
ನವದೆಹಲಿ, ಜು. ೨೭- ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯಲ್ಲಿಂದು ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮವನ್ನು ತಡೆಯಲು ಹೆಚ್ಚಿನ ಜೈಲು ಶಿಕ್ಷೆ, ದಂಡ ವಿಧಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿಂದು ವಿಪಕ್ಷಗಳ ಗದ್ದಲ, ಕೋಲಾಹಲದ ನಡುವೆಯೇ ಮಂಡಿಸಿತು.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮ ತಡೆಯಲು ನೂತನ ತಿದ್ದುಪಡಿ ಮಸೂದೆಯನ್ನು ಮಂಡಿಸುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದರು. ಈ ತಿದ್ದುಪಡಿ ಮಸೂದೆಗೆ ಕೇಂದ್ರದ ಸಚಿವ ಸಂಪುಟ ಸಹ ಒಪ್ಪಿಗೆ ನೀಡಿತ್ತು. ಸಚಿವ ಸಂಪುಟದ ಒಪ್ಪಿಗೆ ನೀಡಿದ ಸಾರ್ವಜನಿಕ ಪರೀಕ್ಷೆಗಳ ( ಅಕ್ರಮ ತಡೆ) ತಿದ್ದುಪಡಿ ಮಸೂದೆ-೨೦೨೬ನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿಂದು ಮಂಡಿಸಿದರು.
ಈ ಮಸೂದೆ ಮಂಡನೆ ವೇಳೆ ಪ್ರತಿ ಪಕ್ಷಗಳು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗಿದ್ದು, ಸದನದಲ್ಲಿ ಗದ್ದಲ, ಕೋಲಾಹಲದ ವಾತಾವರಣಕ್ಕೆ ಕಾರಣವಾಯಿತು. ಈ ಗದ್ದಲ ಕೋಲಾಹಲದ ನಡುವೆಯ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ.
ಈ ತಿದ್ದುಪಡಿ ಮಸೂದೆ ಬಗ್ಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆಗಳು ನಡೆದು ಅದು ಅಂಗೀಕಾರವಾಗಬೇಕಾಗಿದೆ. ಪರೀಕ್ಷೆಗಳ ಅಕ್ರಮ ತಡೆಗೆ ಸಂಬಂಧಿಸಿದಂತೆ ಈಗಿರುವ ಕಾಯ್ದೆಗೆ ತಿದ್ದುಪಡಿ ತಂದು ಹೆಚ್ಚಿನ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸುವ ಪ್ರಸ್ತಾವವನ್ನು ನೂತನ ಮಸೂದೆ ಒಳಗೊಂಡಿದೆ.
ಈಗ ಲೋಕಸಭೆಯಲ್ಲಿ ಮಂಡಿಸಲಾಗಿರುವ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗುವ ವ್ಯಕ್ತಿಗಳಿಗೆ ಈಗಿರುವ ಕನಿಷ್ಠ ೩ ವರ್ಷ, ಗರಿಷ್ಠ ೫ ವರ್ಷ ಜೈಲು ಶಿಕ್ಷೆಯನ್ನು ಬದಲಿಸಿ, ಕನಿಷ್ಠ ೫ ವರ್ಷ, ಗರಿಷ್ಠ ೧೦ ವರ್ಷ ಜೈಲು ಶಿಕ್ಷೆ ವಿಧಿಸುವ ಅಂಶಗಳಿವೆ. ಹಾಗೆಯೇ ದಂಡವನ್ನು ೧೦ ಲಕ್ಷದಿಂದ ೫೦ ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗುವ ಖಾಸಗಿ ಸಂಸ್ಥೆಗಳು ಹಾಗೂ ಪರೀಕ್ಷಾ ಸೇವಾ ಸಂಸ್ಥೆಗಳನ್ನು ನಡೆಸುವವರಿಗೆ ದಂಡವನ್ನು ೧ ರಿಂದ ೫ ಕೋಟಿ ರೂ.ಗಳವೆರೆಗೆ ಏರಿಕೆ ಮಾಡಲಾಗಿದ್ದು, ಕನಿಷ್ಠ ೭ ವರ್ಷದಿಂದ ಗರಿಷ್ಠ ೧೦ ವರ್ಷಗಳ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವ ಮಾಡಲಾಗಿದೆ.
ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಮುದ್ರಣ, ಸಾಗಾಣೆ ಮತ್ತಿತರ ಸೇವೆಗಳನ್ನು ಒದಗಿಸುವ ಸಂಸ್ಥೆಗಳು ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದರೆ ಅವರಿಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಅಂಶಗಳು ಈ ತಿದ್ದುಪಡಿ ಮಸೂದೆಯಲ್ಲಿ ಇದೆ.
ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗುವ ಖಾಸಗಿ ಸಂಸ್ಥೆಗಳ ಏಜೆನ್ಸಿಗಳು, ಸಂಸ್ಥೆಗಳ ಮುಖ್ಯಸ್ಥರು ಹಾಗೂ ನಿರ್ದೇಶಕರುಗಳ ವಿರುದ್ಧವೂ ಮೊಕದ್ದಮೆ ದಾಖಲಿಸಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ತ್ವರಿತ ನ್ಯಾಯಾಲಯ ಸ್ಥಾಪನೆ
ಪರೀಕ್ಷಾ ಅಕ್ರಮಗಳ ತನಿಖೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಿ ನಿಗದಿತ ಅಧಿಯೊಳಗೆ ನ್ಯಾಯಾಲಯದ ವಿಚಾರಣೆಯನ್ನು ಪೂರ್ಣಗೊಳಿಸಲು ತ್ವರಿತ ನ್ಯಾಯಾಲಯ ಸ್ಥಾಪನೆಗೂ ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ತನಿಖೆ ನಡೆಸುವ ಪೊಲೀಸರು ಕೇಂದ್ರದ ತನಿಖಾ ಸಂಸ್ಥೆಗಳ ನೆರವು ಪಡೆದು ತನಿಖೆಯ್ನು ೨ ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂಬ ಅಂಶವನ್ನೂ ಈ ತಿದ್ದುಪಡಿ ಮಸೂದೆಯಲ್ಲಿ ಸೇರಿಸಲಾಗಿದೆ. ಹಾಗೆಯೇ ಕೇಂದ್ರ ಸರ್ಕಾರ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ವಿಶೇಷ ಟಾಸ್ಕ್ಫೋರ್ಸ್ ರಚಿಸಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ತ್ವರಿತ ನ್ಯಾಯಾಲಯಗಳು ಪ್ರತಿದಿನ ವಿಚಾರಣೆ ನಡೆಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಆರೋಪ ಪಟ್ಟಿ ಸಲ್ಲಿಕೆಯಾದ ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂಬ ಅಂಶವನ್ನು ಈ ತಿದ್ದುಪಡಿ ಕಾಯ್ದೆಯಲ್ಲಿ ಸೇರ್ಪಡೆ ಮಾಡಲಾಗಿದೆ.
ಲೋಕಸಭೆ ಮುಂದಕ್ಕೆ
ಪರೀಕ್ಷಾ ಅಕ್ರಮಗಳನ್ನು ತಡೆಯುವ ಮಸೂದೆ ಗದ್ದಲದಲ್ಲೇ ಮಂಡನೆಯಾದ ನಂತರ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಿದರು.




























