
ಅಪಾರ ಆಸ್ತಿ ಪಾಸ್ತಿ ಪತ್ತೆ
ಬೆಂಗಳೂರು, ನ.೧೮- ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಮುಂಜಾನೆಯಿಂದ ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳು ಮನೆ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಹಾಸನ, ಚಿತ್ರದುರ್ಗ, ಬಾಗಲಕೋಟೆ, ಬೀದರ್, ಹುಬ್ಬಳ್ಳಿ ಹಾಗೂ ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆಸ್ತಿ-ಪಾಸ್ತಿ, ಬ್ಯಾಂಕ್ ಖಾತೆಗಳು, ಹಣಕಾಸು ವ್ಯವಹಾರಗಳು ಹಾಗೂ ಇತರ ದಾಖಲೆಗಳನ್ನು ಪರಿಶೀಲಿಸುತ್ತಿವೆ. ದಾಳಿಯ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಆಸ್ತಿ ದಾಖಲೆಗಳು ಪತ್ತೆಯಾಗಿವೆ.
ಶಾಲಾ ಬ್ಯಾಗ್ನಲ್ಲಿ ಹಣ ಪತ್ತೆ:
ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್ಎಫ್ಒ) ಹೇಮಂತ್ ಕುಮಾರ್ ಅವರಿಗೆ ಸೇರಿದ ಹಾಸನ ನಗರದ ಚಿಕ್ಕಹೊನ್ನೇನಹಳ್ಳಿ, ಕುವೆಂಪುನಗರ, ದೊಡ್ಡಮಗ್ಗೆ ಹಾಗೂ ಆಲೂರಿನ ಗುತ್ತಿಗೆದಾರ ಹರೀಶ್ ಅವರ ಮನೆ ಸೇರಿದಂತೆ ಐದು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ದಾಳಿ ವೇಳೆ ಅಧಿಕಾರಿಯ ಮಗನ ಶಾಲಾ ಬ್ಯಾಗ್ ಹಾಗೂ ಪ್ಯಾಂಟ್ ಜೇಬಿನಲ್ಲಿ ಹಣ ಇಟ್ಟು ಕಳುಹಿಸಲು ಯತ್ನಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ೫೦೦ ರೂ. ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾಗಿದೆ ಎನ್ನಲಾಗಿದೆ. ಈ ಸಂಬಂಧ ಅಧಿಕಾರಿಗಳು ಹೆಚ್ಚಿನ ವಿಚಾರಣೆ ಹಾಗೂ ಪರಿಶೀಲನೆ ಮುಂದುವರಿಸಿದ್ದಾರೆ.
ಜಿಲ್ಲಾ ಸರ್ಜನ್ ಗೆ ಶಾಕ್:
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ರವೀಂದ್ರ ಹಾಗೂ ತೂಕ ಮತ್ತು ಅಳತೆ ಇಲಾಖೆಯ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಗೆ ಸೇರಿದ ಮನೆ, ಕಚೇರಿ ಸೇರಿದಂತೆ ಒಟ್ಟು ಹತ್ತು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ಹಾಗೂ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಚಳ್ಳಕೆರೆ ರಸ್ತೆಯಲ್ಲಿರುವ ಡಾ. ರವೀಂದ್ರ ಅವರ ನಿವಾಸ ಹಾಗೂ ಅವರಿಗೆ ಸೇರಿದ ಅಕ್ಷಯ ಗ್ಲೋಬಲ್ ಆಸ್ಪತ್ರೆಯಲ್ಲಿ ದಾಖಲೆಗಳನ್ನು ಪರಿಶೀಲಿಸಲಾಗಿದೆ. ವಿದ್ಯಾನಗರದಲ್ಲಿರುವ ಇನ್ಸ್ಪೆಕ್ಟರ್ ವೆಂಕಟೇಶ್ ಅವರ ನಿವಾಸ ಹಾಗೂ ಮಹಾಲಕ್ಷ್ಮಿ ನಿವಾಸದ ಮೇಲೂ ದಾಳಿ ನಡೆದಿದೆ.
