Home ಜಿಲ್ಲೆ ದಲಿತರ ಮೇಲಿನ ಹಲ್ಲೆ ಹಾಗೂ ದೌರ್ಜನ್ಯ ಖಂಡನೀಯ: ಮುತ್ತಣ್ಣ ಮೇತ್ರಿ

ದಲಿತರ ಮೇಲಿನ ಹಲ್ಲೆ ಹಾಗೂ ದೌರ್ಜನ್ಯ ಖಂಡನೀಯ: ಮುತ್ತಣ್ಣ ಮೇತ್ರಿ

ಜಮಖಂಡಿ, ಜು 1: ಕೊಪ್ಪಳ ಜಿಲ್ಲೆಯ ಬೋಚನಹಳ್ಳಿ ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ನಡೆದಿರುವ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಬಾಗಲಕೋಟೆ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬಾಗಲಕೋಟೆ ಜಿಲ್ಲಾ ಸಂಚಾಲಕ ಮುತ್ತಣ್ಣ ಮೇತ್ರಿ, ಬೋಚನಹಳ್ಳಿ ಗ್ರಾಮದಲ್ಲಿ ಹಿಂದೂ-ಮುಸ್ಲಿಮರು ಒಗ್ಗೂಡಿ ಆಚರಿಸುವ ಮೊಹರಂ ಸಂದರ್ಭದಲ್ಲಿ ನಡೆದ ಘಟನೆಯನ್ನು ನೆಪವನ್ನಾಗಿ ಮಾಡಿಕೊಂಡು ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.
ಘಟನೆಯ ಬಳಿಕ ಸ್ಥಳೀಯ ದಲಿತ ಮುಖಂಡರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಿದ್ದು, ಮಾತಿನ ಚಕಮಕಿಯ ಬಳಿಕ ಕೆಲವರು ದಲಿತ ಕೇರಿಗೆ ನುಗ್ಗಿ ಮಹಿಳೆಯರು, ಮಕ್ಕಳು ಹಾಗೂ ಇತರರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ ಎಂದು ಅವರು ಹೇಳಿದ್ದಾರೆ.
ಬೋಚನಹಳ್ಳಿ ಗ್ರಾಮದಲ್ಲಿ ದಲಿತರ ಮೇಲೆ ಈ ಹಿಂದೆಯೂ ಹಲ್ಲೆ ಹಾಗೂ ದೌರ್ಜನ್ಯಗಳು ನಡೆದಿರುವ ಮಾಹಿತಿ ಲಭ್ಯವಾಗಿದ್ದು, ಗ್ರಾಮದಲ್ಲಿ ಅಸ್ಪೃಶ್ಯತೆಯ ಆಚರಣೆಗಳು ಇನ್ನೂ ಜೀವಂತವಾಗಿರುವುದು ವಿಷಾದನೀಯ ಸಂಗತಿ ಎಂದು ಅವರು ತಿಳಿಸಿದ್ದಾರೆ. ಸವರ್ಣೀಯರ ಓಣಿಯ ಚರಂಡಿ ನೀರು ದಲಿತ ಕೇರಿಗೆ ಹರಿದು ಅನಾರೋಗ್ಯಕರ ಪರಿಸ್ಥಿತಿ ನಿರ್ಮಾಣವಾಗಿರುವುದು ಸಾಮಾಜಿಕ ಅಸಮಾನತೆಯ ಪ್ರತೀಕವಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕೆಲವರ ತಪ್ಪಿಗಾಗಿ ಇಡೀ ದಲಿತ ಸಮುದಾಯವನ್ನು ಗುರಿಯಾಗಿಸಿಕೊಂಡು ಮಹಿಳೆಯರು, ಮಕ್ಕಳು ಹಾಗೂ ವೃದ್ಧರ ಮೇಲೆಯೂ ಜಾತಿ ನಿಂದನೆ, ದೈಹಿಕ ಹಲ್ಲೆ ಹಾಗೂ ದೌರ್ಜನ್ಯ ನಡೆಸುವುದು ಖಂಡನೀಯ. ಇಂತಹ ಘಟನೆಗಳನ್ನು ತಡೆಯುವಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ವಿಫಲವಾಗಿದೆ ಎಂದು ಅವರು ದೂರಿದ್ದಾರೆ.
ಸ್ಥಳೀಯರ ಆರೋಪದಂತೆ ಈ ಘಟನೆಯಲ್ಲಿ ವಿವಿಧ ಸಮುದಾಯಗಳ ಕೆಲವರು ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಮೇಲೆಯೇ ಪ್ರತಿದೂರು ದಾಖಲಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದ ಸಂತ್ರಸ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದ್ದು, ಈ ಪ್ರವೃತ್ತಿಗೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರನ್ನು ಬಂಧಿಸಲು, ನಿಷ್ಪಕ್ಷಪಾತ ತನಿಖೆ ನಡೆಸಲು, ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುತ್ತಣ್ಣ ಮೇತ್ರಿ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳಾದ ಆನಂದ ದೊಡಮನಿ, ಕೃಷ್ಣಮೂರ್ತಿ ನಾಯ್ಕರ, ಸಂಗಣ್ಣ ಮಡ್ಡಿ, ಅರ್ಜುನ ದೊಡಮನಿ, ಚಂದ್ರು ಹರಿಜನ, ಲಕ್ಷ್ಮಣ ಹರಿಜನ, ಮಾರುತಿ ಮರೆಗುದ್ದಿ ಹಾಗೂ ಆನಂದ ಕಾಂಬಳೆ ಉಪಸ್ಥಿತರಿದ್ದರು.