
ಬೆಂಗಳೂರು, ಅ. ೨೧- ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಕಡಿಹಾಣ ಬಿದ್ದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನ ಡಿಎಆರ್ ಮೈದಾನದಲ್ಲಿಂದು ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ಸಲ್ಲಿಸಿ ಮಾತನಾಡಿದ ಅವರು, ರಾಜ್ಯದ ಘನತೆ ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಸಂಪೂರ್ಣ ಕಡಿವಾಣ ಬಿದ್ದಿದೆ. ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಿದ ಶ್ರೇಯಸ್ಸು ಪೊಲೀಸರಿಗೆ ಸಲ್ಲಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಗೃಹ ಇಲಾಖೆ ಶಾಂತಿ ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.
ಪೊಲೀಸರ ಶ್ರಮದಿಂದ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಅದೇ ರೀತಿ ಮಾದಕ ವಸ್ತುಗಳ ಹಾವಳಿಗೂ ಕಡಿವಾಣ ಬಿದ್ದಿದೆಯಾದರೂ ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕಿದೆ ಎಂದರು.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಿಕೆ, ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ, ಮಾದಕ ವಸ್ತುಗಳ ನಿಯಂತ್ರಣ ಹೀಗೆ ಹಲವು ಸಾಧನೆಗಳ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ವರ್ಗದವರ ಮೇಲಿನ ದೌರ್ಜನ್ಯಗಳನ್ನು ಇನ್ನಷ್ಟು ಪರಿಣಾಕಾರಿಯಾಗಿ ತಡೆಯುವ ಕೆಲಸ ಆಗಬೇಕಿದೆ ಎಂದು ಅವರು ಹೇಳಿದರು.
ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇನೆ. ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದು ಅವರು ಹೇಳಿದರು.
ದೇಶದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದರಲ್ಲಿ ರಾಜ್ಯದ ಪೊಲೀಸ್ ಸಿಬ್ಬಂದಿ ಅಗ್ರಸ್ಥಾನದಲ್ಲಿದ್ದಾರೆ. ಕೋಮುಶಕ್ತಿಗಳು, ದುಷ್ಟಶಕ್ತಿಗಳ ನಿಗ್ರಹದಲ್ಲಿ ಪೊಲೀಸರ ಪಾತ್ರ ಬಹಳ ದೊಡ್ಡದು ಎಂದರು.
ಸಂವಿಧಾನದಲ್ಲಿ ಜನರಿಗೆ ಇರುವ ಹಕ್ಕುಗಳ ರಕ್ಷಣೆಯ ಜವಾಬ್ದಾರಿ ಪೊಲೀಸ್ ಇಲಾಖೆಯದ್ದು. ಈ ನಿಟ್ಟಿನಲ್ಲಿ ರಾಜ್ಯ ಪೊಲೀಸರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಈ ವರ್ಷ ರಾಜ್ಯ ಸೇರಿದಂತೆ ದೇಶದಲ್ಲಿ ೧೯೧ ಮಂದಿ ಪೊಲೀಸರು ಕರ್ತವ್ಯ ನಿರ್ವಹಣೆ ಮಾಡುವಾಗ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರ ಸೇವೆಯನ್ನು ಸ್ಮರಿಸಿ ವಂದಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದರು.
ಅನುಕಂಪದ ಹುದ್ದೆ
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟ ಪೊಲೀಸರ ಕುಟುಂಬಗಳಲ್ಲಿ ೧೧೬ ಮಂದಿಗೆ ಅನುಕಂಪದ ಕೆಲಸ ನೀಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿಸಿದರು.
ನಿವೃತ್ತ ಪೊಲೀಸರ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ ೧ ಲಕ್ಷದಿಂದ ೧.೫೦ ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಹಾಗೆಯೇ ಎಲ್ಲ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು ೧ ಸಾವಿರದಿಂದ ೧೫೦೦ ರೂ.ಗಳಿಗೆ ಏರಿಕೆ ಮಾಡಲಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
































