Home ಜಿಲ್ಲೆ ಬಿಜೆಪಿಯ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಬಿಜೆಪಿಯ ಅನಿರ್ದಿಷ್ಟಾವಧಿ ಧರಣಿ ಅಂತ್ಯ

ಸಂಜೆವಾಣಿ ವಾರ್ತೆ,
ವಿಜಯಪುರ, ಆ. ೨೨: ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಹಾಗೂ ವಿಜಯಪುರ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಸಿಂದಗಿ ವಿಧಾನಸಭಾ ಕ್ಷೇತ್ರದ ಮಂಡಲದ ವತಿಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರ ನಾಲ್ಕನೇ ದಿನಕ್ಕೆ ಕಾಲಿಟ್ಟು ಅಂತ್ಯಗೊAಡಿತು.
ಧರಣಿ ನಿರತ ಬಿಜೆಪಿ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಧರಣಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದರು.
ಧರಣಿಯ ನೇತೃತ್ವ ವಹಿಸಿದ್ದ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, “ತಾವು ಎಸ್‌ಟಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಬಿಜೆಪಿಯವರು ತಮ್ಮ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು ಸಚಿವ ನಾಗೇಂದ್ರ ಆರೋಪಿಸುತ್ತಾರೆ. ಆದರೆ ಅದೇ ಸಮುದಾಯದ ಅಭಿವೃದ್ಧಿಗೆ ಮೀಸಲಾದ ಅನುದಾನ ದುರ್ಬಳಕೆಯಾದಾಗ ಅವರಿಗೆ ಕಾಳಜಿ ಇರಲಿಲ್ಲವೇ?” ಎಂದು ಪ್ರಶ್ನಿಸಿದರು.
“ಪರಿಶಿಷ್ಟರ ಅನುದಾನ ದುರ್ಬಳಕೆ ಹಾಗೂ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ಆರೋಪಗಳ ನಡುವೆಯೂ ಕಳಂಕಿತರಿಗೆ ಸಂಪುಟದಲ್ಲಿ ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಬೆಂಬಲ ನೀಡಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಜನ-ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುತ್ತಿವೆ. ಸರ್ಕಾರ ಕೂಡಲೇ ಬರ ಪರಿಹಾರ ಘೋಷಿಸಬೇಕು. ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರತ್ತ ಕೈ ತೋರಿಸುವುದನ್ನು ರಾಜ್ಯ ಸರ್ಕಾರ ಬಿಡಬೇಕು. ಎಲ್ಲದಕ್ಕೂ ಕೇಂದ್ರ ಸರ್ಕಾರವೇ ಪರಿಹಾರ ನೀಡಬೇಕಾದರೆ ರಾಜ್ಯ ಸರ್ಕಾರಗಳು ಏಕೆ ಇರಬೇಕು?” ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರ ದಲಿತರ ಬಗ್ಗೆ ಕಾಳಜಿ ಹೊಂದಿಲ್ಲ ಎಂದು ಆರೋಪಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೆ ದಲಿತರ ಅನುದಾನ ಬಳಸಲಾಗಿದೆ ಹಾಗೂ ವಾಲ್ಮೀಕಿ ನಿಗಮದ ಹಣ ದುರ್ಬಳಕೆಯಾಗಿದೆ ಎಂದು ದೂರಿದರು.
ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ವಾಲ್ಮೀಕಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿದರು. ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಚಿವ ನಾಗೇಂದ್ರ ಅವರು ಆರೋಪಮುಕ್ತರಾಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಅವರನ್ನು ಸಚಿವ ಸಂಪುಟದಿAದ ಕೈಬಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ತೀವ್ರವಾಗಿ ಹಿನ್ನಡೆಯಾಗಿವೆ. ಹಲವೆಡೆ ಬಿತ್ತನೆ ಮಾಡಿರುವ ಬೆಳೆಗಳು ಮಳೆಯಿಲ್ಲದೆ ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕವಿದೆ ಎಂದರು.
ವಿಜಯಪುರ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ, ರೈತರಿಗೆ ಬೆಳೆ ನಷ್ಟ ಪರಿಹಾರ, ಬೆಳೆ ವಿಮೆ ಸೌಲಭ್ಯ ಹಾಗೂ ಸಾಲ ಮರುಪಾವತಿಗೆ ಪರಿಹಾರಾತ್ಮಕ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವು ಬ್ಯಾಂಕ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬರಪೀಡಿತ ಪ್ರದೇಶಗಳ ತುರ್ತು ಸಮೀಕ್ಷೆ ನಡೆಸಿ ಅರ್ಹ ರೈತರಿಗೆ ಪರಿಹಾರ ಬಿಡುಗಡೆ ಮಾಡುವುದರೊಂದಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.
ವಿಧಾನಮಂಡಲ ಅಧಿವೇಶನದಲ್ಲಿ ಬರ ಪರಿಹಾರದ ಕುರಿತು ಸಮರ್ಪಕ ಚರ್ಚೆ ನಡೆಯದ ಹಿನ್ನೆಲೆಯಲ್ಲಿ ಹೋರಾಟವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸಲಾಗುತ್ತಿದೆ. ಬರ ಪರಿಸ್ಥಿತಿ ಕುರಿತು ಮುಂದಿನ ಹೋರಾಟದ ಬಗ್ಗೆ ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ರಮೇಶ ಜಿಗಜಿಣಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಸಿಂದಗಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಉಮೇಶ ಕಾರಜೋಳ, ವಿವೇಕಾನಂದ ಡಬ್ಬಿ, ಸಂಜೀವ ಐಹೊಳ್ಳಿ, ಗೋಪಾಲ ಘಟಕಾಂಬಳೆ, ಈರಣ್ಣ ರಾವೂರ, ಮಳುಗೌಡ ಪಾಟೀಲ, ಸ್ವಪ್ನಾ ಕಣಮುಚನಾಳ, ಸಾಬು ಮಾಶ್ಯಾಳ, ವಿಜಯ ಜೋಶಿ, ಸಿದ್ರಾಮ ಅನಗೊಂಡ, ಶಿಲ್ಪಾ ಕುದರಗೊಂಡ, ಶ್ರೀಶೈಲಗೌಡ ಬಿರಾದಾರ, ಅಶೋಕ ಅಲ್ಲಾಪೂರ, ಮಲ್ಲಿಕಾರ್ಜುನ ಜೋಗೂರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.