Home ಮುಖಪುಟ ಸುದ್ದಿ ಕೆಎಎಸ್ ಅಕ್ರಮ ಶಾಂತಾ ಹೊಸಮನಿಗೆ ಜಾಮೀನು ನಿರಾಕರಣೆ

ಕೆಎಎಸ್ ಅಕ್ರಮ ಶಾಂತಾ ಹೊಸಮನಿಗೆ ಜಾಮೀನು ನಿರಾಕರಣೆ

ಬೆಂಗಳೂರು,ಅ.೨೨- ಕೆಎಎಸ್ ಪರೀಕ್ಷೆಯ ಸಂದರ್ಶನದಲ್ಲಿ ಅಭ್ಯರ್ಥಿಯೊಬ್ಬರಿಗೆ ಅನುಕೂಲ ಮಾಡಿಕೊಡಲು ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯೆ ಡಾ.ಶಾಂತಾ ಹೊಸಮನಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.


ಉನ್ನತ ಹುದ್ದೆಯಲ್ಲಿರುವವರು ಅಧಿಕಾರ ದುರುಪಯೋಗಪಡಿಸಿಕೊಂಡರೆ ಸಾರ್ವಜನಿಕರು ವ್ಯವಸ್ಥೆಯ ಮೇಲಿನ ನಂಬಿಕೆಯನ್ನೇ ಕಳೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.


ನಿರೀಕ್ಷಣಾ ಜಾಮೀನು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಡಾ. ಶಾಂತಾ ಹೊಸಮನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಸಲ್ಲಿಸಿರುವ ದಾಖಲೆಗಳು, ಆರೋಪಿಯು ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಲಾಭ ಪಡೆದಿರುವುದನ್ನು ಪ್ರಾಥಮಿಕವಾಗಿ ಸೂಚಿಸುತ್ತವೆ ಎಂದು ನ್ಯಾಯಪೀಠ ಹೇಳಿದೆ.
ಸಾರ್ವಜನಿಕ ವ್ಯವಸ್ಥೆಯಲ್ಲಿ ಇಂತಹ ಕೃತ್ಯಗಳು ಜನರ ವಿಶ್ವಾಸವನ್ನು ಕುಗ್ಗಿಸುತ್ತವೆ. ಅರ್ಹತೆ ಹೊಂದಿರುವ ಸಾವಿರಾರು ಅಭ್ಯರ್ಥಿಗಳು ನೇಮಕಾತಿಯಿಂದ ವಂಚಿತರಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಆರೋಪಿಗಳು ಎಷ್ಟೇ ಉನ್ನತ ಹುದ್ದೆಯಲ್ಲಿದ್ದರೂ ಕಾನೂನಿನ ಮುಂದೆ ಎಲ್ಲರೂ ಸಮಾನರು. ಇಂತಹ ಪ್ರಕರಣಗಳಲ್ಲಿ ಅಪರಾಧದ ಮೂಲವನ್ನು ಪತ್ತೆಹಚ್ಚಲು ಸಮಗ್ರ ತನಿಖೆ ಅಗತ್ಯ ಎಂದು ನ್ಯಾಯಾಲಯ ತಿಳಿಸಿದೆ.


ಸಮಗ್ರ ತನಿಖೆ ಅಗತ್ಯ:


ಪ್ರಕರಣದಲ್ಲಿ ಅಕ್ರಮವಾಗಿ ಅನುಕೂಲ ಪಡೆದಿರುವ ಅಭ್ಯರ್ಥಿಗಳ ವಿವರ ಹಾಗೂ ಆರೋಪಿಗಳು ಅನುಸರಿಸಿರುವ ಕಾರ್ಯವಿಧಾನವನ್ನು ತನಿಖೆಯ ಮೂಲಕ ಪತ್ತೆಹಚ್ಚಬೇಕು. ಇಂತಹ ಕ್ರಮಗಳಿಂದ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಮರುಸ್ಥಾಪಿಸಲು ಸಾಧ್ಯ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂಬ ಅರ್ಜಿದಾರರ ವಾದವನ್ನೂ ನ್ಯಾಯಾಲಯ ಪರಿಗಣಿಸಿದೆ. ಆದರೆ, ನಿರೀಕ್ಷಣಾ ಜಾಮೀನು ನೀಡುವಾಗ ಆರೋಪದ ಸ್ವರೂಪ ಮತ್ತು ಗಂಭೀರತೆ, ಸಮಾಜದ ಮೇಲಿನ ಪರಿಣಾಮ ಹಾಗೂ ಸಾಕ್ಷ್ಯ ನಾಶಪಡಿಸುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸಬೇಕಾಗುತ್ತದೆ ಎಂದು ತಿಳಿಸಿದೆ.


