ಹಳೆಯ ಪಿಂಚಣಿ ಯೋಜನೆ ಜಾರಿಗೆ ಯತ್ನ

ಬೀದರ್: ಜೂ.19:ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಹೇಳಿದರು.
ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಸಂಘದ ಜಿಲ್ಲಾ ಘಟಕದ ನಾಮ ನಿರ್ದೇಶಿತ ಉಪಾಧ್ಯಕ್ಷ ಶ್ರೀಕಾಂತ ಪಾಟೀಲ ಅವರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ಸಮಿತಿ ರಚಿಸಿದೆ. ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಶೀಘ್ರ ಜಾರಿಗೆ ಒತ್ತಡ ತರಲಾಗುವುದು ಎಂದು ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಘ ನಿರಂತರ ಪ್ರಯತ್ನಿಸುತ್ತಿದೆ. ನೌಕರರ ಹಿತ ರಕ್ಷಣೆಗೆ ಬದ್ಧವಾಗಿದೆ ಎಂದು ಹೇಳಿದರು.
ಪ್ರಾಚಾರ್ಯೆ ಜಯಶ್ರೀ ಪ್ರಭಾ, ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು, ಕಾಲೇಜು ಬೋಧಕ ಹಾಗೂ ಬೋಧಕ ಸಿಬ್ಬಂದಿ ಹಾಜರಿದ್ದರು.