ಅಧಿಕಾರ ದುರಪಯೋಗ: ತನಿಖೆಗೆ ಆಗ್ರಹ

ಕಲಬುರಗಿ,ನ.29-ಇಲ್ಲಿನ ಮಹಾನಗರ ಪಾಲಿಕೆಯ ಅಧಿಕಾರಿ ಹಾಗೂ ವಿವಿಧ ವೃಂದದ ಸಿಬ್ಬಂದಿ ವರ್ಗಾವಣೆಯಲ್ಲಿ ಅಧಿಕಾರ ದುರುಪಯೋಗದ ವಾಸನೆ ಕಂಡು ಬರುತ್ತಿದ್ದು, ಈ ಬಗ್ಗೆ ತನಿಖೆ ಮಾಡಬೇಕು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ ನರಿಬೋಳ, ಸಾಮಾಜಿಕ ಕಾರ್ಯಕರ್ತ ಸಿದ್ರಾಮಯ್ಯ ಹಿರೇಮಠ, ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರವಣಕುಮಾರ ನಾಯಕ, ಹಿಂದು ಜಾಗೃತಿ ಸೇನೆ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಲಕ್ಷ್ಮೀಕಾಂತ ಸ್ವಾದಿ ಆಗ್ರಹಿಸಿದ್ದಾರೆ.
ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಸಿಂಧೆ ಅವರು ದಿನಾಂಕ 18-10-2025 ರಂದು ಪಾಲಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ವಿವಿಧ ವೃಂದದ 55 ಸಿಬ್ಬಂದಿಗಳನ್ನು ಅಂತರ ವರ್ಗಾವಣೆ ಆದೇಶ ಮಾಡಿದ್ದಾರೆ. ಈ ಅಂತರ ವರ್ಗಾವಣೆ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಮತ್ತು ಪಾಲಿಕೆಯ ಆಡಳಿತ ಜನಪರವಾಗಿ ನಡೆಸಲು ಸೂಕ್ತ ಕ್ರಮ ಜರುಗಿಸಬೇಕು, ನಗರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು. ಈ ಬಗ್ಗೆ ನಿರ್ಲಕ್ಷ ವಹಿಸಿದರೆ ಮಹಾನಗರ ಪಾಲಿಕೆಯ ಎದುರು ಪ್ರತಿಭಟನೆ ಮಾಡಬೆಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.