ್ಗೆಯೂ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದ ಮತ್ತೊಂದು ವಿಶೇಷವಾಗಿ ಕಾರ್ಮಿಕರಿಗೆ ಉಚಿತ ಕಿಟ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಬಿ.ಎಸ್‌. ಸುರೇಶ್, ಮಾಜಿ ಕಾರ್ಪೊರೇಟರ್ ಅಬ್ದುಲ್ ವಾಜೀದ್, ಚಾಮುಂಡೇಶ್ವರಿ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮುರುಗನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಕರ್ನಾಟಕ ರಾಜ್ಯೋತ್ಸವದ ಸಂಭ್ರಮದ ಜೊತೆಗೆ ಆರೋಗ್ಯ ತಪಾಸಣೆ, ರಕ್ತದಾನ, ಕಣ್ಣಿನ ತಪಾಸಣೆ ಹಾಗೂ ಕಾರ್ಮಿಕರಿಗೆ ಉಚಿತ ಕಿಟ್ ವಿತರಿಸುವ ಮೂಲಕ ಸಂಘವು ಸಮಾಜಮುಖಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.