Home ಜಿಲ್ಲೆ ಕಲಬುರಗಿ ಮೌನ ಮುರಿಯಿರಿ, ಮಕ್ಕಳನ್ನು ರಕ್ಷಿಸಿರಿ

ಮೌನ ಮುರಿಯಿರಿ, ಮಕ್ಕಳನ್ನು ರಕ್ಷಿಸಿರಿ

ಕಲಬುರಗಿ,ಏ.18-ನಗರದ ಶ್ರೀಮತಿ ವೀರಮ್ಮ ಗಂಗಶ್ರೀ ಮಹಿಳಾ ಮಹಾವಿದ್ಯಾಲಯದಲ್ಲಿ ಶುಕ್ರವಾರ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೆÇಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ (1098/112), ಹೆಚ್.ಕೆ.ಇ. ಸೊಸೈಟಿ, ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ ಹಾಗೂ ಮಾರ್ಗದರ್ಶಿ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ಮಾತನಾಡಿ, ದೇಶಾದ್ಯಂತ ಬಾಲ್ಯ ವಿವಾಹ ತಡೆಗೆ ನಡೆಯುತ್ತಿರುವ ಪ್ರಯತ್ನಗಳನ್ನು ಶ್ಲಾಘಿಸಿದರು. ಕರ್ನಾಟಕ ರಾಜ್ಯವು ಈ ವಿಷಯದಲ್ಲಿ ಮಾದರಿಯಾಗಿದ್ದು, ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಬಾಲ್ಯ ವಿವಾಹದಲ್ಲಿ ಭಾಗವಹಿಸುವ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.
ಎಲ್ಲಿಯಾದರೂ ಬಾಲ್ಯ ವಿವಾಹ ನಡೆಯುತ್ತಿರುವ ಮಾಹಿತಿ ದೊರೆತರೆ ತಕ್ಷಣ 1098 ಅಥವಾ 112ಕ್ಕೆ ಕರೆ ಮಾಡಿ ವರದಿ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಈ ವೇಳೆ ಎಲ್ಲರಿಗೂ ಬಾಲ್ಯ ವಿವಾಹ ತಡೆಗಟ್ಟುವ ಪ್ರಮಾಣ ವಚನ ಬೋಧಿಸಲಾಯಿತು.
ಇನ್ನೋರ್ವ ಅತಿಥಿಯಾದ ಮಂಜುಳಾ ಪಾಟೀಲ್ ಅವರು ಮಾತನಾಡಿ, ರಾಜ್ಯದಲ್ಲಿ ಬಾಲ್ಯ ವಿವಾಹದ ಪರಿಸ್ಥಿತಿ ಆತಂಕಕಾರಿ ಎಂದು ಹೇಳಿದರು. ಬಾಲ್ಯ ವಿವಾಹದಿಂದ ಹೆಣ್ಣುಮಕ್ಕಳ ಭವಿಷ್ಯ ಹಾಳಾಗುತ್ತಿದ್ದು, ಶಿಕ್ಷಣವೇ ಇದಕ್ಕೆ ಶಾಶ್ವತ ಪರಿಹಾರ ಎಂದು ತಿಳಿಸಿದರು. ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.
ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ್ ಅವರು ಮಾತನಾಡಿ, ಬಾಲ್ಯ ವಿವಾಹ ತಡೆ ಕಾರ್ಯದಲ್ಲಿ ಎದುರಾದ ಸವಾಲುಗಳನ್ನು ವಿವರಿಸಿ, ಸಮಾಜದ ಪ್ರತಿಯೊಬ್ಬರೂ ಈ ದುಷ್ಟ ಪದ್ಧತಿಯನ್ನು ನಿರ್ಮೂಲನೆ ಮಾಡಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ವಿಜಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೃಷ್ಟಿ ಅವರು ರಾಜ್ಯ ಮಟ್ಟದಲ್ಲಿ ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಸನ್ಮಾನಿಸಲ್ಪಟ್ಟರು. ಅವರು ಮಾತನಾಡಿ, ಶಿಕ್ಷಣವೇ ಯಶಸ್ಸಿನ ಮಾರ್ಗವಾಗಿದ್ದು, ಬಾಲ್ಯ ವಿವಾಹ ತಡೆಯಲು ಪ್ರಮುಖ ಸಾಧನವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ಪ್ರಾಚಾರ್ಯರಾದ ಪೆÇ್ರ. ವೀಣಾ ಹೆಚ್ ವಹಿಸಿದ್ದರು. ಪ್ರಾಚಾರ್ಯರಾದ ಡಾ. ಮೋಹನರಾಜ ಪತ್ತಾರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿಶ್ವರಾಧ್ಯ ಇಜೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀನಿವಾಸ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಮಾರ್ಗದರ್ಶಿ ಸಂಸ್ಥೆಯ ಸದಸ್ಯರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಏಪ್ರಿಲ್ 19ರ ಅಕ್ಷಯ ತೃತೀಯ ಸಂದರ್ಭದಲ್ಲಿ ಬಾಲ್ಯ ವಿವಾಹದ ವಿರುದ್ಧ ಎಚ್ಚರಿಕೆಯಿಂದಿರಲು ಕರೆ ನೀಡಲಾಗಿದ್ದು, ಯಾವುದೇ ಪ್ರಕರಣ ಕಂಡುಬಂದಲ್ಲಿ 1800-102-7222, 1098 ಅಥವಾ 112ಕ್ಕೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.