Home ಜಿಲ್ಲೆ ವಿದ್ಯಾರ್ಥಿ-ಯುವಜನರ ಹೋರಾಟಕ್ಕೆ ಸಂದ ಜಯ: ದಲಿತ ವಿದ್ಯಾರ್ಥಿ ಪರಿಷತ್

ವಿದ್ಯಾರ್ಥಿ-ಯುವಜನರ ಹೋರಾಟಕ್ಕೆ ಸಂದ ಜಯ: ದಲಿತ ವಿದ್ಯಾರ್ಥಿ ಪರಿಷತ್

ಸಂಜೆವಾಣಿ ವಾರ್ತೆ,
ವಿಜಯಪುರ, ಜು. ೨೬: ನೀಟ್ (ಓಇಇಖಿ) ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಅವ್ಯವಹಾರಗಳ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ನಿರಂತರ ಹೋರಾಟಕ್ಕೆ ಸಂದ ಮಹತ್ವದ ಜಯವಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ತಿಳಿಸಿದೆ.
ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಅವರು ಶನಿವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದಾದ್ಯಂತ ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ನಿರಂತರವಾಗಿ ಪ್ರತಿಭಟನೆ ನಡೆಸಿದ್ದವು. ಈ ಹೋರಾಟದ ಒತ್ತಡ ಹಾಗೂ ಜನಾಭಿಪ್ರಾಯದ ಪರಿಣಾಮವಾಗಿ ಕೇಂದ್ರ ಸರ್ಕಾರ ತನ್ನ ನಿಲುವನ್ನು ಬದಲಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಪ್ರಜಾಪ್ರಭುತ್ವದಲ್ಲಿ ಜನರ ಧ್ವನಿಯ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುವ ಯಾವುದೇ ನೀತಿ ಅಥವಾ ಆಡಳಿತಾತ್ಮಕ ವೈಫಲ್ಯವನ್ನು ದೇಶದ ಯುವಜನತೆ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶ ಈ ಬೆಳವಣಿಗೆಯಿಂದ ಕೇಂದ್ರ ಸರ್ಕಾರಕ್ಕೆ ತಲುಪಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿ ಮತ್ತು ಯುವಜನ ವಿರೋಧಿ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಮತ್ತು ಸಮಾನ ಅವಕಾಶಗಳನ್ನು ಖಚಿತಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಸುಧಾರಣೆಗಳನ್ನು ಜಾರಿಗೆ ತರಬೇಕು. ವಿದ್ಯಾರ್ಥಿಗಳ ಭವಿಷ್ಯವನ್ನು ರಾಜಕೀಯ ಅಥವಾ ಆಡಳಿತಾತ್ಮಕ ವೈಫಲ್ಯಗಳ ಬಲಿಯಾಗಲು ಬಿಡಬಾರದು ಎಂದು ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯಿಸಿದೆ.
ವಿದ್ಯಾರ್ಥಿಗಳ ಹಿತಾಸಕ್ತಿ, ಸಾಮಾಜಿಕ ನ್ಯಾಯ ಹಾಗೂ ಗುಣಮಟ್ಟದ ಶಿಕ್ಷಣಕ್ಕಾಗಿ ದಲಿತ ವಿದ್ಯಾರ್ಥಿ ಪರಿಷತ್ ಮುಂದೆಯೂ ತನ್ನ ಹೋರಾಟವನ್ನು ಮತ್ತಷ್ಟು ತೀವ್ರವಾಗಿ ಮುಂದುವರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.