ಕಾರ್ಮಿಕ ವರ್ಗದ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಕಲಬುರಗಿ,ಮೇ.20-ದೇಶದ ಕಾರ್ಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ದೇಶದ ಕಾರ್ಮಿಕರು ಮತ್ತಿತರ ದುಡಿಯುವ ಜನರ ವಿರೋಧಿ ನೀತಿಗಳನ್ನು ಕೈ ಬಿಡಬೇಕು ಮತ್ತು ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಇಂದು ಕರೆ ನೀಡಿದ್ದ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲಿಸಿ ಈ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಗೌರವಧನ/ ಪ್ರೋತ್ಸಾಹಧನಗಳನ್ನು ಹೆಚ್ಚಿಸಬೇಕು, ರಾಜ್ಯ ಸರ್ಕಾರ ಭವರಸೆ ನೀಡಿದಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 10 ಸಾವಿರ ರೂ.ಪಾವತಿಸುವಂತೆ ಶೀಘ್ರ ಆದೇಶ ಹೊರಡಿಸಬೇಕು, ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಮಿಕರ ಸೇವೆಗಳನ್ನು ಖಾಯಂಗೊಳಿಸಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, ಎಲ್ಲಾ ಕಾರ್ಮಿಕರಿಗೆ ಕನಿಷ್ಠ ವೇತನ 36 ಸಾವಿರ ರೂ.ನಿಗದಿ ಪಡಿಸಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.
ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿ, ತಾಲ್ಲೂಕ ಜಂಟಿ ಕಾರ್ಯದರ್ಶಿ ಸಂಗೀತಾ, ಸದಸ್ಯರಾದ ಜಯಶ್ರೀ, ಇಂದುಬಾಯಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.