Home ಮುಖಪುಟ ಸುದ್ದಿ ೧೦೦ಕ್ಕೂ ಹೆಚ್ಚು ರೌಡಿಗಳ ಮನೆಗಳ ರೌಡಿ ನಿಗ್ರಹ ಪಡೆ ದಾಳಿ

೧೦೦ಕ್ಕೂ ಹೆಚ್ಚು ರೌಡಿಗಳ ಮನೆಗಳ ರೌಡಿ ನಿಗ್ರಹ ಪಡೆ ದಾಳಿ

ಬೆಂಗಳೂರು,ನ.೨೨-ನಗರದಲ್ಲಿ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ನೂತನವಾಗಿ ರಚನೆಗೊಂಡಿರುವ ರೌಡಿ ನಿಗ್ರಹ ಪಡೆ ಅಧಿಕಾರಿಗಳು ಇಂದು ಮುಂಜಾನೆಯಿಂದ ನಗರದಾದ್ಯಂತ ಸಿಬ್ಬಂದಿಯೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ.


ಮುಂಜಾನೆಯಿಂದ ಏಕಕಾಲದಲ್ಲಿ ನಗರದ ವಿವಿಧೆಡೆ ರೌಡಿ ಗಳ ಮನೆಗಳ ಮೇಲೆ ರೌಡಿ ನಿಗ್ರಹ ಪಡೆ ಅಧಿಕಾರಿಗಳು ಸಿಬ್ಬಂದಿ ಏಕಕಾಲದಲ್ಲಿ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.


ನಗರದಲ್ಲಿ ಹೆಚ್ಚುತ್ತಿರುವ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪೊಲೀಸರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ನೂತನ ನಗರ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ, ರೌಡಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದರು.


ಈ ಹಿನ್ನೆಲೆಯಲ್ಲಿ ರೌಡಿ ನಿಗ್ರಹ ಪಡೆ ಮುಖ್ಯಸ್ಥ ಹಾಗೂ ಸಂಚಾರ ವಿಭಾಗದ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ನಗರದ ಎಲ್ಲ ವಿಭಾಗಗಳ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದಾರೆ.


೧೦೦ ರೌಡಿಗಳು ಪರಿಶೀಲನೆ:


ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಕುಖ್ಯಾತ ರೌಡಿಶೀಟರ್‌ಗಳ ಪಟ್ಟಿಯನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ೧೦೦ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಾಗಿದ್ದು, ಅವರ ಪ್ರಸ್ತುತ ಚಟುವಟಿಕೆಗಳು, ಸಂಪರ್ಕಗಳು ಹಾಗೂ ಚಲನವಲನಗಳ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ.


ಇನ್ನು ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಹಾಗೂ ರೌಡಿ ನಿಗ್ರಹ ಪಡೆ ಮುಖ್ಯಸ್ಥ ಹೇಮಂತ್ ನಿಂಬಾಳ್ಕರ್ ಅವರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿದ್ದಾರೆ.


ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿಶೀಟರ್ ಕಿಶೋರ್ ಅಲಿಯಾಸ್ ಗುಡ್ಡೆ ಮನೆಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಕಠಿಣ ಕ್ರಮದ ಎಚ್ಚರಿಕೆ:


ನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು, ರೌಡಿಶೀಟರ್‌ಗಳ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಮುಂದಿನ ದಿನಗಳಲ್ಲೂ ರೌಡಿಶೀಟರ್‌ಗಳ ಚಲನವಲನಗಳ ಮೇಲೆ ನಿಗಾ ಇರಿಸಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.