
ಯಾದಗಿರಿ:ಏ.೬: ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯಕ್ಕಾಗಿ ತಮ್ಮ ಬದುಕನ್ನೇ ಅರ್ಪಿಸಿದ ಮಹಾನ್ ನಾಯಕ ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಯಾದಗಿರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾಡಳಿತದ ಆಶ್ರಯದಲ್ಲಿ ನಡೆದ ಕಾರ್ಯಕ್ರಮವು ಗಂಭೀರತೆಯೊAದಿಗೆ ನೆರವೇರಿತು.
ನಗರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ಬಾಬುಜೀ ಅವರ ಸಾಧನೆಗಳನ್ನು ಸ್ಮರಿಸಿದರು. ಆರಂಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಬಾಬು ಜಗಜೀವನ ರಾಮ್ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ದಿಟ್ಟ ನಾಯಕರು ಎಂದು ಹೇಳಿದರು. ಅವರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ, ಬಾಬು ಜಗಜೀವನ ರಾಮ್ ಅವರ ತತ್ವ ಸಿದ್ಧಾಂತಗಳನ್ನು ಎಲ್ಲರೂ ಪಾಲಿಸಬೇಕು. ವಿಶೇಷವಾಗಿ ಪಾಲಕರು ತಮ್ಮ ಮಕ್ಕಳಿಗೆ ಹಾಗೂ ಯುವಜನತೆಗೆ ಅವರ ಆದರ್ಶಗಳನ್ನು ಪರಿಚಯಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕುಮಲಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ರಾಜು ಬಾವಿಹಳ್ಳಿ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಸ್ವಾಗತಿಸಿದರು. ಚಂದ್ರಶೇಖರ ಗೋಗಿ ಪ್ರಾರ್ಥನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಸಮಾಜ ಸೇವಕರು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಇದಕ್ಕೂ ಮುನ್ನ ಬೆಳಿಗ್ಗೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಒರಡಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸೂಚಿಸಿದರು.
ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಬಾಬುಜೀ ಅವರ ತತ್ವಾದರ್ಶಗಳು ಸಮಾಜದಲ್ಲಿ ಸಮಾನತೆ ಮತ್ತು ನ್ಯಾಯವನ್ನು ಬಲಪಡಿಸುವ ಶಕ್ತಿಯಾಗಿದೆ. ಅವುಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಹೇಳಿದರು.




















