ಬಸ್-ಕಾರು ಡಿಕಿ: ಮೂವರ ಸಾವು

ಶಿವಮೊಗ್ಗ,ಜ.೧೪- ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಸಂಭವಿಸಿದೆ.


ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ರಿಹಾನ್ (೧೫), ರಾಹಿಲ್ (೯) ಮತ್ತು ಫಾತಿಮಾ (೭೬) ಮೃತಪಟ್ಟವರು,
ಅಪಘಾತದಲ್ಲಿ ಕಾರು ಚಾಲಕ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಸ್ವಿಫ್ಟ್ ಕಾರಿನಲ್ಲಿ ಒಂದೇ ಕುಟುಂಬದ ಆರು ಮಂದಿ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.


ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದ ತಕ್ಷಣ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಪಘಾತದ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.


ಟ್ರ್ಯಾಕ್ಟರ್ ಪಲ್ಟಿ:


ಬಾಗಲಕೋಟೆ ಜಿಲ್ಲೆಯ ಕಮತಗಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಘಟನೆಯಲ್ಲಿ ಸಾವಿಗೀಡಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಅಕ್ಕ ಪಾರ್ವತಿಭಾಯಿ(೨೭), ತಮ್ಮ ಪಾಂಡು ನಾಯಕ್(೨೬) ಮೃತಪಟ್ಟಿದ್ದಾರೆ.