
ಕಲಬುರಗಿ,ನ.19: ಕೈಗಾರಿಕೆಗಳ ಬೇಡಿಕೆಅನುಗುಣವಾಗಿ ಯುವಕ ಯುವಕಿಯರಿಗೆ ಉದ್ಯೋಗ ಕೌಶಲ್ಯ ನೀಡಬೇಕಿದೆ. ಈ ನಿಟ್ಟಿನಲ್ಲಿ ಕೌಶಲ್ಯ ಕರ್ನಾಟಕ ಸೇರಿದಂತೆ ವಿವಿಧ ಮಹತ್ವಾಕಾಂಕ್ಷಿ ಯೋಜನೆಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ನಿಗದಿತ ಗುರಿಯೊಂದಿಗೆ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಸೂಚನೆ ನೀಡಿದರು.
ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗಾರಿಕಾ ವಲಯಗಳ ಜತೆ ಸಮನ್ವಯ ಸಾಧಿಸುವುದು ಅತಿಮುಖ್ಯವಾಗಿದೆ ಎಂದು ಅದಿಕಾರಿಗಳಿಗೆ ಸೂಚ್ಯವಾಗಿ ತಿಳಿಸಿದರು.
ಕೆಲವು ಕೈಗಾರಿಕೆಗಳು ಮತ್ತು ಸಂಸ್ಥೆಗಳು ಸ್ಥಳೀಯವಾಗಿ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲದಿರುವ ಬಗ್ಗೆ ಅಪವಾದ ಇದೆ. ಅಂತಹ ಸಂಸ್ಥೆಗಳೊಂದಿಗೆ ಅಧಿಕಾರಿಗಳು ನೇರವಾಗಿ ಸಭೆ ನಡೆಸಿ, ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಹಾಗೂ ಅಪ್ರೆಂಟಿಸ್ಶಿಪ್ ಸಿಗುವಂತೆ ನೋಡಿಕೊಳ್ಳವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದು ಡಿ.ಸಿ. ತಿಳಿಸಿದರು.
ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ತರಬೇತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಕೈಗಾರಿಕೆ, ತರಬೇತಿ ಹಾಗೂ ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳ್ಳಿ, ಉಪನಿರ್ದೇಶಕಿ ಡಾ. ರುಬೀನಾ ಪರ್ವೀನ್, ಸಹಾಯಕ ನಿರ್ದೇಶಕ ಟಿ.ಕೆ. ಯರಗಲ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗೂಬಾಯಿ ಸೂರ್ಯವಂಶಿ, ಡಿಡಿಪಿಐ ಚೆನ್ನಬಸಪ್ಪ ಮುಧೋಳ, ಕೆಕೆಸಿಸಿಐ ಅಧ್ಯಕ್ಷ ಶರಣಪ್ಪ ಪಪ್ಪಾ, ಕಾರ್ಯದರ್ಶಿ ಶಿವರಾಜ ಇಂಗಿನಶೆಟ್ಟಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕಿ ಭಾರತಿ ಎಸ್.ಎಸ್ ಸೇರಿದಂತೆ ಸರ್ಕಾರಿ ಐ.ಟಿ.ಐ ಮತ್ತು ಜಿ.ಟಿ.ಟಿ.ಸಿ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಇತರೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




















