
ಕಲಬುರಗಿ,ಜೂ.24: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದ್ದು, ಯೋಜನೆಗಳ ದುರುಪಯೋಗವನ್ನು ತಡೆಗಟ್ಟುವ ಮೂಲಕ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆಗಳ ಅನುμÁ್ಠನ ವೇಳೆ ಪತ್ತೆಯಾದ ಅಕ್ರಮಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿದ್ದು, ತಪ್ಪಾಗಿ ವರ್ಗಾವಣೆಯಾಗಿದ್ದ ಸುಮಾರು 14 ರಿಂದ 15 ಕೋಟಿ ಮೊತ್ತವನ್ನು ಈಗಾಗಲೇ ವಾಪಸ್ ಪಡೆಯಲಾಗಿದೆ. ಉಳಿದಿರುವ ಸುಮಾರು 100 ಕೋಟಿ ಮೊತ್ತದ ವಸೂಲಾತಿಗೆ ಬ್ಯಾಂಕುಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.
ಮೃತರ ಖಾತೆಗಳಿಗೆ ಹಣ ಜಮೆ; ಅಸಮಾಧಾನ
ಪರಿಶೀಲನೆ ವೇಳೆ ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗಿರುವುದು, ಒಂದೇ ಬ್ಯಾಂಕ್ ಖಾತೆಗೆ 20ಕ್ಕೂ ಹೆಚ್ಚು ಫಲಾನುಭವಿಗಳನ್ನು ಲಿಂಕ್ ಮಾಡಿರುವುದು ಹಾಗೂ ಬ್ಯಾಂಕ್ ಖಾತೆ ಇಲ್ಲದಿದ್ದರೂ ಹಣ ವರ್ಗಾವಣೆಯಾಗಿರುವಂತಹ ಗಂಭೀರ ಲೋಪಗಳು ಬೆಳಕಿಗೆ ಬಂದಿವೆ ಎಂದು ರೇವಣ್ಣ ಹೇಳಿದರು.
ಗೃಹಲಕ್ಷ್ಮಿ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ 9,156 ಮೃತ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಅವರ ಖಾತೆಗಳಿಗೆ ಒಟ್ಟು 4.27 ಕೋಟಿ ಜಮೆಯಾಗಿದೆ. ಈ ಪೈಕಿ 5,336 ಖಾತೆಗಳಲ್ಲಿ ಹಣ ವರ್ಗಾವಣೆಯನ್ನು ತಡೆಹಿಡಿಯಲಾಗಿದ್ದು, ಇದುವರೆಗೆ ಕೇವಲ 25.84 ಲಕ್ಷ ಮಾತ್ರ ವಸೂಲಿ ಮಾಡಲಾಗಿದೆ.
ವಸೂಲಾತಿ ಪ್ರಗತಿ ತೃಪ್ತಿಕರವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಂದಿನ 8 ರಿಂದ 10 ದಿನಗಳೊಳಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ ಮನೆ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ:
ಗ್ಯಾರಂಟಿ ಯೋಜನೆಗಳಡಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಹಣವನ್ನು ಕೆಲವು ಬ್ಯಾಂಕುಗಳು ಹಳೆಯ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದು ನಿಯಮಬಾಹಿರವಾಗಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸುವಂತೆ ಬ್ಯಾಂಕುಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
ಅನ್ನಭಾಗ್ಯ ಯೋಜನೆಯಲ್ಲಿ ಅಕ್ರಮ ತಡೆ:
ಅನ್ನಭಾಗ್ಯ ಯೋಜನೆಯಡಿ ಆಹಾರ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ನಿಯಮ ಉಲ್ಲಂಘಿಸಿದ 14 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗಿದೆ. ಅಲ್ಲದೆ 6,874 ಬೋಗಸ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, 9,631 ಕ್ವಿಂಟಾಲ್ ಅಕ್ರಮ ಆಹಾರ ಧಾನ್ಯಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.
ಜುಲೈ 2023ರಿಂದ ಡಿಸೆಂಬರ್ 2024ರವರೆಗೆ ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ 508.72 ಕೋಟಿ ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದರು.
ಶಕ್ತಿ ಯೋಜನೆಗೆ 608 ಕೋಟಿ ಬಿಡುಗಡೆ:
ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳಿಗೆ ಬಿಡುಗಡೆಯಾಗಬೇಕಿದ್ದ ಬಾಕಿ ಮೊತ್ತದಲ್ಲಿ ಶೇ.80ರಷ್ಟು, ಅಂದರೆ 608 ಕೋಟಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿಯಾಗಿ 124 ಬಸ್ ಶೆಡ್ಯೂಲ್‍ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಬಸ್ ನಿಲ್ದಾಣಗಳಲ್ಲಿ ಮಹಿಳೆಯರ ಸುರಕ್ಷತೆ ಹಾಗೂ ಸಾರ್ವಜನಿಕ ಸೌಲಭ್ಯಗಳ ದೃಷ್ಟಿಯಿಂದ ಪೆÇಲೀಸ್ ಚೌಕಿ ಮತ್ತು ‘ನಮ್ಮ ಕ್ಲಿನಿಕ್’ ಆರಂಭಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳು ನಿಲ್ಲಿಸಲ್ಲ: ಸ್ಪಷ್ಟನೆ
ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಸ್ಥಗಿತಗೊಳಿಸುತ್ತದೆ ಎಂಬ ವದಂತಿಗಳಿಗೆ ಪ್ರತಿಕ್ರಿಯಿಸಿದ ರೇವಣ್ಣ, “ಯೋಜನೆಗಳು ನಿಲ್ಲುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ಎಂದಿನಂತೆ ಮುಂದುವರಿಯಲಿವೆ. ಆದರೆ ಆದಾಯ ತೆರಿಗೆ ಪಾವತಿದಾರರು ಅಥವಾ ತಪ್ಪು ಮಾಹಿತಿ ನೀಡಿ ಅನರ್ಹವಾಗಿ ಸೌಲಭ್ಯ ಪಡೆಯುತ್ತಿರುವವರನ್ನು ಗುರುತಿಸಿ ವ್ಯವಸ್ಥೆಯನ್ನು ಪಾರದರ್ಶಕಗೊಳಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ” ಎಂದು ಎಚ್.ಎಂ ರೇವಣ್ಣ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಸಂಕನೂರ, ಜಿಲ್ಲಾ ಪಂಚಾಯತ ಮುಖ್ಯ ಯೋಜನ ಅಧಿಕಾರಿ ಶರಣ್ಣಯ್ಯ ಎಸ್. ಮಠಪತಿ, ಉಪಾಧ್ಯಕ್ಷರಾದ ವಿಜಯಕುಮಾರ ಕಟ್ಟಿಮನಿ, ಸೋಮಶೇಖರ ಹಿರೇಮಠ, ಸುರೇಶ್ ತಿಪ್ಪಶೆಟ್ಟಿ, ನರಸಿಂಹಲು ಕುಂಬಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




















