Home ಜಿಲ್ಲೆ ರಾಯಚೂರು ಕಾಂಗ್ರೆಸ್ ವಿರುದ್ಧ ಬಿವೈವಿ ವಾಗ್ದಾಳಿ

ಕಾಂಗ್ರೆಸ್ ವಿರುದ್ಧ ಬಿವೈವಿ ವಾಗ್ದಾಳಿ

ರಾಯಚೂರು, ಸೆ. ೩: ಕಾಂಗ್ರೆಸ್ ವಿರುದಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯದ ಮನೆ ಮನೆಗಳಲ್ಲೂ ಬಿಜೆಪಿ ಪಾದಯಾತ್ರೆಯ ಕುರಿತು ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ ಹಾಗೂ ಜನಸಾಮಾನ್ಯರು ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಜನರ ಮುಂದಿಡುವ ಉದ್ದೇಶದಿಂದ ಈ ಹೋರಾಟವನ್ನು ನಡೆಸುತ್ತಿದೆ ಎಂದು ಹೇಳಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ದಲಿತರು ಹಾಗೂ ಶೋಷಿತ ಸಮುದಾಯಗಳನ್ನು ಕೇವಲ ಓಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ ಎಸ್‌ಸಿಪಿ, ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಯಾವುದೇ ಪರಿಣಾಮಕಾರಿ ಯೋಜನೆಗಳನ್ನು ನೀಡದೆ, ಅವರ ಹಕ್ಕಿನ ಹಣವನ್ನೇ ಬೇರೆ ಉದ್ದೇಶಗಳಿಗೆ ಬಳಸುತ್ತಿರುವುದು ಖಂಡನೀಯ ಎಂದು ವಿಜಯೇಂದ್ರ ಆರೋಪಿಸಿದರು.

ನಿನ್ನೆ ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಶೋಷಿತ ಸಮುದಾಯಗಳ ಸಮಸ್ಯೆಗಳ ಕುರಿತು ಚರ್ಚಿಸಿದ್ದೇನೆ. ದಲಿತರ ಅಭಿವೃದ್ಧಿಗೆ ಮೀಸಲಾದ ಹಣವನ್ನು ಸಮರ್ಪಕವಾಗಿ ಅವರ ಕಲ್ಯಾಣಕ್ಕೆ ಬಳಸಬೇಕು ಎಂದು ಅವರು ಆಗ್ರಹಿಸಿದರು.

ರೈತರ ಆತ್ಮಹತ್ಯೆ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ
ರಾಜ್ಯದ ಅನ್ನದಾತ ಗಂಭೀರ ಸಂಕಷ್ಟದಲ್ಲಿ ಸಿಲುಕಿದ್ದರೂ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ೩,೬೫೫ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲೇ ೯೩೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ೨೯೫, ರಾಯಚೂರು ಜಿಲ್ಲೆಯಲ್ಲಿ ೧೬೯, ಬೀದರ್‌ನಲ್ಲಿ ೨೨೦ ಹಾಗೂ ಕೊಪ್ಪಳದಲ್ಲಿ ೮೦ಕ್ಕೂ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಈ ಅಂಕಿ-ಅಂಶಗಳು ಸರ್ಕಾರದ ರೈತ ವಿರೋಧಿ ಧೋರಣೆಯನ್ನು ತೋರಿಸುತ್ತವೆ ಎಂದು ಅವರು ಹೇಳಿದರು.
ಪ್ರಿಯಾಂಕ್ ಖರ್ಗೆ ಅವರೇ, ಕಲಬುರಗಿ ಜಿಲ್ಲೆಯಲ್ಲೇ ೨೯೫ ರೈತರು ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರವನ್ನು ಗಂಭೀರವಾಗಿ ಗಮನಿಸಬೇಕು. ಅನ್ನದಾತನ ಸಂಕಷ್ಟಕ್ಕೆ ಸರ್ಕಾರ ಮಿಡಿಯುವ ಕಾಳಜಿ ತೋರಬೇಕು ಎಂದು ಹೇಳಿದರು.

