
ಪುತ್ತೂರು, ನ. ೧೯- ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು ಎಂಬ ಉದ್ಧಟತನದ ಹೇಳಿಕೆ ನೀತಿರುವ ಕನ್ನಡ ಅಭಿವೃದ್ಧಿಯ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.
ಪುತ್ತೂರಿನಲ್ಲಿಂದು ಆಯೋಜಿಸಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೦ನೇ ಜನ್ಮ ಶತಾಬ್ಧಿ ಸಮಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಕರಾವಳಿ ಭಾಗದ ಯಕ್ಷಗಾನಕಲಾವಿದರು ಸಲಿಂಗ ಕಾಮಿಗಳು ಎಂಬ ಉದ್ಧಟತನದ ಹೇಳಿಕೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮಬಿಳಿಮಲೆ ವಿರುದ್ಧ ಕಿಡಿಕಾರಿದ ಅವರು, ಈ ಹೇಳಿಕೆ ಖಂಡನೀಯ. ಅವರ ಹೇಳಿಕೆ ಯಕ್ಷಗಾನ ಕಲಾವಿದರು ಮಾತ್ರವಲ್ಲ ಇಡೀ ಹಿಂದೂ ಸಮಾಜಕ್ಕೆಮಾಡಿದ ಅವಮಾನ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ಬಿಂಬಿಸುತ್ತದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕಲೆ ಪರಂಪರೆ ಸಂಸ್ಕೃತಿ ಬಗ್ಗೆ ಕಿಂಚಿತ್ತಾದರೂ ಅಭಿಮಾನವಿದ್ದರೆತಕ್ಷಣ ಪುರುಷೋತ್ತಮ ಬಿಳಿಮಲೆ ಅವರನ್ನು ಪ್ರಾಧಿಕಾರದ ಅಧ್ಯಕ್ಷ ಹುದ್ದೆಯಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಪುರುಷೋತ್ತಮ ಬಿಳಿಮಲೆ ಅವರ ಹೇಳಿಕೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡನೆ ಮಾಡಬೇಕು. ಇವರ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದರು.
ಬಿಜೆಪಿ ಹೋರಾಟ
ರಾಜ್ಯದ ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸದನದ ಹೊರಗೆ ಹಾಗೂ ಒಳಗೆ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಅಭಿವೃದ್ಧಿ ಸ್ಥಗಿತಗೊಂಡಿದೆ. ಭ್ರಷ್ಟಾಚಾರ ಹೆಚ್ಚಿದೆ. ಜನ ವಿರೋಧಿಯಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂಬರುವ ಅಧಿವೇಶನದಲ್ಲಿ ಬಿಜೆಪಿ ಹೋರಾಟ ನಡೆಸಲಿದೆ. ಸದನದ ಹೊರಗೂ ಹೋರಾಟ ನಡೆಸುತ್ತೇವೆ ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅವರ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಟೀಕಿಸಿದರು.
ರಾಜ್ಯದ ಅಭಿವೃದ್ಧಿಗೆ ಗಮನಹರಿಸಬೇಕಾದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರುಗಳು ಅಧಿಕಾರಕ್ಕಾಗಿ ದೆಹಲಿ ಯಾತ್ರೆ ನಡೆಸುತ್ತಿದ್ದಾರೆ. ದೆಹಲಿಯಲ್ಲೇ ಬೀಡು ಬಿಡುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂದು ಟೀಕಿಸಿದರು.
ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಗಳು ಈಡೇರಿಲ್ಲ. ಮತದಾರರಿಗೆ ಮೋಸ ಹೋದ ಭಾವನೆ ಇದೆ. ಮುಂದೆ ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಪಾಠ ಕಲಿಸುವರು ಎಂದರು.
ರಾಜ್ಯದಲ್ಲಿ ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದರು.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ವಿರುದ್ಧ ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅವರು ಆಧಾರ ಸಹಿತ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಯು.ಟಿ. ಖಾದರ್ ಅವರು ಸಭಾಧ್ಯಕ್ಷ ಹುದ್ದೆಯಗೌರವ ಉಳಿಸಲು ರಾಜೀನಾಮೆ ಕೊಡುವುದು ಸೂಕ್ತ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.
ಬಿಳಿಮಲೆ ಕ್ಷಮೆ
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳಾಗಿದ್ದು, ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂಬ ತಮ್ಮ ವಿವಾದಾತ್ಮಕ ಹೇಳಿಕೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕ್ಷಮೆ ಕೇಳಿದ್ದಾರೆ. ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಅವರು, ಕೆಲ ಯಕ್ಷಗಾನ ಕಲಾವಿದರು ಸಲಿಂಗಿಗಳು ಹೌದು.
ಈ ವಿಚಾರವನ್ನು ನಾನು ಹೊಸದಾಗಿ ಹೇಳುತ್ತಿಲ್ಲ ಎಂದಿದ್ದಾರೆ. ನನ್ನ ಉದ್ದೇಶ ಕಲಾವಿದರ ಬದುಕು ಉಜ್ವಲಗೊಳಿಸುವುದು. ಹೀಗಾಗಿ ನನ್ನ ಹೇಳಿಕೆಯಿಂದ ಕಲಾವಿದರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ಯಕ್ಷಗಾನ ಕಲಾವಿದರು, ಅಭಿಮಾನಿಗಳಲ್ಲಿ ವಿಷಾದ ವ್ಯಕ್ತಪಡಿಸುವೆ ಎಂದಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ತೆಗೆದರೆ ಹೋಗುತ್ತೇನೆ. ಆದ್ರೆ ನನ್ನ ಉದ್ದೇಶ ಅವಮಾನ ಮಾಡುವುದು ಅಲ್ಲ ಎಂದಿದ್ದಾರೆ.


































