Home ಮುಖಪುಟ ಸುದ್ದಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಸಜ್ಜು

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಸಜ್ಜು

ಬೆಂಗಳೂರು.ಸೆ.೨೬- ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಡೆ ನಾಯಕರು ರಾಜ್ಯವ್ಯಾಪಿ ಹೋರಾಟದ ರೂಪುರೇಷೆ ಸಿದ್ಧಪಡಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರ ಜಂಟಿ ಸಭೆಯಲ್ಲಿ ಹಲವು ವಿಚಾರಗಳ ಕುರಿತಂತೆ ಗಂಭೀರ ಚರ್ಚೆ ನಡೆದು ಆಡಳಿತ ರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಂಟಿಯಾಗಿ ಹೋರಾಟ ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.

ಸಭೆಯಲ್ಲಿ ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆ ಹಾಗೂ ರೈತರಿಗೆ ಸರ್ಕಾರ ಘೋಷಿಸಿರುವ ಪರಿಹಾರದ ಕುರಿತು ಪ್ರಮುಖವಾಗಿ ಚರ್ಚೆ ನಡೆಯಿತು. ಅಲ್ಲದೆ, ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ಕಾರ್ಯತಂತ್ರ ರೂಪಿಸುವುದು ಹಾಗೂ ಬಿಜೆಪಿ ಜೆಡಿಎಸ್ ನಡುವಿನ ಚುನಾವಣಾ ಸಮನ್ವಯದ ಬಗ್ಗೆಯೂ ನಾಯಕರು ಸಮಾಲೋಚನೆ ನಡೆಸಿದರು.

ಇದರ ಜೊತೆಗೆ ರೈತರಿಗೆ ಸರ್ಕಾರ ಘೋಷಿಸಿರುವ ೨,೫೦೦ ಪರಿಹಾರಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದು, ಕನಿಷ್ಠ ೨೫,೦೦೦ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಜೊತೆಗೆ ರೈತರ ಸಂಕಷ್ಟವನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಜೆಡಿಎಸ್ ನಾಯಕ ಸುರೇಶ್ ಬಾಬು, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಭೋಜೇಗೌಡ ಸೇರಿದಂತೆ ಹಲವು ಮೈತ್ರಿ ನಾಯಕರು ಭಾಗವಹಿಸಲಿದ್ದಾರೆ.