ಸರ್ಕಾರಿ ನೌಕರರಿಗೂ ಅಂಕುಶ

ಬೆಂಗಳೂರು, ಅ. ೧೬- ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಚಟುವಟಿಕೆಗಳನ್ನು ನಿರ್ಬಂಧಿಸುವ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ ಖರ್ಗೆ ಬರೆದಿದ್ದ ಪತ್ರ ಸಾಕಷ್ಟು ವಾಗ್ವಾದಗಳಿಗೆ ಎಡೆಮಾಡಿಕೊಟ್ಟಿರುವ ಬೆನ್ನಲ್ಲೆ, ಸಚಿವ ಪ್ರಿಯಾಂಕ ಖರ್ಗೆ ಅವರು ಸರ್ಕಾರಿ ನೌಕರರು ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ನಿಷೇಧ ಜಾರಿಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.

ಯಾವುದೇ ಸರ್ಕಾರಿ ನೌಕರರು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂತಹ ಯಾವುದೇ ಸಂಘಸಂಸ್ಥೆಯ ಸದಸ್ಯರಾಗುವಂತಹದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ, ಅಥವಾ ಯಾವುದೇ ರಾಜಕೀಯ ಚಳುವಳಿ ಚಟುವಟಿಕೆಗಳಲ್ಲಿ ಭಾಗವಹಿಸದ ತಕ್ಕದ್ದಲ್ಲ. ಅದರ ಸಹಾಯಾರ್ಥ ವಂತಿಕೆ ನೀಡತಕ್ಕದ್ದಲ್ಲ, ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ ಎಂದು ಕರ್ನಾಟಕ ನಾಗರಿಕ ಸೇವಾ ನಿಯಮಗಳಲ್ಲಿ ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ ಎಂದು ಪತ್ರದಲ್ಲಿ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


ನಾಗರೀಕ ಸೇವಾ ನಿಯಮಗಳಲ್ಲಿ ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಾಗೂ ಇತರೆ ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಪಾಲ್ಗೊಳ್ಳುತ್ತಿದ್ದಾರೆ ಎಂಬುದನ್ನು ಪತ್ರದಮೂಲಕ ಪ್ರಿಯಾಂಕ್, ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ, ಅಧಿಕಾರಿ ಮತ್ತು ನೌಕರರು ಆರ್ ಎಸ್ ಎಸ್ ಹಾಗೂ ಇತರ ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಹಾಗೂ ಇದನ್ನು ಉಲ್ಲಂಘಿಸುವ ಸರ್ಕಾರಿ ಅಧಿಕಾರಿ ನೌಕರರು ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಸೂಕ್ತ ನಿರ್ದೇಶನ ನೀಡುವಂತೆ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಶಾಲಾ-ಕಾಲೇಜು, ಸಾರ್ವಜನಿಕ ಸ್ಥಳ, ಧಾರ್ಮಿಕ ಸಂಸ್ಥೆಗೆ ಸೇರಿದ ಸ್ಥಳಗಳಲ್ಲಿ ಅವಕಾಶ ನೀಡಬಾರದು ಎಂದು ಪ್ರಿಯಾಂಕ ಖರ್ಗೆ ಬರೆದಿದ್ದ ಪತ್ರ ಸಾಕಷ್ಟು ಗದ್ದಲಕ್ಕೆ ಕಾರಣವಾಗಿತ್ತು.


ಜತೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವೆ ವಾಗ್ವಾದಕ್ಕೂ ಈ ಪತ್ರ ಎಡೆ ಮಾಡಿಕೊಟ್ಟಿತ್ತಲ್ಲದೆ ಆರ್‌ಎಸ್‌ಎಸ್ ಜತೆ ಗುರುತಿಸಿಕೊಂಡಿರುವವರು ಪ್ರಿಯಾಂಕ ವಿರುದ್ಧ ಕಿಡಿಕಾರಿದ್ದರು.


