
ರಾಮನಗರ,ಮೇ.೦೮: ಈಗಾಗಲೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪಿಸಿರುವ ಇತರ ಸ್ಥಳೀಯ ಸಂಸ್ಥೆಗಳಿಗೆ ಮಾದರಿಯಾಗಿರುವ ರಾಮನಗರ ನಗರಸಭೆಯಲ್ಲಿ ಇಂದು ಸಮ ಸಮಾಜದ ನಿರ್ಮಾಣ, ಪ್ರಜಾಪ್ರಭುತ್ವದ ಕಲ್ಪನೆಯನ್ನು ೧೨ನೇ ಶತಮಾನದಲ್ಲೇ ಪ್ರತಿಪಾದಿಸಿದ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲಾಗುತ್ತಿದೆ.
ಇಂದು ಮೇ ೮ರ ಸಂಜೆ ೪.೩೦ಕ್ಕೆ ನಗರಸಭೆಯ ಆವರಣದಲ್ಲಿ ವಿಶ್ವಗುರು ಬಸವೇಶ್ವರರ ಪುತ್ಥಳಿ ಅನಾವರಣಗೊಳ್ಳಲಿದೆ. ತದನಂತರ ಬಸವ ಜಯಂತಿ ಕಾರ್ಯಕ್ರಮ ನಡೆಯಲಿದೆ. ಬಸವೇಶ್ವರರ ಪುತ್ಥಳಿಯನ್ನು ನ್ಯಾಯಮೂರ್ತಿಗಳಾದ ನಾಗಮೋಹನ ದಾಸ್ ಅನಾವರಣಗೊಳಿಸಲಿದ್ದಾರೆ. ಬಸವ ಜಯಂತಿ ಕಾರ್ಯಕ್ರಮವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಮೈಸೂರು ಸುತ್ತೂರು ಮಹಾ ಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾ ಸ್ವಾಮಿಗಳು ಹಾಗೂ ತುಮಕೂರು ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾ ಸ್ವಾಮಿ ಗಳ ದಿವ್ಯ ಸಾನಿಧ್ಯ ದಲ್ಲಿ ಈ ಕಾರ್ಯ ಕ್ರಮಗಳು ನಡೆಯಲಿವೆ. ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಆಶೀವರ್ಚನ ಇರಲಿದೆ. ಇವರೊಟ್ಟಿಗೆ ವಿವಿಧ ಮಠಾಧೀಶರ ಉಪಸ್ಥಿತಿ ಇರಲಿದೆ.
ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿಯವರು ಉಪಸ್ಥಿತರಿರುವರು. ಸಂಸದ ಡಾ.ಸಿ.ಎನ್.ಮಂಜುನಾಥ್ ಮತ್ತು ರಾಜ್ಯ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಗೌರವ ಉಪಸ್ಥಿತಿ ಇರಲಿದೆ. ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ ಎಂದು ನಗರಸಭಾಧ್ಯಕ್ಷ ಕೆ.ಶೇಷಾದ್ರಿ (ಶಶಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


























