
ಯಾದಗಿರಿ :ಮೇ.೧೩: ರಾಜ್ಯ ರಾಜಕಾರಣದಲ್ಲಿ ಮಹತ್ವದ ಮೈಲುಗಲ್ಲಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ೫೦ ವರ್ಷಗಳ ಸಾರ್ಥಕ ರಾಜಕೀಯ ಜೀವನದ ಅಂಗವಾಗಿ ಕೋಟೆನಾಡು ಚಿತ್ರದುರ್ಗದಲ್ಲಿ ಆಯೋಜಿಸಲಾದ ಅಭಿಮಾನೋತ್ಸವ ಕಾರ್ಯಕ್ರಮವು ಯಾದಗಿರಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ರಾಚನಗೌಡ ಮುದ್ನಾಳ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಮುದ್ನಾಳ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಿಹಾಕುವಲ್ಲಿ ಯಡಿಯೂರಪ್ಪ ಅವರ ಪಾತ್ರ ಅಪಾರವಾಗಿದ್ದು, ಮುಖ್ಯಮಂತ್ರಿ ಅವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಸಾಮಾನ್ಯ ಜನರ ವಿಶ್ವಾಸ ಗಳಿಸಿದ್ದರು ಎಂದು ಹೇಳಿದರು. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರನ್ನು ಬಿಜೆಪಿ ಎಂದಿಗೂ ನಿರ್ಲಕ್ಷಿಸುವುದಿಲ್ಲ ಎಂಬ ಸಂದೇಶ ಈ ಕಾರ್ಯಕ್ರಮದ ಮೂಲಕ ಮತ್ತೊಮ್ಮೆ ಸ್ಪಷ್ಟವಾಗಿದೆ ಎಂದರು.
ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ ನಡುವಿನ ಪೈಪೋಟಿ ಇನ್ನೂ ಅಂತ್ಯ ಕಂಡಿಲ್ಲ ಎಂಬ ಚರ್ಚೆಗಳು ಮುಂದುವರಿದಿವೆ. ಇದರ ಪರಿಣಾಮವಾಗಿ ಆಡಳಿತ ವ್ಯವಸ್ಥೆ ಹಿನ್ನಡೆಯತ್ತ ಸಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಹಲವಾರು ಇಲಾಖೆಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪಂಚ ಗ್ಯಾರಂಟಿ ಯೋಜನೆಗಳ ಪ್ರಚಾರದ ನಡುವೆಯೇ ಕ್ಷೇತ್ರಾಭಿವೃದ್ಧಿಗೆ ಅಗತ್ಯ ಅನುದಾನ ದೊರೆಯುತ್ತಿಲ್ಲ ಎಂಬ ಅಸಮಾಧಾನವನ್ನು ಕಾಂಗ್ರೆಸ್ ಶಾಸಕರೇ ಬಹಿರಂಗವಾಗಿ ವ್ಯಕ್ತಪಡಿಸುತ್ತಿದ್ದಾರೆ ಎಂದು ಟೀಕಿಸಿದರು. ಸರ್ಕಾರದ ಆಡಳಿತ ವೈಫಲ್ಯದಿಂದ ಜನರ ಸಾಮಾನ್ಯ ಸರ್ಕಾರಿ ಕೆಲಸಗಳಿಗೂ ವಿಳಂಬವಾಗುತ್ತಿದೆ, ಪರಿಣಾಮ ಜನರಲ್ಲಿ ನಿರಾಸೆ ಮೂಡಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಸಾಧನೆಗಳ ಕುರಿತು ಉಲ್ಲೇಖಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದಲ್ಲಿ ಅಭಿವೃದ್ಧಿ, ಭದ್ರತೆ ಹಾಗೂ ಭ್ರಷ್ಟಾಚಾರರಹಿತ ಆಡಳಿತಕ್ಕೆ ಆದ್ಯತೆ ನೀಡಲಾಗುತ್ತಿದೆ. ಇದರ ಸಕಾರಾತ್ಮಕ ಪರಿಣಾಮ ದೇಶದ ಜನರ ಜೊತೆಗೆ ಬಿಜೆಪಿ ಕಾರ್ಯಕರ್ತರ ಮೇಲೂ ಕಂಡು ಬರುತ್ತಿದ್ದು, ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತಷ್ಟು ಬಲಪಡುತ್ತಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಸಂಘಟಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಪ್ರತಿಯೊಂದು ಬೂತ್ ಮಟ್ಟಕ್ಕೂ ಭೇಟಿ ನೀಡಿ ಜನರಿಗೆ ಸರ್ಕಾರದ ಲೋಪದೋಷಗಳ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುದ್ನಾಳ ತಿಳಿಸಿದ್ದಾರೆ.























