ಹೈದರಾಬಾದ್, ಅ.೩೧- ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತಮ್ಮ ಸಚಿವ ಸಂಪುಟ ವಿಸ್ತರಿಸಿದ್ದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಮಹಮ್ಮದ್ ಅಜರುದ್ದೀನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಜರುದ್ದೀನ್ ಅವರು ರೇವಂತ ರೆಡ್ಡಿ ಸರ್ಕಾರದಲ್ಲಿ ಸಚಿವರಾದ ಅಲ್ಪಸಂಖ್ಯಾತ ಸಮುದಾಯದ ಮೊದಲ ಸಚಿವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಒಂದು ಲಕ್ಷಕ್ಕೂ ಹೆಚ್ಚು ಮುಸ್ಲಿಂ ಮತದಾರರು ಇರುವ ಜುಬಿಲಿ ಹಿಲ್ಸ್ ಕ್ಷೇತ್ರದ ಉಪ ಚುನಾವಣೆ ನಡೆಯಲಿರುವ ಕಾರಣದಿಂದಾಗಿ ಅಜರುದ್ದೀನ್ ಅವರನ್ನು ಸಂಪುಟಕ್ಕೆ ನೇಮಕ ಮಾಡಲಾಗಿದೆ ಎನ್ನಲಾಗಿದೆ.
ಬಿಆರ್‌ಎಸ್ ಶಾಸಕ ಮಾಗಂಟಿ ಗೋಪಿನಾಥ್ ಅವರು ಈ ವರ್ಷದ ಜೂನ್‌ನಲ್ಲಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರಿಂದ ಈ ಕ್ಷೇತ್ರವು ತೆರವುಗೊಂಡಿತ್ತು.
ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ಸೀನ್ ಅವರಿಗೆ ಸಚಿವ ಸ್ಥಾನ ನೀಡಿರುವ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಸಹಕಾರವಾಗುವ ಲೆಕ್ಕಾಚಾರ ಕಾಂಗ್ರೆಸ್ ಹೊಂದಿದೆ.



