೫ ಲಕ್ಷದವರೆಗೆ ಬೆಳೆ ಸಾಲ ಮನ್ನಾ ಮಾಡಿ
ರಾಜ್ಯದ ಸುಮಾರು ೧೯೦ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರಪೀಡಿತ ಪ್ರದೇಶಗಳ ರೈತರ ಬೆಳೆ ಸಾಲವನ್ನು ೫ ಲಕ್ಷದವರೆಗೆ ಮನ್ನಾ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಜೋಳದ ಬೆಂಬಲ ಬೆಲೆಯ ಸುಮಾರು ೧೪೫ ಕೋಟಿ ಬಾಕಿ ಇದ್ದು, ಅದನ್ನು ಕೂಡಲೇ ರೈತರಿಗೆ ಪಾವತಿಸಬೇಕು. ಹೈನುಗಾರರಿಗೆ ನೀಡಬೇಕಾದ ಪ್ರೋತ್ಸಾಹಧನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಈಗ ಆ ಪ್ರೋತ್ಸಾಹಧನ ಕೂಡ ಬಿಡುಗಡೆಯಾಗುತ್ತಿಲ್ಲ. ರೈತರ ಬದುಕಿನೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.

ವಿಶೇಷ ಅಧಿವೇಶನಕ್ಕೆ ಆಗ್ರಹ
ನಾಡಿನ ರೈತರ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ರಾಜ್ಯ ಸರ್ಕಾರ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
ಹೊಸಪೇಟೆ ಡ್ಯಾಂನಲ್ಲಿ ಹೂಳೆತ್ತುವ ಕಾರ್ಯ ಕೈಗೊಳ್ಳಬೇಕು. ೩೧ ಟಿಎಂಸಿ ನೀರನ್ನು ಹಿಡಿದಿಟ್ಟುಕೊಳ್ಳುವ ಉದ್ದೇಶದಿಂದ ಸಮಾನಾಂತರ ಹಂಚಿಕೆ ವ್ಯವಸ್ಥೆಗೆ ನವಲೆ ಜಲಾಶಯಕ್ಕೆ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಿಯಲ್ ಎಸ್ಟೇಟ್ ವಿಚಾರಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಎಂದು ಟೀಕಿಸಿದ ವಿಜಯೇಂದ್ರ, “ಈಗಲಾದರೂ ಕನಿಷ್ಠ ಶೇ.೨೫ರಷ್ಟು ಗಮನವನ್ನು ಅನ್ನದಾತನ ಸಮಸ್ಯೆಗಳ ಕಡೆಗೆ ಹರಿಸಿ” ಎಂದು ಹೇಳಿದರು.
ಮುಖ್ಯಮಂತ್ರಿಗಳೇ, ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ. ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ಅವರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು” ಎಂದು ಅವರು ಹೇಳಿದರು.

ಪಾದಯಾತ್ರೆ ತಡೆಯುವ ಬದಲು ರೈತರ ಸಮಸ್ಯೆ ಪರಿಹರಿಸಿ:
ಬಿಜೆಪಿ ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್.ಬಿ. ಹರಿಪ್ರಸಾದ್ ಕರೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ಪಾದಯಾತ್ರೆಯನ್ನು ತಡೆಯುವುದಾದರೆ ತಡೆಯಿರಿ. ನಮ್ಮನ್ನು ಗಲ್ಲಿಗೇರಿಸಿದರೂ ಪರವಾಗಿಲ್ಲ. ಆದರೆ ಮೊದಲು ರೈತರ ಸಮಸ್ಯೆಗಳಿಗೆ ಸ್ಪಂದಿಸಿ” ಎಂದು ತಿರುಗೇಟು ನೀಡಿದರು.
ಹರಿಪ್ರಸಾದ್ ಅವರೇ, ಡಿ.ಕೆ. ಶಿವಕುಮಾರ್ ಅವರೇ, ಬಿಜೆಪಿ ಪಾದಯಾತ್ರೆಗೆ ಕಪ್ಪು ಬಾವುಟ ತೋರಿಸುವುದಕ್ಕಿಂತ ಮೊದಲು ರೈತರ ಕಣ್ಣೀರು ಒರೆಸುವ ಕೆಲಸ ಮಾಡಿ. ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಅನ್ನದಾತನ ಬದುಕು ಸಂಕಷ್ಟದಲ್ಲಿದೆ. ಈ ಸಮಸ್ಯೆಗಳಿಗೆ ಪರಿಹಾರ ನೀಡುವುದು ಸರ್ಕಾರದ ಕರ್ತವ್ಯ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಸೂಕ್ತ ಸಮಯದಲ್ಲಿ ಜನರೇ ಉತ್ತರ ನೀಡುತ್ತಾರೆ” ಎಂದು ಬಿ.ವೈ. ವಿಜಯೇಂದ್ರ ಎಚ್ಚರಿಸಿದರು.