
ಕೊಚ್ಚಿ/ಬೆಳಗಾವಿ, ನ.೨೧: ವಿಶ್ವಗುರು ೧೨ನೇ ಶತಮಾನದ ಹರಿಕಾರ, ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೊರಡಿಸಿದ್ದ ಲುಕ್ಔಟ್ ನೋಟಿಸ್ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ಭದ್ರತಾ ಸಿಬ್ಬಂದಿಗೆ ರವಿ ಹಂಜ್ ಅವರ ವಿರುದ್ಧ ಲುಕ್ಔಟ್ ನೋಟಿಸ್ ಜಾರಿಯಾಗಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ತಡೆದು, ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಬೆಳಗಾವಿ ಪೊಲೀಸರು ಅವರನ್ನು ತಮ್ಮ ವಶಕ್ಕೆ ಪಡೆಯಲು ಹಾಗೂ ಮುಂದಿನ ಕಾನೂನು ಪ್ರಕ್ರಿಯೆ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ರವಿ ಹಂಜ್ ಬರೆದಿರುವ ‘ಬಸವ ಮಂಟಪ’ ಕೃತಿಯಲ್ಲಿ ಬಸವಣ್ಣನವರ ವ್ಯಕ್ತಿತ್ವ, ವಿಚಾರಧಾರೆ ಹಾಗೂ ಲಿಂಗಾಯತ ಸಮುದಾಯದ ಕುರಿತು ಆಕ್ಷೇಪಾರ್ಹ ಅಂಶಗಳನ್ನು ಉಲ್ಲೇಖಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೃತಿಯಲ್ಲಿನ ಕೆಲವು ಬರಹಗಳು ಮತ್ತು ಖಾಸಗಿ ದೂರದರ್ಶನ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಸವಣ್ಣನವರ ಕುರಿತು ರವಿ ಹಂಜ್ ಮಾಡಿದ್ದ ಹೇಳಿಕೆಗಳು ವಿವಾದದ ಬಿರುಗಾಳಿ ಎಬ್ಬಿಸಿವೆ.
ಲಿಂಗಾಯತ ಸಂಘಟನೆಗಳು ಹಾಗೂ ಮಠಾಧೀಶರು ತೀವ ಕೃತಿಯ ಲೇಖಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ವಿವಾದಿತ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದ್ದರು.
ಬೆಳಗಾವಿ, ವಿಜಯಪುರ, ಬಸವನಬಾಗೇವಾಡಿ, ಚನ್ನಗಿರಿ ಹಾಗೂ ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ರವಿ ಹಂಜ್ ವಿರುದ್ಧ ದೂರುಗಳು ದಾಖಲಾಗಿವೆ. ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿಯೂ ಕೃತಿಗೆ ಸಂಬಂಧಿಸಿದಂತೆ ಲೇಖಕ ರವಿ ಹಂಜ್ ಮತ್ತು ಪ್ರಕಾಶಕರ ವಿರುದ್ಧ ದೂರು ಆಧರಿಸಿ ಪ್ರಕರಣ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.
ರವಿ ಹಂಜ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮೈಸೂರು, ಕೊಪ್ಪಳ, ವಿಜಯಪುರ, ಬೆಳಗಾವಿ ಸೇರಿದಂತೆ ಹಲವು ಕಡೆ ಪ್ರತಿಭಟನೆಗಳು ನಡೆದಿವೆ. ಕೆಲವು ಸಂಘಟನೆಗಳು ಕೃತಿಯ ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನು ಕೆಲವು ಸಂಘಟನೆಗಳು ಲೇಖಕರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿವೆ. ಮಠಾಧೀಶರು ಹಾಗೂ ವಿವಿಧ ರಾಜಕೀಯ ನಾಯಕರು ಕೂಡ ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ವಿವಾದ ತೀವ್ರಗೊಂಡ ಬೆನ್ನಲ್ಲೇ ರವಿ ಹಂಜ್ ವಿಡಿಯೋವೊಂದನ್ನು ಬಿಡುಗಡೆ ಮಾಡಿ ಕ್ಷಮೆ ಯಾಚಿಸಿದ್ದರು. ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಬಸವಣ್ಣನವರ ಕುರಿತು ತಾವು ಮಾತನಾಡಿದ್ದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ತಮ್ಮ ಹೇಳಿಕೆಗಳಿಂದ ವೀರಶೈವ ಲಿಂಗಾಯತ ಸಮುದಾಯದವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಮತ್ತು ಕ್ಷಮೆ ಕೋರುವುದಾಗಿ ಅವರು ವಿಡಿಯೋದಲ್ಲಿ ತಿಳಿಸಿದ್ದರು. ಅಲ್ಲದೆ, ‘ಬಸವ ಮಂಟಪ’ ಕೃತಿಯನ್ನು ಮತ್ತೆ ಬಿಡುಗಡೆ ಮಾಡುವುದಾಗಿ ಹೇಳಿ ಅದಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದ್ದರು. ಆದರೆ ಈ ಹೇಳಿಕೆ ಕೂಡ ಮತ್ತಷ್ಟು ಚರ್ಚೆಗೆ ಕಾರಣವಾಗಿತ್ತು.
ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯ ಭಾಗವಾಗಿ ರವಿ ಹಂಜ್ ಅವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ. ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಅವರನ್ನು ತಡೆದಿರುವುದು ಲುಕ್ಔಟ್ ನೋಟಿಸ್ ಆಧಾರಿತ ಕ್ರಮವಾಗಿದ್ದು, ಬೆಳಗಾವಿ ಪೊಲೀಸರು ಅಧಿಕೃತವಾಗಿ ವಶಕ್ಕೆ ಪಡೆದ ನಂತರವೇ ಮುಂದಿನ ಕಾನೂನು ಪ್ರಕ್ರಿಯೆ ನಡೆಯಲಿದೆ.
ಸದ್ಯ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸ್ವರೂಪ, ಯಾವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಚ್ಚಿಯಲ್ಲಿ ಲುಕ್ಔಟ್ ನೋಟಿಸ್ ಜಾರಿಯಾಗಿತ್ತು ಮತ್ತು ಅವರನ್ನು ಬೆಳಗಾವಿಗೆ ಕರೆತರುವ ಪ್ರಕ್ರಿಯೆ ಕುರಿತು ಹೆಚ್ಚಿನ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. ಕೃತಿಯಲ್ಲಿನ ಅಂಶಗಳ ಕುರಿತು ಕೇಳಿಬಂದಿರುವ ಆರೋಪಗಳು ತನಿಖೆ ಮತ್ತು ಕಾನೂನು ಪ್ರಕ್ರಿಯೆಗೆ ಒಳಪಟ್ಟಿವೆ.























