Home ಜಿಲ್ಲೆ ಮೈಸೂರು ಮೀಸಲಾತಿ ಹೆಚ್ಚಿಸಲು ಪ್ರಧಾನಿ ಮನವೊಲಿಸಲು ಯದುವೀರ್‍ಗೆ ಮನವಿ

ಮೀಸಲಾತಿ ಹೆಚ್ಚಿಸಲು ಪ್ರಧಾನಿ ಮನವೊಲಿಸಲು ಯದುವೀರ್‍ಗೆ ಮನವಿ

ಸಂಜೆವಾಣಿ ವಾರ್ತೆ
ತಿ.ನರಸೀಪುರ ನ.20-
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಷಯ ಪ್ರಸ್ತಾಪಿಸಿ ಸಮುದಾಯದ ಪರವಾಗಿ ಧ್ವನಿ ಎತ್ತುವಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ವತಿಯಿಂದ ಮನವಿ ಸಲ್ಲಿಸಲಾಗಿದೆ ಎಂದು ಒಕ್ಕೂಟದ ಮೈಸೂರು ಜಿಲ್ಲಾಧ್ಯಕ್ಷ ತಾಯೂರು ಪ್ರಕಾಶ್ ತಿಳಿಸಿದರು.
ಸಂಸದರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಿ, ಒಟ್ಟು ಶೇ.56ರಷ್ಟು ಮೀಸಲಾತಿ ಕಲ್ಪಿಸುವ ಉದ್ದೇಶದ 2023ರ ಕರ್ನಾಟಕ ಅಧಿನಿಯಮ ಸಂಖ್ಯೆ 1 ಅನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರ್ಪಡೆಗೊಳಿಸಿ ಸಂವಿಧಾನಾತ್ಮಕ ರಕ್ಷಣೆ ನೀಡಬೇಕಿದೆ. ಈ ಸಂಬಂಧ ರಾಜ್ಯ ಸರ್ಕಾರ 2023ರ ಮಾರ್ಚ್ 23ರಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಈವರೆಗೆ ಅಂತಿಮ ತೀರ್ಮಾನವಾಗಿಲ್ಲ ಎಂದರು.


ಮೀಸಲಾತಿ ಹೆಚ್ಚಳದ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ಬಳಿಕ ಹೈಕೋರ್ಟ್ ಕಾಯ್ದೆಯನ್ನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‍ನಲ್ಲಿ ವಿಶೇಷ ಅನುಮತಿ ಮೇಲ್ಮನವಿ ಸಲ್ಲಿಸಿದೆ.
ಪ್ರಕರಣದ ವಿಚಾರಣೆ ಬಾಕಿಯಿರುವುದರಿಂದ ಸಮುದಾಯದ ಮೀಸಲಾತಿ ಹಕ್ಕುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ತಾಯೂರು ಪ್ರಕಾಶ್ ಒತ್ತಾಯಿಸಿದರು.


ಒಕ್ಕೂಟದ ಮನವಿಗೆ ಸಕಾರಾತ್ಮಕ ವಾಗಿ ಸ್ಪಂದಿಸಿದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಪ್ರಧಾನ ಮಂತ್ರಿಗಳ ಗಮನಕ್ಕೆ ಈ ವಿಷಯ ವನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ಸಮುದಾಯದ ನ್ಯಾಯಯುತ ಬೇಡಿಕೆಗಳ ಪರವಾಗಿ ಬಿಜೆಪಿ ಸದಾ ನಿಲ್ಲಲಿದೆ ಎಂದು ತಿಳಿಸಿದ್ದಾರೆ ಎಂದು ತಾಯೂರು ಪ್ರಕಾಶ್ ಹೇಳಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ್ ನಾಯಕ,ಹುಣಸೂರು ಪ್ರಭಕರ್,ಬಸವಣ್ಣ, ರಾಜು ಮಾರ್ಕೆಟ್, ಮಂಜುನಾಥ್, ರಂಗಪ್ಪ,ಸುಬ್ರಹ್ಮಣ್ಯ ಮತ್ತಿತರರು ಹಾಜರಿದ್ದರು.