
ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ೮ನೇ ಮಹಾದಾಸೋಹ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯತಿಥಿಯ ಅಂಗವಾಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವತಿಯಿಂದ ಆ.೨೯ರಿಂದ ಸೆ.೨ರವರೆಗೆ ಐದು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಕ್ರೀಡಾಕೂಟ, ಜಾಥಾ, ಮ್ಯಾರಥಾನ್ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಿಂದೂ ಧಾರ್ಮಿಕ ಪಂಚಾAಗದ ಪ್ರಕಾರ ಡಾ. ಶರಣಬಸವಪ್ಪ ಅಪ್ಪಾಜಿಯವರ ಪ್ರಥಮ ಪುಣ್ಯತಿಥಿಯನ್ನು ಸೆ.೨ರಂದು ಆಚರಿಸಲಾಗುವುದು.
ಕಲಬುರಗಿ ನಗರದ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ ದಾಸೋಹ ಮಹಾಮನೆಯಲ್ಲಿ ಗುರುವಾರ ಸಂಜೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು, ಆ.೨೯ರಂದು ಶರಣಬಸವೇಶ್ವರ ದೇವಸ್ಥಾನ ಸಂಕೀರ್ಣದ ಅನುಭವ ಮಂಟಪದಲ್ಲಿ ನಡೆಯುವ ಬೃಹತ್ ಕವಿಗೋಷ್ಠಿ ಹಾಗೂ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದೊAದಿಗೆ ಐದು ದಿನಗಳ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ ಎಂದು ಪ್ರಕಟಿಸಿದರು.
ಸಂಘದ ಅಧೀನದಲ್ಲಿ ನಡೆಯುತ್ತಿರುವ ವಿವಿಧ ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಿಂದ ಆಯ್ಕೆಯಾಗಿರುವ ೪೦ಕ್ಕೂ ಹೆಚ್ಚು ಅತ್ಯುತ್ತಮ ಶಿಕ್ಷಕರಿಗೆ ಆ.೨೯ರಂದು ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ರೂ. ೫,೦೦೦ ನಗದು ಬಹುಮಾನ, ಪ್ರಶಂಸನಾ ಪತ್ರ ಹಾಗೂ ಶಾಲು ಒಳಗೊಂಡಿರುತ್ತದೆ. ಇದಾದ ಬಳಿಕ ಆ.೩೦ರಂದು ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪಾಜಿ, ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಕುಟುಂಬದ ಸದಸ್ಯರು ಮತ್ತು ಸಂಸ್ಥಾನದ ಅಪಾರ ಭಕ್ತರ ಸಮ್ಮುಖದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆಯನ್ನು ನೆರವೇರಿಸಲಾಗುವುದು. ಈ ಇಷ್ಟಲಿಂಗ ಪೂಜೆಯಲ್ಲಿ ಕನಿಷ್ಠ ೧,೦೦೦ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಆ.೩೧ರಂದು ಭಕ್ತರು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸುವ “ನಡುವಿನ ಸೋಮವಾರ” ಇರುವುದರಿಂದ ಅಂದು ಯಾವುದೇ ಇತರ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಿಲ್ಲ. ಬದಲಾಗಿ, ಸಂಘದ ವತಿಯಿಂದ ನಡೆಸಲಾಗುತ್ತಿರುವ ಆಯುರ್ವೇದ ಆಸ್ಪತ್ರೆಯ ವೈದ್ಯರು ಹಾಗೂ ಅರೆವೈದ್ಯಕೀಯ ಸಿಬ್ಬಂದಿಯ ಸಹಯೋಗದಲ್ಲಿ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗುವುದು. ಇದರ ಜೊತೆಗೆ ನವಜೀವನ ರಕ್ತನಿಧಿಯ ಸಹಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಗುಲಬರ್ಗಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ವೈದ್ಯರ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ನಡೆಸಲಾಗುವುದು. ಕಣ್ಣಿನ ತಪಾಸಣೆಗೆ ಒಳಗಾಗುವ ಅಗತ್ಯವಿರುವ ಬಡ ಹಾಗೂ ಅರ್ಹ ರೋಗಿಗಳಿಗೆ ಉಚಿತ ಕನ್ನಡಕಗಳನ್ನು ಸಹ ವಿತರಿಸಲಾಗುವುದು ಎಂದು ಡಾ. ದಾಕ್ಷಾಯಿಣಿ ಅವ್ವಾಜಿ ತಿಳಿಸಿದರು.
ಸೆ. ೧ ರಂದು ವಿವಿಧ ಶಾಲಾ-ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಜಾಥಾವನ್ನು ಆಯೋಜಿಸಲಿದ್ದಾರೆ. ಜಾಥಾದಲ್ಲಿ ಲಿಂಗೈಕ್ಯ ಪೂಜ್ಯ ಡಾ. ಅಪ್ಪಾಜಿಯವರ ಜೀವಮಾನ ಗಾತ್ರದ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಿದ ವಾಹನದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಆವರಣದಿಂದ ಶರಣಬಸವೇಶ್ವರ ದೇವಸ್ಥಾನದವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುವುದು. ಈ ಸಂದರ್ಭದಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಸೆ.೨ ರಂದು ಶರಣಬಸವೇಶ್ವರ ಕಲಾ ಕಾಲೇಜಿನ ವತಿಯಿಂದ ನಗರದ ಹೊರವಲಯದಲ್ಲಿರುವ ಬುದ್ಧ ವಿಹಾರದಿಂದ ಬೃಹತ್ ಮ್ಯಾರಥಾನ್ ಓಟ ಆಯೋಜಿಸಲಾಗುವುದು. ಸುಮಾರು ೨,೦೦೦ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಭಾಗವಹಿಸಲಿರುವ ಈ ಮ್ಯಾರಥಾನ್ ಕಲಬುರಗಿ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿಬಂದು ಶರಣಬಸವೇಶ್ವರ ದೇವಸ್ಥಾನದಲ್ಲಿ ಸಮಾರೋಪಗೊಳ್ಳಲಿದೆ ಎಂದು ತಿಳಿಸಿದರು.
ಈ ಎಲ್ಲಾ ಕಾರ್ಯಕ್ರಮಗಳು ಸೆ. ೨ರಂದು ಶರಣಬಸವೇಶ್ವರ ದೇವಸ್ಥಾನದ ಅನುಭವ ಮಂಟಪದಲ್ಲಿ ನಡೆಯಲಿರುವ ಭವ್ಯ ಸಮಾರಂಭದೊAದಿಗೆ ಸಂಪನ್ನಗೊಳ್ಳಲಿವೆ. ಈ ಸಮಾರಂಭದಲ್ಲಿ ಪ್ರದೇಶದ ಹಿರಿಯ ರಾಜಕೀಯ ನಾಯಕರು ಹಾಗೂ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳು ಭಾಗವಹಿಸಿ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಲಿದ್ದಾರೆ ಎಂದು ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ವಿವರಿಸಿದರು.































