
ಜಮಖಂಡಿ:ಮಾ.14: ತಾಲೂಕಿನಲ್ಲಿ ಈ ಬಾರಿ ಒಟ್ಟು 8,818 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದಾರೆ ಅದರಲ್ಲಿ 3,909 ಗಂಡು ಹಾಗೂ 4,279 ಹೆಣ್ಣು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಹೇಳಿದರು.
ಶುಕ್ರವಾರ ನಗರದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜು ಕಡಪಟ್ಟಿಯಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕಿನಲ್ಲಿ ಒಟ್ಟು 25 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ರಬಕವಿ-ಬನಹಟ್ಟಿ ಹಾಗೂ ತೇರದಾಳ ತಾಲೂಕಿನಲ್ಲಿ 11 ಪರೀಕ್ಷಾ ಕೇಂದ್ರಗಳಿದ್ದು 3,414 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಮಖಂಡಿ ತಾಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳು ಇದ್ದು, ನಗರದಲ್ಲಿ 10 ಹಾಗೂ ಗ್ರಾಮೀಣ ಭಾಗದಲ್ಲಿ ಉಳಿದ ಕೇಂದ್ರಗಳನ್ನು ಗುರುತಿಸಲಾಗಿದೆ. ಒಟ್ಟು 322 ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪರೀಕ್ಷೆ ಸುಸೂತ್ರವಾಗಿ ನಡೆಯಲು 25 ಮುಖ್ಯ ಅಧೀಕ್ಷಕರು, 25 ಪ್ರಶ್ನೆಪತ್ರಿಕೆ ಪಾಲಕರು, 25 ಸ್ಥಾನಿಕ ಜಾಗೃತ ದಳ, 10 ಉಪಮುಖ್ಯ ಅಧೀಕ್ಷಕರು, 25 ವೆಬ್ ಕಾಸ್ಟಿಂಗ್ ವೀಕ್ಷಕರು, 10 ಮಾರ್ಗಾಧಿಕಾರಿಗಳು, 25 ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿದಂತೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ 25 ಪರೀಕ್ಷಾ ಕೇಂದ್ರಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ 5 ಜಾಗೃತ ದಳ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಮಾಚಕನೂರ ಮಾತನಾಡಿ ಪರೀಕ್ಷಾ ಸಿದ್ಧತೆಗಳನ್ನು ಇಲಾಖೆ ಸಮರ್ಪಕವಾಗಿ ಮಾಡಿಕೊಂಡಿದ್ದು, ಕಳೆದ ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಜಮಖಂಡಿ ತಾಲೂಕು ಈ ಬಾರಿ ಹ್ಯಾಟ್ರಿಕ್ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪರೀಕ್ಷೆ ಆರಂಭದಿಂದ ಉತ್ತರ ಪತ್ರಿಕೆಗಳನ್ನು ನಿರ್ದಿಷ್ಟ ಸ್ಥಳಕ್ಕೆ ತಲುಪಿಸುವವರೆಗೂ ಎಲ್ಲ ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಕೆಎಸ್‍ಆರ್‍ಟಿಸಿ ಎಸ್.ಒ ಎ.ಆರ್. ತೇಲಿ ಮಾತನಾಡಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಅರ್ಧಗಂಟೆ ಮುಂಚಿತವಾಗಿ ತಲುಪಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸಾರಿಗೆ ಸಮಸ್ಯೆ ಉಂಟಾದರೆ 94482 45672 ಹಾಗೂ 77609 91778 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದೆಂದು ತಿಳಿಸಿದರು.
ಗ್ರೇಡ್-2 ತಹಸೀಲ್ದಾರ ಕೆ.ವೈ. ಬಿದರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆಯ ಅಧಿಕಾರಿ ಸಂಗಮೇಶ ವಿಜಾಪೂರ ಸ್ವಾಗತಿಸಿದರು. ವಿದ್ಯಾರ್ಥಿನಿ ಪ್ರಭಾ ಕಾಂಬಳೆ ಪ್ರಾರ್ಥನಾ ಗೀತೆ ಹಾಡಿದರು. ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ಕೆಪಿಟಿಸಿಎಲ್ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಆರ್.ಎಸ್. ತಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.




















