ಬೆಂಗಳೂರು ಗ್ರಾಮಾಂತರ ಬೆಂಗಳೂರು ಉತ್ತರ ಜಿಲ್ಲೆ , ಬಾಗೇಪಲ್ಲಿ‌ ಭಾಗ್ಯ ನಗರ ಎಂದು ನಾಮಕರಣ

ಚಿಕ್ಕಬಳ್ಳಾಪುರ, ಜು.2-ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ನಾಮಕರಣ ಮಾಡಲು ಸರ್ಕಾರ ತೀರ್ಮಾನಿಸಿದೆ.


ಈ ಹಿಂದೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲಾಗಿತ್ತು.


ನಂದಿ ಗಿರಿಧಾಮದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರರಿಗೆ ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯವೆಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದರು ತಿಳಿಸಿದರು.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಗತಿ, ಆಗಬೇಕಾಗಿರುವ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಕುರಿತು ಪರಿಶೀಲಿಸಲು ಶ್ರೀಯುತ ಹೆಚ್ ಕೆ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದರು.


ಸಚಿವ ಸಂಪುಟ ಸಭೆಯಲ್ಲಿ ನಾವು 3400 ಕೋಟಿ ರೂಗಳಿಗೆ ಅನುಮೋದನೆ ನೀಡಿದ್ದೇವೆ. ಈ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ತೋಟಗಾರಿಕೆ, ನೀರಾವರಿ, ಪ್ರವಾಸೋದ್ಯಮ, ರಸ್ತೆ- ಸೇತುವೆ ಮುಂತಾದ ವಿಷಯಗಳಿಗೆ ಆದ್ಯತೆ ನೀಡಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.


ಪ್ರತೀ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು ಇದಕ್ಕೆ 1125.25 ಕೋಟಿ ಮಂಜೂರು ಮಾಡಲಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲೂ ವಿನೂತನ ಮಾದರಿಯಲ್ಲಿ ಶಾಲೆ ಆರಂಭಿಸಲಿದ್ದೇವೆ. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಯುಪಿಎಸ್​ಸಿ ಪರೀಕ್ಷೆ ತರಬೇತಿ ನೀಡಲು 10 ಕೋಟಿ ವೆಚ್ಚದಲ್ಲಿ ಬೆಂಗಳೂರಿನಲ್ಲಿ ಎರಡು ವಸತಿ ಶಾಲೆಗಳನ್ನು ತೆರೆಯಲು ನಿರ್ಧಾರ ಮಾಡಲಾಗಿದೆ. ಹೊಸ ತಾಲೂಕುಗಳಲ್ಲಿ ಸಮುದಾಯ ಆರೋಗ್ಯ ಸ್ಥಾಪಿಸಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದರು.


ಎತ್ತಿನಹೊಳೆ ಯೋಜನೆಗೆ ಒಟ್ಟು 23251 ಕೋಟಿ ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17147 ಕೋಟಿ ಖರ್ಚಾಗಿದೆ ಎಂದು ಅವರು ವಿವರಿಸಿದರು.
ಹಿಂದುಳಿದ ವರ್ಗದ ಅಭ್ಯರ್ಥಿಗಳು ಐಎಎಸ್, ಐಆರ್ ಎಸ್, ಐಪಿಎಸ್ ಸೇರಿ ಸ್ಪರ್ಧಾತ್ಮಕ ಪರೀಕ್ಷಾ‌ ತರಬೇತಿಗೆ 10 ಕೋಟಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲು‌ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ.


ಚಿಕ್ಕಬಳ್ಳಾಪುರದಲ್ಲಿ ಎಪಿಎಂಸಿ ವತಿಯಿಂದ 141.5 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಹಾಗೂ 56 ಕೋಟಿ ರೂ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್ ಸಿ, ಹಾಗೂ ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.


ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕೋಲಾರದ ಅಮಾನಿಕೆರೆ, ಅಂತರಗಂಗಾ ಬೆಟ್ಟ ಅಭಿವೃದ್ಧಿಗೆ 79 ಕೋಟಿ ರೂ., ಗಂಟ್ಲ ಮಲ್ಲಮ್ಮ ಜಲಾಶಯ ನಿರ್ಮಾಣಕ್ಕೆ 189 ಕೋಟಿ ರೂ., ನಂದಿಗಿರಿಧಾಮ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ ಎಂದರು.