
ಬೆಂಗಳೂರು, ಏ. ೧೫- ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ಧ ಕೆಲಸ ಮಾಡಿದ್ದ ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಅನ್ವಯವಾಗುವಂತೆ ಅಮಾನತು ಮಾಡಲಾಗಿದೆ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ನಜೀರ್ ಅಹ್ಮದ್, ಸಚಿವ ಜಮೀರ್ ಅಹ್ಮದ್ ಖಾನ್ ಅವರು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ದೂರು ನೀಡಲಾಗಿತ್ತು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ಅಬ್ದುಲ್ ಜಬ್ಬಾರ್ ಅವರಿಗೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮಿ ನೀಡುವಂತೆ ಸೂಚಿಸಿತ್ತು. ಅದರಂತೆ ಅಬ್ದುಲ್ ಜಬ್ಬಾರ್ ರಾಜೀನಾಮೆ ಸಲ್ಲಿಸಿದ್ದರು.
ಈಗ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದಲೇ ಅಮಾನತು ಮಾಡಿ, ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ನಿರ್ಧಾರವೂ ಪಕ್ಷದ ಶಿಸ್ತಿನ ಪಾಲನೆ ಮತ್ತು ಸಂಘಟನಾ ಬಲವನ್ನು ಕಾಪಾಡುವ ಉದ್ದೇಶದಿಂದ ಕೈಗೊಳ್ಳಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಚುನಾವಣೆಯಲ್ಲಿ ಪಕ್ಷ ವಿರೋಧಿಯಾಗಿ ನಡೆದುಕೊಂಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ನಜೀರ್ ಅಹ್ಮದ್ ಅವರನ್ನು ನಿನ್ನೆಯಷ್ಟೇ ಹುದ್ದೆಯಿಂದ ವಜಾಗೊಳಿಸಲಾಗಿತ್ತು.
























