
ಬೀದರ್: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೬ರ ಮಾರ್ಚ್ ೧೪ ಮತ್ತು ೧೫ರಂದು ಬೀದರ್ ಜಿಲ್ಲೆಯಲ್ಲಿ ಆಯೋಜಿಸಲು ಉದ್ದೇಶಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅಂತರರಾಷ್ಟ್ರೀಯ ಮಟ್ಟದ ಸಮ್ಮೇಳನ ರದ್ದಾಗಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಆಗ್ರಹಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ, ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಿ ಸಮ್ಮೇಳನ ಆಯೋಜನೆಗೆ ಆದೇಶ ನೀಡಿದ್ದರೂ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ನಿರ್ಲಕ್ಷ್ಯ, ಅವ್ಯವಸ್ಥೆ ಹಾಗೂ ಸಮರ್ಪಕ ಮೇಲ್ವಿಚಾರಣೆಯ ಕೊರತೆಯಿಂದ ಕಾರ್ಯಕ್ರಮದ ರೂಪುರೇಷೆಗಳನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಂಬೇಡ್ಕರ್ ಅವರ ಚಿಂತನೆಗಳು, ಸಂವಿಧಾನ ಮತ್ತು ದೇಶಕ್ಕೆ ನೀಡಿದ ಕೊಡುಗೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಈ ಸಮ್ಮೇಳನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ಸರ್ಕಾರ ನಿರ್ಧರಿಸಿತ್ತು. ಆದರೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಮ್ಮೇಳನ ರದ್ದಾಗಿದ್ದು, ಇದರಿಂದ ಸರ್ಕಾರ ಬಿಡುಗಡೆ ಮಾಡಿದ್ದ ವಿಶೇಷ ಅನುದಾನವೂ ವಾಪಸ್ ಹೋಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಸಮ್ಮೇಳನ ರದ್ದಿಗೆ ಕೆಳಹಂತದ ಅಧಿಕಾರಿಗಳನ್ನು ಮಾತ್ರ ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ಇಲಾಖೆಯ ಮುಖ್ಯಸ್ಥರಾಗಿರುವ ಉಪನಿರ್ದೇಶಕರೇ ಸಂಪೂರ್ಣ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಬಿಎಸ್‌ಪಿ ನಾಯಕರು ಆಗ್ರಹಿಸಿದ್ದಾರೆ.
ಅಂಬೇಡ್ಕರ್ ಅವರ ಹೆಸರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ರದ್ದಾಗಿರುವುದು ದಲಿತ ಸಮುದಾಯ, ಅಂಬೇಡ್ಕರ್ ವಾದಿಗಳು ಹಾಗೂ ಹಿತೈಷಿಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಸಂಬAಧಪಟ್ಟ ಅಧಿಕಾರಿಗಳ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ಮತ್ತು ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂರ್ದದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಕಪಿಲ ಗೋಡಬೊಲೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ಭಾವಿದೊಡ್ಡಿ, ಜ್ಞಾನೇಶ್ವರ ಸಿಂಗಾರೆ, ಅಶೋಕ ಮಂಠಾಳ್ಕರ್, ರಾಜಕುಮಾರ ಮೂಲಭಾರತಿ, ಸುರೇಶ ಜೋಜನಾಕರ್, ಅಂಬಾದಾಸ ಚಕ್ರವರ್ತಿ, ಮಹೇಶ ಭೋಲಾ, ಜಾಫರ್ ಖುರೇಷಿ, ಮಲ್ಲಿಕಾರ್ಜುನ ಕೆ, ಭಾರತ ಭಾಗೆಕರ್, ಸಚೀನ ಗಿರಿ, ಶಂಕರ ಫುಲೆ, ನಿಲೇಶ ಮೇಲಕೇರಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.






















