
ಬೆಂಗಳೂರು, ಆ. ೧೪- ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದನ್ನು ಖಂಡಿಸಿ ಬಿಜೆಪಿಯ ಶಾಸಕರುಗಳು ಇಂದು ಪ್ರತಿಭಟನಾ ಧರಣಿ ನಡೆಸಿದರು
ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರುಗಳಾದ ಆರ್. ಅಶೋಕ್, ಚಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬಿಜೆಪಿಯ ವಿಧಾನಸಭೆ ಹಾಗೂ ವಿಧಾನಪರಿಷತ್‌ನ ಎಲ್ಲ ಸದಸ್ಯರು ಈ ಪ್ರತಿಭಟನಾ ಧರಣಿಯಲ್ಲಿ ಭಾಗಿಯಾಗಿ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸೌಧದ ಮುಂದಿರುವ ತಾಯಿ ಭುವನೇಶ್ವರಿ ಪ್ರತಿಮೆ ಬಳಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ದೇಶದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಕೇಂದ್ರದಲ್ಲಿ ಮಹಿಳಾ ಮೀಸಲಾತಿ ಜಾರಿ ಮಾಡಲು ಕಾಂಗ್ರೆಸ್ ವಿರೋಧ ವ್ಯಕ್ತ ಮಾಡಿತ್ತು. ಕರ್ನಾಟಕದಲ್ಲೂ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಕೊಡದೆ ಅಪಮಾನ ಮಾಡಿದೆ ಎಂದು ದೂರಿದರು.
ಮಹಿಳಾ ಸಚಿವರಿಲ್ಲದೆ ಅಧಿವೇಶನ ನಡೆಯುತ್ತಿರುವುದು ಇದೇ ಮೊದಲು. ಇದನ್ನು ಬಿಜೆಪಿ ಖಂಡಿಸುತ್ತದೆ. ತಾಯಂದಿರಿಗೆ ಕಾಂಗ್ರೆಸ್ ಅಪಮಾನ ಮಾಡಿದೆ ಎಂದು ಟೀಕಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವೆ, ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಕೊಡದೆ ಅವಮಾನ ಮಾಡಿದ್ದಾರೆ. ಕಾಂಗ್ರೆಸ್‌ನ ಧೋರಣೆಯನ್ನು ಖಂಡಿಸುತ್ತೇವೆ. ಕಾಂಗ್ರೆಸ್‌ನ ಈ ಮಹಿಳಾ ವಿರೋಧಿ ಧೋರಣೆಗೆ ಮಹಿಳೆಯರು ತಕ್ಕ ಉತ್ತರ ನೀಡುತ್ತಾರೆ ಎಂದು ಹೇಳಿದರು.
ಸಂಸತ್‌ನಲ್ಲೂ ಮಹಿಳಾ ಮೀಸಲು ಮಸೂದೆಗೆ ಕಾಂಗ್ರೆಸ್ ವಿರೋಧ ವ್ಯಕ್ತ ಮಾಡಿತ್ತು. ಕಾಂಗ್ರೆಸ್ ಮಹಿಳೆಯರಿಗೆ ಯಾವ ರೀತಿ ಗೌರವ ಕೊಡುತ್ತದೆ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದರು.
ಬಿಜೆಪಿಯ ಮತ್ತೊಬ್ಬ ಮಹಿಳಾ ಶಾಸಕಿ ಮಂಜುಳಾ ಲಿಂಬಾವಳಿ ಅವರು ಮಾತನಾಡಿ, ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡಿಲ್ಲ. ಇಷ್ಟು ದಿನ ಒಬ್ಬಮಹಿಳೆ ಸಚಿವೆಯಾಗಿದ್ದರು ಈಗ ಅದೂ ಇಲ್ಲ. ಇದು ಮಹಿಳೆಯರಿಗೆ ಆಗಿರುವ ಅಪಮಾನ. ಮುಂದೆ ಈ ಬಗ್ಗೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಸಂಪುಟದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದೆ ಮಾತೆಯರಿಗೆ ಅವಮಾನ ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂದು ಶಾಸಕಿ ಭಾಗೀರತಿ ಮುರುಳ್ಯ ಹೇಳಿದರು.
































