
ಹುಳಿಯಾರು, ಜೂ. ೨- ಆರೋಗ್ಯಕರ ಮತ್ತು ಸುಸ್ಥಿರ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ತಂಬಾಕು ಮುಕ್ತ ಜೀವನ ಶೈಲಿ ಅಳವಡಿಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಾಮಚಂದ್ರ ಡಿ. ಕರೆ ನೀಡಿದರು.
ತಾಲ್ಲೂಕಿನ ಹಂದನಕೆರೆ ವಲಯದ ಚೌಳಕಟ್ಟೆ ಗ್ರಾಮದಲ್ಲಿ ಏರ್ಪಡಿಸಿದ್ದ ’ವಿಶ್ವ ತಂಬಾಕು ವಿರೋಧಿ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗಾಂಧೀಜಿಯವರ ಕನಸಿನ ರಾಮರಾಜ್ಯ ಸ್ಥಾಪನೆಯ ಗುರಿಯೊಂದಿಗೆ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ತಂಬಾಕಿನಿಂದಾಗುವ ಮಾರಕ ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಮಕ್ಕಳ ಭವಿಷ್ಯವನ್ನು ಆರೋಗ್ಯಕರವಾಗಿ ರೂಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಸ್ವಸಹಾಯ ಸಂಘಗಳ ನಿರ್ವಹಣೆ, ವಾರಸಭೆ ಮತ್ತು ಒಕ್ಕೂಟ ಸಭೆಗಳ ಮಹತ್ವದ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಮಹೇಶ್ ಮಾತನಾಡಿ, ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಗಂಭೀರ ಅಡ್ಡಪರಿಣಾಮಗಳೇನು ಎಂಬುದನ್ನು ವಿವರಿಸಿದರು. ವ್ಯಸನ ಮುಕ್ತರಾಗಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳು ಹಾಗೂ ಮಕ್ಕಳ ಆರೋಗ್ಯದ ಮೇಲೆ ಪೋಷಕರು ವಹಿಸಬೇಕಾದ ಕಾಳಜಿಯ ಬಗ್ಗೆ ಮಾರ್ಗದರ್ಶನ ನೀಡಿದರು.
ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಬಸವರಾಜ್ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಗ್ರಾಮಗಳು ತಂಬಾಕು ಮುಕ್ತವಾಗುವುದು ಅತ್ಯಗತ್ಯ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಮ್ಮಿಕೊಳ್ಳುವ ಇಂತಹ ಜಾಗೃತಿ ಕಾರ್ಯಕ್ರಮಗಳಿಗೆ ಗ್ರಾಮಸ್ಥರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕೃಷಿ ಮೇಲ್ವಿಚಾರಕ ಮಂಜುನಾಥ್ ಸಿ., ಸೇವಾಪ್ರತಿನಿಧಿ ಪಂಕಜ, ವಿ.ಎಲ್.ಇ. ನಿರ್ಮಲ, ಗ್ರಾಮಸ್ಥರು ಹಾಗೂ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.





























