
ಬೃಹತ್ ಪ್ರತಿಭಟನೆ
ಬೆಂಗಳೂರು, ಜು. ೧೭- ಬಿಡದಿಯ ಟೌನ್‌ಶಿಪ್‌ಗೆ ರೈತರ ಭೂಮಿ ಸ್ವಾದೀನ ವಿರೋಧಿಸಿ ರಾಜ್ಯ ಬಿಜೆಪಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನಾ ಧರಣಿ ನಡೆಸಿ, ಟೌನ್‌ಶಿಪ್ ಯೋಜನೆ ವಿರುದ್ಧ ರಣಕಹಳೆ ಮೊಳಗಿಸಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಧರಣಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಎಲ್ಲ ಪ್ರಮುಖ ನಾಯಕರುಗಳು ಭಾಗಿಯಾಗಿ, ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ, ರಾಜ್ಯ ಸರ್ಕಾರ ರೈತರ ವಿರೋಧಿ ಸರ್ಕಾರ ಎಂದು ಗುಡುಗಿದರು.
ಬಿಡದಿ ಟೌನ್‌ಶಿಪ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು. ಈ ಯೋಜನೆಯನ್ನು ಜಾರಿ ಮಾಡಿದರೆ ಬಿಜೆಪಿ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ನಡೆಸಲಿದೆ ಎಂದು ಬಿಜೆಪಿ ನಾಯಕರುಗಳು ಹೇಳಿದರು.
ಟೌನ್‌ಶಿಪ್ ಹೆಸರಿನಲ್ಲಿ ರೈತರ ಜಮೀನು ಲೂಟಿ ವಿರುದ್ಧ ರಣಕಹಳೆ ಮೊಳಗಿಸಿದ ಬಿಜೆಪಿ ನಾಯಕರುಗಳು, ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ದಂಧೆ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು
ಈ ಪ್ರತಿಭಟನೆ ಧರಣಿಯಲ್ಲಿ ಬಿಜೆಪಿಯ ಬಹುತೇಕ ಎಲ್ಲ ಶಾಸಕರು, ಸಂಸದರು. ನೂರಾರು ಕಾರ್ಯಕರ್ತರ ಜತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಚಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವಾರು ನಾಯಕರುಗಳು ಭಾಗವಹಿಸಿದ್ದರು.
ರಿಯಲ್ ಎಸ್ಟೇಟ್ ದಂಧೆಗಿಳಿದ ಸರ್ಕಾರ
ಬಿಡದಿ ಟೌನ್‌ಶಿಪ್ ನೆಪದಲ್ಲಿ ರಾಜ್ಯ ಸರ್ಕಾರ ರಿಯಲ್ ಎಸ್ಟೇಟ್ ದಂಧೆಗೆ ಇಳಿದಿದೆ ಎಂದು ದೂರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಯಾವುದೇ ಕಾರಣಕ್ಕೂ ಟೌನ್‌ಶಿಪ್‌ಗೆ ರೈತರ ಜಮೀನನ್ನು ಸ್ವಾದೀನಪಡಿಸಿಕೊಳ್ಳಲು ಬಿಡಲ್ಲ ಎಂದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಂದು ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ ನಡೆಸಿದ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಬಿಡದಿ ಭಾಗದಲ್ಲಿ ರೈತರ ಜಮೀನುಗಳನ್ನು ಬಲವಂತವಾಗಿ ಕಸಿದುಕೊಳ್ಳುವ ಹುಚ್ಚಾಟ ನಡೆಸಿದೆ. ಇದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್‌ಗೆ ನನ್ನನ್ನು ಮುಖ್ಯಮಂತ್ರಿ ಮಾಡಿದರೆ ಬಿಡದಿ ಟೌನ್‌ಶಿಪ್ ಮಾಡಿಕೊಡುತ್ತೇನೆ. ಡಿಎಲ್‌ಎಫ್ ಸಂಸ್ಥೆಗೆ ಸಹಾಯ ಮಾಡಿಕೊಡುತ್ತೇನೆ ಎಂದು ಕಾಂಗ್ರೆಸ್ ವರಿಷ್ಠೆ ಪ್ರಿಯಾಂಕ ಗಾಂಧಿ ಅವರಿಗೆ ಭರವಸೆ ನೀಡಿದ್ದರು. ಈ ಭರವಸೆ ಈಡೇರಿಸಲು ರೈತರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ರೈತ ಕುಟುಂಬಗಳ ಮೇಲೆ ಸರ್ಕಾರ ಗೂಂಡಾಗಿರಿ, ದರ್ಪ ತೋರುತ್ತಿದೆ ಎಂದು ಆರೋಪಿಸಿದರು.
ಬಿಡದಿ ಟೌನ್‌ಶಿಪ್ ವಿರೋಧಿಸಿ ಹೋರಾಟ ಮಾಡುತ್ತಿರುವ ಜಮೀನು ನೀಡಲು ಒಪ್ಪದ ರೈತ ಕುಟುಂಬಗಳ ಮನೆಗೆ ಗುಂಡಾಗಳನ್ನು ಕಳುಹಿಸಿ ಪ್ರಾಣ ಬೆದರಿಕೆ ಹಾಕಲಾಗುತ್ತಿದೆ.. ಅಲ್ಲದೆ ರೈತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗಟ್ಟುವ ಕುತಂತ್ರವನ್ನು ಸರ್ಕಾರ ಮಾಡುತ್ತಿದೆ ಎಂದು ದೂರಿದರು.
ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ರಾಜ್ಯ ಸರ್ಕಾರ ರೈತ ವಿರೋಧಿಯಾಗಿ ನಡೆದುಕೊಂಡಿದ್ದರೂ ರೈತರ ರಕ್ಷಣೆ ಮಾಡುತ್ತೇನೆ ಎಂದಿರುವ ರಾಹುಲ್‌ಗಾಂಧಿ ಮೌನ ವಹಿಸಿರುವುದು ಅಚ್ಚರಿ ತಂದಿದೆ ಎಂದ ಅವರು, ಟೌನ್‌ಶಿಪ್ ಯೋಜನೆಯನ್ನು ಕೈಬಿಡುವವರೆಗೂ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದರು.
ಟೌನ್‌ಶಿಪ್‌ಗೆ ಅವಕಾಶ ನೀಡಲ್ಲ
ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದರು.
ಬಿಡದಿ ಟೌನ್‌ಶಿಪ್ ವಿರೋಧಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬಿಜೆಪಿ ನಡೆಸಿದ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಯೋಜನೆಗೆ ಅವಕಾಶ ಕೊಡುವುದಿಲ್ಲ. ಕಾಂಗ್ರೆಸ್ ಸರ್ಕಾರ ಲ್ಯಾಂಡ್ ಮಾಫಿಯಾ ಸರ್ಕಾರ ಎಂದು ಟೀಕಿಸಿದರು
ರಾಜ್ಯದ ರೈತರು ಬರಗಾಲದಿಂದ ಪರಿತಪಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಅತ್ಯಂತ ಫಲವತ್ತಾದ ಜಮೀನನ್ನು ಟೌನ್‌ಶಿಪ್‌ಗೆ ಕಿತ್ತುಕೊಳ್ಳಲು ಹೊರಟಿದೆ. ಇದರ ವಿರುದ್ಧ ನಾವಿದ್ದೇವೆ. ರೈತರ ಹೋರಾಟಕ್ಕೆ ಬೆಂಬಲವಾಗಿ ನಾವು ನಿಲ್ಲುತ್ತೇವೆ ಎಂದು ಅವರು ಹೇಳಿದರು.

































