
ಕೋಲಾರ, ಅ. ೧೭: ನಗರದ ಸೈನಿಕ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಅಮೋಘ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಕೋಲಾರ ಜಿಲ್ಲಾ ಮಟ್ಟದ ೧೭ ವರ್ಷದೊಳಗಿನ ವಿದ್ಯಾರ್ಥಿಗಳು ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಶಾಲೆಯ ವಿದ್ಯಾರ್ಥಿಗಳಾದ ಹರ್ಷಿತ್ ಗೌಡ ಬಿ.ಎನ್., ಯಶವಂತ್ ಸಿ., ಎಂ.ಡಿ. ರಿಯಾನ್ ಮತ್ತು ಸಯದ್ ಪಾಷಾ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಪ್ರಥಮ ಸ್ಥಾನ ಗಳಿಸಿದ ನಾಲ್ಕು ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ಗದಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲೆಯ ಪ್ರಾಂಶುಪಾಲ, ಶಿಕ್ಷಕ ವೃಂದ ಹಾಗೂ ಶಾಲಾ ಆಡಳಿತ ಮಂಡಳಿಯ ವತಿಯಿಂದ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದಲ್ಲೂ ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಲಾಯಿತು.






















