Home ಜಿಲ್ಲೆ ಕಲಬುರಗಿ ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ: ಸಚಿವ ಅಜಯ್ ಸಿಂಗ್

ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ: ಸಚಿವ ಅಜಯ್ ಸಿಂಗ್

ಕಲಬುರಗಿ,ಆ.23-ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಕಲಾಪಕ್ಕೆ ಬಿಜೆಪಿ ಪದೇಪದೆ ಅಡ್ಡಿಪಡಿಸುತ್ತಿರುವುದನ್ನು ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಜಯ್ ಧರ್ಮಸಿಂಗ್ ಖಂಡಿಸಿದರು.
ನಗರದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇದೆ. ಈ ಬಗ್ಗೆ ಅಧಿವೇಶದಲ್ಲಿ ಚರ್ಚೆ ನಡೆಸುವ ಬದಲು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸುವ ಮೂಲಕ ಬಿಜೆಪಿ ಸದನದ ಕಲಾಪವನ್ನು ಹಾಳುಗೆಡುವುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜನರಿಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ವಿಧಾನಮಂಡಲ ವೇದಿಕೆಯಾಗಬೇಕು. ಆದರೆ, ಬಿಜೆಪಿ ಉದ್ದೇಶಪೂರ್ವಕವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದೆ ಎಂದು ಹೇಳಿದರು.
ಕೇಂದ್ರದಲ್ಲಿನ ಅನೇಕ ಜನ ಬಿಜೆಪಿ ಸಚಿವರು ಮತ್ತು ಶಾಸಕರ ಮೇಲೆ ಆರೋಪಗಳಿವೆ. ಅವರೆಲ್ಲರು ರಾಜೀನಾಮೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಆರೋಪ ಎದುರಿಸುತ್ತಿರುವ ಕೇಂದ್ರದ ಅನೇಕ ಜನ ಬಿಜೆಪಿ ಸಚಿವರು ಮತ್ತು ಶಾಸಕರು ರಾಜೀನಾಮೆ ನೀಡಲಿ ನಾವು ನೀಡುತ್ತೇವೆ ಎಂದರು.
ಸ್ವಾತಂತ್ರ್ಯಕ್ಕೂ ಮುನ್ನವೇ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಾಡುವ ನಿರ್ಧಾರ ಮಾಡಲಾಗಿದೆ. ಕಾಂಗ್ರೆಸ್ ಇಂದಿಗೂ ಅದೇ ಪರಂಪರೆಯನ್ನು ಮುಂದುವರಿಸುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಜನ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಒಬ್ಬರಾದರೂ ಸ್ವಾತಂತ್ರ್ಯ ಹೋರಾಟಗಾರರಿದ್ದರೆ ತಿಳಿಸಿ ಎಂದರು.
ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಮಾಜಿ ಮೇಯರ್ ಶರಣಕುಮಾರ ಮೋದಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
…………………..
ಸೆ.17 ರಂದು ಕಲಬುರಗಿಗೆ ಸಿಎಂ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸೆಪ್ಟೆಂಬರ್ 17 ರಂದು ಕಲಬುರಗಿಗೆ ಆಗಮಿಸಲಿದ್ದಾರೆ ಎಂದು ಸಚಿವ ಡಾ.ಅಜಯ್ ಸಿಂಗ್ ತಿಳಿಸಿದರು. ಸೆಪ್ಟೆಂಬರ್ 17 ರಂದು ಆಚರಿಸಲಾಗುವ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
………………….
ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ
ಮುಂದಿನ ಕ್ಯಾಬಿನೆಟ್ ಮೀಟಿಂಗ್‍ನ್ನು ಕಲಬುರಗಿಯಲ್ಲಿ ನಡೆಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಮಾಡಲಾಗುವುದು. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಲಾಗುವುದು ಎಂದು ತಿಳಿಸಿದರು.