
ಸಂಜೆವಾಣಿ ನ್ಯೂಸ್
ಮೈಸೂರು: ನ.20: ಸಾರ್ವಜನಿಕರಿಗೆ ತ್ವರಿತ ಹಾಗೂ ಸುಲಭವಾಗಿ ನ್ಯಾಯ ಒದಗಿಸುವ ಉದ್ದೇಶದಿಂದ ಡಿಸೆಂಬರ್ 12ರಂದು ಮೈಸೂರು ಜಿಲ್ಲೆಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಯಂತ್ ಕುಮಾರ್ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿ ಮಾಡಿಕೊಳ್ಳಬಹುದಾದ ಪ್ರಕರಣಗಳು ಹಾಗೂ ನ್ಯಾಯಾಲಯಕ್ಕೆ ದಾಖಲಾಗುವ ಮುನ್ನದ ಪ್ರಕರಣಗಳನ್ನು ಪರಸ್ಪರ ಮಾತುಕತೆ ಮತ್ತು ಸಂಧಾನದ ಮೂಲಕ ಇತ್ಯರ್ಥಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.
ಲೋಕ ಅದಾಲತ್ನಲ್ಲಿ ಚೆಕ್ ಅಮಾನ್ಯ ಪ್ರಕರಣಗಳು (ಎನ್ಐ ಕಾಯ್ದೆ ಕಲಂ 138), ಬ್ಯಾಂಕ್ ವಸೂಲಾತಿ ಪ್ರಕರಣಗಳು, ಕಾರ್ಮಿಕ ವಿವಾದಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ವಿದ್ಯುತ್ ಮತ್ತು ನೀರಿನ ಬಿಲ್ಗಳಿಗೆ ಸಂಬಂಧಿಸಿದ ವಿವಾದಗಳು, ವೈವಾಹಿಕ ಪ್ರಕರಣಗಳು ಸೇರಿದಂತೆ ರಾಜಿ ಮಾಡಿಕೊಳ್ಳಬಹುದಾದ ಸಿವಿಲ್ ಹಾಗೂ ಇತರ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ. ಅಲ್ಲದೆ, ಗ್ರಾಹಕರ ವಿವಾದಗಳು, ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳು ಹಾಗೂ ಇತರ ಪೂರ್ವ ವ್ಯಾಜ್ಯ ಪ್ರಕರಣಗಳನ್ನೂ ಸಂಧಾನದ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಪೆÇಲೀಸ್ ಇಲಾಖೆಯಲ್ಲಿ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ವಿಶೇಷ ರಿಯಾಯಿತಿ ನೀಡುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ವಿಶೇಷ ರಿಯಾಯಿತಿ ಯೋಜನೆಯಡಿ ನವೆಂಬರ್ 21ರಿಂದ ಡಿಸೆಂಬರ್ 11ರವರೆಗೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ತಿಳಿಸಿದರು.
