
ಕಲಬುರಗಿ,ನ.28-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್ಡಿಬಿ) 7ನೇ ಅಧ್ಯಕ್ಷರಾಗಿ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಇಂದು ನಗರದ ಐವಾನ್-ಎ-ಶಾಹಿ ಪ್ರದೇಶದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಈ ಮಹತ್ವದ ಜವಾಬ್ದಾರಿ ನೀಡಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯದ ಸಚಿವರು, ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು
ಎರಡು ಬಾರಿ ಶಾಸಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ ತಮಗೆ ಇದೀಗ ಮಹತ್ವದ ಜವಾಬ್ದಾರಿ ದೊರೆತಿದೆ. ಹಿರಿಯ ಶಾಸಕರು ಮತ್ತು ಸಚಿವರ ಮಾರ್ಗದರ್ಶನದಲ್ಲಿ ಮಂಡಳಿಯ ಆಶಯಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.
ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಗ್ರಾಮೀಣ ಭಾಗದ ಆರ್ಥಿಕ ಬಲವರ್ಧನೆಗಾಗಿ ಹೈನುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಗೃಹ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಶರಣಪ್ರಕಾಶ ಪಾಟೀಲ್, ಈಶ್ವರ್ ಖಂಡ್ರೆ, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ
ಯಾದಗಿರಿ ಜಿಲ್ಲೆಯ ಶಾಸಕರು ಸೇರಿದಂತೆ ಹಲವು ಜನಪ್ರತಿನಿಧಿಗಳು, ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.




