ರಿಮಾಂಡ್ ಪ್ರಕ್ರಿಯೆ:


ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆಯುವ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸುವುದು ರಿಮಾಂಡ್ ಪ್ರಕ್ರಿಯೆಯ ಸಂದರ್ಭದಲ್ಲಿ ಸಂಬಂಧಪಟ್ಟ ನ್ಯಾಯಾಲಯದ ವಿವೇಚನೆಗೆ ಒಳಪಟ್ಟಿರುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.


ಈ ಹಿನ್ನೆಲೆಯಲ್ಲಿ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಹೇಳಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದೆ.


ಜಾಮೀನು ನಿರಾಕರಣೆ:


ನಿರೀಕ್ಷಣಾ ಜಾಮೀನು ನಿರಾಕರಿಸಲಾಗಿದೆ ಎಂಬ ಕಾರಣಕ್ಕೆ ಆರೋಪಿಯನ್ನು ಕಡ್ಡಾಯವಾಗಿ ಪೊಲೀಸ್ ವಶಕ್ಕೆ ಪಡೆಯಬೇಕೆಂದಿಲ್ಲ. ತನಿಖೆಯಲ್ಲಿ ಸಂಗ್ರಹವಾಗುವ ಸಾಕ್ಷ್ಯಗಳು, ಪ್ರಕರಣದ ಸನ್ನಿವೇಶ ಹಾಗೂ ಆರೋಪಿಯ ನಡವಳಿಕೆಯನ್ನು ಆಧರಿಸಿ ವಶಕ್ಕೆ ಪಡೆಯುವ ಅಗತ್ಯದ ಬಗ್ಗೆ ತನಿಖಾಧಿಕಾರಿ ವಸ್ತುನಿಷ್ಠವಾಗಿ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.


ವಾದ-ಪ್ರತಿವಾದವೇನು:


ಡಾ. ಶಾಂತಾ ಹೊಸಮನಿ ಪರ ವಕೀಲರು, ತಮ್ಮ ಕಕ್ಷಿದಾರರು ವೈದ್ಯರಾಗಿದ್ದು, ಅವರ ವಿರುದ್ಧ ಈ ಹಿಂದೆ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಅವರು ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಅಲ್ಲದೆ, ಆರೋಪ ಸಾಬೀತುಪಡಿಸುವ ಯಾವುದೇ ಮಹತ್ವದ ಸಾಕ್ಷ್ಯ ಈವರೆಗೆ ಪೊಲೀಸರಿಗೆ ಲಭ್ಯವಾಗಿಲ್ಲ. ಹೀಗಾಗಿ, ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ವಾದಿಸಿದ್ದರು.


ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲರು, ಆರೋಪಿ ತನಿಖೆಗೆ ಸಮರ್ಪಕವಾಗಿ ಸಹಕರಿಸಿಲ್ಲ. ಆರೋಪಿಯೊಂದಿಗೆ ಪರಸ್ಪರ ಪರಿಚಯವಿರುವ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸಗಳಿವೆ ಎಂದು ತಿಳಿಸಿದರು.


ಪ್ರಕರಣದಲ್ಲಿ ಸಂಸ್ಥೆಯ ಒಳಗೆ ಮತ್ತು ಹೊರಗೆ ಇರುವ ಇತರ ವ್ಯಕ್ತಿಗಳ ಪಾತ್ರವೂ ಇರಬಹುದಾದ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಹೀಗಾಗಿ, ಸಮಗ್ರ ತನಿಖೆಯ ಹಿತದೃಷ್ಟಿಯಿಂದ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಸರ್ಕಾರಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.