2026ರಲ್ಲಿ ಈಗಾಗಲೇ ಮೂರು ರಾಷ್ಟ್ರೀಯ ಲೋಕ ಅದಾಲತ್ಗಳನ್ನು ನಡೆಸಲಾಗಿದ್ದು, ಸೆಪ್ಟೆಂಬರ್ 19ರಂದು ನಡೆದ ಲೋಕ ಅದಾಲತ್ನಲ್ಲಿ ಮೈಸೂರು ಜಿಲ್ಲೆಯಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 1,34,313 ಪ್ರಕರಣಗಳು ಹಾಗೂ 6,733 ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಈ ಪೈಕಿ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳು ಮತ್ತು ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿ ಒಟ್ಟು 81,797 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನಾಗರಾಜ ಸಿದ್ದಪ್ಪ ಅಂಕಸದೊಡ್ಡಿ ಅವರು ಮಾತನಾಡಿ ಲೋಕ ಅದಾಲತ್ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ನ್ಯಾಯಾಲಯದ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಈಗಾಗಲೇ ನ್ಯಾಯಾಲಯದ ಶುಲ್ಕ ಪಾವತಿಸಿದ್ದರೆ, ಪ್ರಕರಣ ಇತ್ಯರ್ಥವಾದ ನಂತರ ನಿಯಮಾನುಸಾರ ಮರುಪಾವತಿ ಪಡೆಯಲು ಅವಕಾಶವಿದೆ. ಲೋಕ ಅದಾಲತ್ನಲ್ಲಿ ಉಭಯ ಪಕ್ಷಗಳ ಒಪ್ಪಿಗೆಯೊಂದಿಗೆ ಕೈಗೊಳ್ಳುವ ತೀರ್ಮಾನವು ಅಂತಿಮವಾಗಿದ್ದು, ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇದರಿಂದ ಸಮಯ ಮತ್ತು ಹಣದ ಉಳಿತಾಯವಾಗುವುದರ ಜೊತೆಗೆ ನ್ಯಾಯಾಲಯಗಳಲ್ಲಿನ ಪ್ರಕರಣಗಳ ಬಾಕಿ ಪ್ರಮಾಣವೂ ಕಡಿಮೆಯಾಗಲಿದೆ ಎಂದು ಹೇಳಿದರು.
ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಉಭಯ ಪಕ್ಷಗಳ ನಡುವೆ ಸೌಹಾರ್ದಯುತ ಸಂಬಂಧ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ಲೋಕ ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಲೋಕ ಅದಾಲತ್ಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಟ್ರಾಫಿಕ್ ಚಲನ್ಗೆ ಶೇ.50 ರಿಯಾಯಿತಿ
ಮೈಸೂರು ನಗರ ಡಿಸಿಪಿ ಸುಂದರ್ ರಾಜ್ ಅವರು ಮಾತನಾಡಿ ಟ್ರಾಫಿಕ್ ಚಲನ್ ಮತ್ತು ಸಾರಿಗೆ ಇಲಾಖೆಯಲ್ಲಿ ದಾಖಲಾಗಿರುವ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡುವ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಪೆÇಲೀಸ್ ಇಲಾಖೆ ಸಂಚಾರ ವಿಭಾಗದಲ್ಲಿ ದಾಖಲಾದ ಟ್ರಾಫಿಕ್ ಚಲನ್ ಪ್ರಕರಣಗಳು ಹಾಗೂ 1991ರಿಂದ 2025ರ ಅವಧಿಯಲ್ಲಿ ಸಾರಿಗೆ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ನೀಡುವ ಸೌಲಭ್ಯ ಕಲ್ಪಿಸಲಾಗಿದೆ.
ಈ ಹಿಂದೆ 2026ರ ಜುಲೈ 11ರಂದು ನಡೆದ ಲೋಕ ಅದಾಲತ್ನಲ್ಲಿ ಒಟ್ಟು 2,75,853 ಟ್ರಾಫಿಕ್ ಚಲನ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 6,89,97,350 ರೂ. ದಂಡದ ಮೊತ್ತವನ್ನು ವಸೂಲಿ ಮಾಡಲಾಗಿದೆ. ಅಲ್ಲದೆ, 18 ಸಾವಿರ ಇ-ಚಲನ್ ಪ್ರಕರಣಗಳನ್ನು ಇತ್ಯರ್ಥಪಡಿಸಿ 94,350 ರೂ. ಮೊತ್ತವನ್ನು ವಸೂಲಿ ಮಾಡಲಾಗಿದೆ.
ಟ್ರಾಫಿಕ್ ಚಲನ್ ಮತ್ತು ಸಾರಿಗೆ ಇಲಾಖೆಯ ದಂಡದ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ನೀಡುವ ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಸಿ ಮಲ್ಲಿಕ್ ಸೇರಿದಂತೆ ಪೆÇಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.






















