Home ಜಿಲ್ಲೆ ಶಾಶ್ವತ ನಿವಾಸ ಪ್ರಮಾಣಪತ್ರ ಯೋಜನೆಗೆ ಬಿಜೆಪಿ ತೀವ್ರ ವಿರೋಧ

ಶಾಶ್ವತ ನಿವಾಸ ಪ್ರಮಾಣಪತ್ರ ಯೋಜನೆಗೆ ಬಿಜೆಪಿ ತೀವ್ರ ವಿರೋಧ

ಯಾದಗಿರಿ: ಜು.12:ಕರ್ನಾಟಕ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಕರ್ನಾಟಕ ಶಾಶ್ವತ ನಿವಾಸ ಪ್ರಮಾಣಪತ್ರ (Pಖಅ)-2026 ಅಧಿಸೂಚನೆ ರಾಜ್ಯದ ಭದ್ರತೆ, ಸಂವಿಧಾನ ಹಾಗೂ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶರಡ್ಡಿ ವೆಂಕಟರಡ್ಡಿ ಮುದ್ನಾಳ ಆಗ್ರಹಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಧಿಸೂಚನೆ ಹೊರರಾಜ್ಯಗಳಿಂದ ಬಂದ ವಲಸಿಗರು ಹಾಗೂ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳಿಗೂ ಅನುಕೂಲ ಕಲ್ಪಿಸುವ ಸಾಧ್ಯತೆ ಇರುವುದರಿಂದ ಗಂಭೀರ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಭಾರತದ ಸಂವಿಧಾನವು ದೇಶದ ಎಲ್ಲಾ ನಾಗರಿಕರಿಗೆ ಒಂದೇ ಪೌರತ್ವವನ್ನು ಒದಗಿಸಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ “ಶಾಶ್ವತ ನಿವಾಸಿ” ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು. ಈ ಕ್ರಮಕ್ಕೆ ಯಾವುದೇ ಸ್ಪಷ್ಟ ಸಾಂವಿಧಾನಿಕ ಅಥವಾ ಶಾಸನಬದ್ಧ ಆಧಾರವಿಲ್ಲದಿದ್ದು, ಸಂವಿಧಾನದ 14ನೇ ವಿಧಿಯಲ್ಲಿರುವ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಅಧಿಸೂಚನೆಯಲ್ಲಿ ನಿವಾಸ ಮತ್ತು ಸ್ಥಳೀಯ ಪರಿಶೀಲನೆಗೆ ಮಾತ್ರ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಭಾರತೀಯ ಪೌರತ್ವದ ಕಡ್ಡಾಯ ಪರಿಶೀಲನೆಗೆ ಯಾವುದೇ ಸ್ಪಷ್ಟ ವ್ಯವಸ್ಥೆ ಕಲ್ಪಿಸಿಲ್ಲ. ಇದರಿಂದ ಅಕ್ರಮ ವಲಸಿಗರು ಅಥವಾ ಕಾನೂನುಬಾಹಿರವಾಗಿ ನೆಲೆಸಿರುವ ವ್ಯಕ್ತಿಗಳು ಸುಳ್ಳು ದಾಖಲೆಗಳ ಮೂಲಕ ಶಾಶ್ವತ ನಿವಾಸ ಪ್ರಮಾಣಪತ್ರ ಪಡೆಯುವ ಅಪಾಯವಿದೆ ಎಂದು ಅವರು ಎಚ್ಚರಿಸಿದರು.

ಇಂತಹ ಪ್ರಮಾಣಪತ್ರದ ಆಧಾರದ ಮೇಲೆ ಸರ್ಕಾರಿ ಯೋಜನೆಗಳು, ಶಿಕ್ಷಣ, ಉದ್ಯೋಗ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯುವ ಸಾಧ್ಯತೆ ಹೆಚ್ಚಾಗಲಿದ್ದು, ಅಕ್ರಮ ನಿವಾಸವನ್ನು ಕಾನೂನುಬದ್ಧಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು. ಇದು ಕೇಂದ್ರ ಸರ್ಕಾರದ ಪೌರತ್ವ, ವಲಸೆ ಹಾಗೂ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನೀತಿಗಳ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ತಕ್ಷಣ ಮಧ್ಯಪ್ರವೇಶಿಸಿ, Pಖಅ-2026 ಅಧಿಸೂಚನೆಯ ಸಾಂವಿಧಾನಿಕ ಮಾನ್ಯತೆಯನ್ನು ಪರಿಶೀಲಿಸಬೇಕು. ಪರಿಶೀಲನೆ ಪೂರ್ಣಗೊಳ್ಳುವವರೆಗೆ ಅಧಿಸೂಚನೆಯ ಜಾರಿಗೆ ತಡೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ, ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರ ಯಾವ ಸಾಂವಿಧಾನಿಕ ಹಾಗೂ ಕಾನೂನುಬದ್ಧ ಅಧಿಕಾರವನ್ನು ಬಳಸಿದೆ ಎಂಬ ಬಗ್ಗೆ ಸಮಗ್ರ ವರದಿ ಪಡೆಯಬೇಕು. ಸಮರ್ಥ ಕೇಂದ್ರ ಸಂಸ್ಥೆಗಳ ಮೂಲಕ ಭಾರತೀಯ ಪೌರತ್ವವನ್ನು ಪರಿಶೀಲಿಸದೇ ಯಾವುದೇ ಶಾಶ್ವತ ನಿವಾಸ ಪ್ರಮಾಣಪತ್ರ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದು ಮಧ್ಯಪ್ರವೇಶ ಕೋರಿರುವುದನ್ನು ಉಲ್ಲೇಖಿಸಿದ ಅವರು, ಕೇಂದ್ರ ಸರ್ಕಾರ ರಾಷ್ಟ್ರದ ಭದ್ರತೆ ಮತ್ತು ಸಂವಿಧಾನದ ಆಶಯವನ್ನು ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ದೇವಿಂದ್ರನಾಥ ನಾದ್, ವೆಂಕಟರಡ್ಡಿ ಅಬ್ಬೆತುಮಕೂರು, ಲಿಂಗಪ್ಪ ಹತ್ತಿಮನಿ ಹಾಗೂ ಪಕ್ಷದ ಮಾಧ್ಯಮ ವಕ್ತಾರ ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಉಪಸ್ಥಿತರಿದ್ದರು.