ಪರಿಶೀಲನೆ ವೇಳೆ ನಿವೇಶನಗಳು, ವಾಣಿಜ್ಯ ಕಟ್ಟಡಗಳು, ಕೃಷಿ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳು, ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.
ಹಿಪ್ಪರಿಗಿಗೆ ಗಾಳ:
ಈ ಹಿಂದೆ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಜಮಖಂಡಿ ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ಸಂಜೀವ ಹಿಪ್ಪರಗಿ ಅವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಜಮಖಂಡಿಯ ವಿಜಯನಗರ ಬಡಾವಣೆಯಲ್ಲಿರುವ ಅವರ ನಿವಾಸ ಹಾಗೂ ಮೈಗೂರು ರಸ್ತೆಯಲ್ಲಿರುವ ಅವರ ತಂದೆಯ ಮನೆಯ ಮೇಲೆ ಏಕಕಾಲಕ್ಕೆ ಶೋಧ ನಡೆಸಲಾಗಿದೆ.
ಬಾಗಲಕೋಟೆ ಲೋಕಾಯುಕ್ತ ಎಸ್ಪಿ ಮಹಾಲಿಂಗ ನಂದಗಾವಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಬಾಗಲಕೋಟೆ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳು ಜಂಟಿಯಾಗಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಾಂಶುಪಾಲರಿಗೆ ಗ್ರಿಲ್:
ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ರಾಜಕುಮಾರ್ ಮಾಲಗೆ ಅವರಿಗೆ ಸೇರಿದ ಗುರುನಗರದ ನಿವಾಸ ಹಾಗೂ ಕಚೇರಿ ಸೇರಿದಂತೆ ಐದು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಹನುಮಂತರಾಯ ನೇತೃತ್ವದ ತಂಡ ಶೋಧ ಕಾರ್ಯಾಚರಣೆ ನಡೆಸಿದ್ದು, ಅಧಿಕಾರಿಯ ಆಸ್ತಿ-ಪಾಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಚಾಲಕನಿಗೂ ಗಾಳ:
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕ ಕಮ್ ನಿರ್ವಾಹಕ ಷಡಕ್ಷರಯ್ಯ ಅವರ ಹುಬ್ಬಳ್ಳಿಯ ಗಾಂಧಿನಗರದಲ್ಲಿರುವ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ಆಸ್ತಿ-ಪಾಸ್ತಿ ಹಾಗೂ ಆದಾಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ.
ಮೈಸೂರಿನಲ್ಲಿ ದಾಳಿ:
ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಭವನದಲ್ಲಿ ಆರ್ಎಫ್ಒ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರೇಂದ್ರ ಅವರಿಗೆ ಸೇರಿದ ಕಚೇರಿ ಹಾಗೂ ರಾಂಪುರದ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೆಚ್.ಡಿ. ಕೋಟೆಯಲ್ಲಿರುವ ಅವರ ಸಹೋದರನ ನಿವಾಸದಲ್ಲೂ ಶೋಧ ನಡೆಸಲಾಗಿದೆ.
ಚಾಮರಾಜನಗರ ಲೋಕಾಯುಕ್ತ ಇನ್ಸ್ಪೆಕ್ಟರ್ ಸುಧಾಕರ್ ನೇತೃತ್ವದ ತಂಡ ಬೆಳಗ್ಗೆ ೬ ಗಂಟೆಯಿಂದಲೇ ಕಾರ್ಯಾಚರಣೆ ನಡೆಸುತ್ತಿದೆ. ಆಸ್ತಿ ಪತ್ರಗಳು, ಬ್ಯಾಂಕ್ ಖಾತೆಗಳ ವಿವರಗಳು, ಚಿನ್ನಾಭರಣ ಹಾಗೂ ನಗದು ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದಿರುವ ಈ ಕಾರ್ಯಾಚರಣೆಯಲ್ಲಿ ಒಟ್ಟು ಎಷ್ಟು ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂಬುದು ಸಂಪೂರ್ಣ ಪರಿಶೀಲನೆಯ ಬಳಿಕ ತಿಳಿದುಬರಬೇಕಿದೆ. ಲೋಕಾಯುಕ್ತ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದೆ.






