ಇಷ್ಟೆಲ್ಲದರ ಮಧ್ಯೆಯೇ ಸಚಿವ ಪ್ರಿಯಾಂಕ ಖರ್ಗೆ ಸರ್ಕಾರಿ ನೌಕರರು, ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಇರುವ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ ಖರ್ಗೆ, ಸಂಘ ಪರಿವಾರದ ಬೆಂಬಲಿಗರ ಕೆಂಗಣ್ಣಿಗೆ ಮತ್ತೆ ಗುರಿಯಾಗಿದ್ದಾರೆ.


ಪ್ರಿಯಾಂಕ್ ಖರ್ಗೆ ಹೇಳಿಕೆ


ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಬಗ್ಗೆ ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರಿ ನೌಕರರು ಹೆಚ್ಚು ರಾಜಕೀಂii ಮಾಡುತ್ತಾರೆ ಮೊನ್ನೆ ಕೆಲವರು ಆರ್ ಎಸ್ ಎಸ್ ಕಾರ್ಯಕ್ರಮಗಳಿಗೆ ಹೋಗಿ ಭಾಷಣ ಮಾಡಿದ್ದಾರೆ. ನಾಗರಿಕ ನಿಯಮಾವಳಿಗಳ ಪ್ರಕಾರ ನಿಬಂರ್ಧವಿದೆ. ಹಾಗಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ. ನಾನು ಯಾವುದೇ ಒಂದು ಸಂಸ್ಥೆ ಎಂದು ಹೇಳಿಲ್ಲ. ಯಾವುದೇ ಸಂಸ್ಥೆಯಿರಲಿ ನೌಕರರು ಭಾಗವಹಿಸುವಂತಿಲ್ಲ ಎಂದರು.
ನನ್ನ ಇಲಾಖೆಯಲ್ಲೂ ಕೆಲವರು ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರ ವರದಿ ಕೇಳಿದ್ದೇನೆ. ವರದಿ ಬಂದ ಮೇಲೆ ಅವರನ್ನು ಅಮಾನತು ಮಾಡುತ್ತೇನೆ ಎಂದರು.

ಆರ್‌ಎಸ್‌ಎಸ್‌ಗೆ ಅಂಕುಶ ಸಂಪುಟ ಸಭೆಯಲ್ಲಿ ನಿರ್ಧಾರ ಸಾಧ್ಯತೆ


ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚುಟುವಟಿಕೆಗಳಿಗೆ ನಿರ್ಬಂಧ ಹೇರಿ ಎಂದು ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬರೆದಿರುವ ಪತ್ರ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವಾಗಲೇ, ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ನಡೆಸದಂತೆ ವಿಧಿಸುವ ಹಾಗೂ ಸರ್ಕಾರಿ ನೌಕರರು ಆರ್ ಎಸ್ ಎಸ್ ಸೇರಿದಂತೆ ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗದಂತೆ ನಿಷೇಧಿಸುವ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಶಾಲಾ ಮೈದಾನ, ಧಾರ್ಮಿಕ ಸಂಸ್ಥೆಗಳ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಹೇಳಲಾಗಿದೆ.


ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ಕಾನೂನಿನಲ್ಲಿ ಏನೆಲ್ಲಾ ಅವಕಾಶಗಳಿವೆ. ಶಾಲಾ ಮೈದಾನಗಳಲ್ಲೂ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಲು ಅವಕಾಶವಿದೆಯೇ ಎಲ್ಲದರ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ತಮಿಳುನಾಡು ಮಾದರಿಯಲ್ಲೇ ರಾಜ್ಯದಲ್ಲೂ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ ಹೇರುವ ತೀರ್ಮಾನವನ್ನು ಸಂಪುಟ ಕೈಗೊಳ್ಳುವ ಸಾಧ್ಯತೆ ಹೆಚ್ಚಿವೆ. ಎಲ್ಲಾ ಕಾನೂನು ಸಾಧಕ-ಬಾಧಕಗಳನ್ನು ನೋಡಿಕೊಂಡೇ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಹೇಳಿವೆ.