ನವದೆಹಲಿ, ಅ.6- ಕೇಂದ್ರ ಚುನಾವಣಾ ಆಯೋಗ ಇಂದು 243 ಸದಸ್ಯ ಬಲದ ಬಿಹಾರ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿ ಮಾಡಿದೆ. ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 6 ಮೊದಲ ಹಾಗೂ ನವೆಂಬರ್ 11 ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಚುನಾವಣಾ ವೇಳಾ ಪಟ್ಟಿ ಪ್ರಕಟಿಸಿದ ಮುಖ್ಯ ಚುನಾವಣಾ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್, ನವೆಂಬರ್ 14 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದರು.
ಅಕ್ಟೋಬರ್ 10 ರಂದು ಗೆಜೆಟ್ ಅಧಿಸೂಚನೆ ಪ್ರಕಟವಾಗಲಿದೆ. ಅದೇ ರೀತಿ 2ನೇ ಹಂತದಲ್ಲಿ 122 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 13ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ.
ಮೊದಲ ಹಂತದ ಮತದಾನ ನಡೆಯಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.17 ಕೊನೆಯ ದಿನವಾಗಿದೆ.
2ನೇ ಹಂತದ ಕ್ಷೇತ್ರಗಳಿಗೆ ಅ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 18 ಮತ್ತು ಅಕ್ಟೋಬರ್ 21 ರಂದು ಕ್ರಮವಾಗಿ ಮೊದಲ ಮತ್ತು 2ನೇ ಹಂತದ ಕ್ಷೇತ್ರಗಳಿಗೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಯಲಿದೆ.
ಅಕ್ಟೋಬರ್ 20 ಹಾಗೂ ಅ.23 ಕ್ರಮವಾಗಿ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ನವೆಂಬರ್ 6ರಂದು ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
ಬಿಹಾರದಲ್ಲಿ 7.43 ಕೋಟಿ ಮತದಾರರಿದ್ದಾರೆ. 3.92 ಕೋಟಿ ಪುರುಷ ಮತದಾರರು, 3.50 ಮಹಿಳಾ ಮತದಾರರು, 1725 ತೃತೀಯ ಲಿಂಗಿ ಮತದಾರರು ಇದ್ದಾರೆ. ಯುವ ಮತದಾರರು 14 ಕೋಟಿ, 14 ಸಾವಿರ ಶತಾಯುಷಿ ಮತದಾರರು ಇದ್ದಾರೆ. ಒಟ್ಟು 90 ಸಾವಿರ ಮತಗಟ್ಟೆ ನಿರ್ಮಿಸಲಾಗುವುದು. 818 ಮತದಾರರಿಗೆ ಒಂದು ಮತಗಟ್ಟೆ ಇರಲಿದೆ ಎಂದು ಅವರು ಅಂಕಿ ಅಂಶ ನೀಡಿದರು.
22 ವರ್ಷಗಳ ಬಳಿಕ ರಾಜ್ಯದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಅನರ್ಹರನ್ನು ಪಟ್ಟಿಯಿಂದ ಕೈಬಿಟ್ಟು ಪಾರದರ್ಶಕ ಚುನಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
243 ಸದಸ್ಯ ಬಲದ ಬಿಹಾರ ವಿಧಾನಸಭೆಯ ಅಧಿಕಾರಾವಧಿ ನವೆಂಬರ್ 22ರಂದು ಕೊನೆಗೊಳ್ಳಲಿದೆ ಎಂದು ತಿಳಿಸಿದರು.
























