Home ಜಿಲ್ಲೆ ತುಮಕೂರು ಸರ್ಕಾರಿ ಶಾಲೆಗಳ ಸೌಲಭ್ಯ ಸದುಪಯೋಗಕ್ಕೆ ಕರೆ

ಸರ್ಕಾರಿ ಶಾಲೆಗಳ ಸೌಲಭ್ಯ ಸದುಪಯೋಗಕ್ಕೆ ಕರೆ

ಗುಬ್ಬಿ, ನ. ೨- ಸರ್ಕಾರಿ ಶಾಲೆಗಳಲ್ಲಿ ದೊರೆಯುವ ಗುಣಮಟ್ಟದ ಶಿಕ್ಷಣ ಮತ್ತು ಸೌಲಭ್ಯಗಳು ಖಾಸಗಿ ಶಾಲೆಗಳಲ್ಲಿಯೂ ಸಿಗುವುದು ಕಷ್ಟ. ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಹಾಗೂ ಉತ್ತಮ ಶಿಕ್ಷಣ ವ್ಯವಸ್ಥೆಯಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಡಿಡಿಪಿಐ ರಘುಚಂದ್ರ ಹೇಳಿದರು.


ತಾಲ್ಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಒಸಾಟ್ ಶೈಕ್ಷಣಿಕ ಧರ್ಮದತ್ತಿ ಸಂಸ್ಥೆಯ ವತಿಯಿಂದ ನಿರ್ಮಿಸಲಾದ ಆರು ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.


ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಕನಸುಗಳನ್ನು ಕಾಣಬೇಕು. ಆ ಕನಸುಗಳನ್ನು ನನಸಾಗಿಸಿಕೊಳ್ಳಲು ನಿರಂತರ ಪರಿಶ್ರಮ ಪಟ್ಟು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಮೊಬೈಲ್ ಗೀಳಿನಿಂದ ಹೊರಬಂದು ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಗ್ರಂಥಾಲಯಗಳಿಗೆ ನಿರಂತರ ಭೇಟಿ ನೀಡಿ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಪ್ರಾಂಶುಪಾಲ ಎಚ್.ಎಂ. ಸದಾಶಿವಯ್ಯ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣದ ಜೊತೆಗೆ ಅಗತ್ಯ ಮೂಲಭೂತ ಸೌಲಭ್ಯಗಳು ದೊರೆಯುತ್ತಿವೆ. ಒಸಾಟ್ ಸಂಸ್ಥೆಯು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ನೂತನ ಶಾಲಾ ಕೊಠಡಿಗಳನ್ನು ನಿರ್ಮಿಸಿಕೊಟ್ಟಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಾಸ ಮಾಡಿ ಶೇಕಡಾ ನೂರರಷ್ಟು ಫಲಿತಾಂಶ ಪಡೆಯುವ ಮೂಲಕ ಸಂಸ್ಥೆಯ ಸೇವೆಗೆ ಕೃತಜ್ಞತೆ ಸಲ್ಲಿಸಬೇಕು ಎಂದರು.


ಒಸಾಟ್ ಸಂಸ್ಥೆಯ ಮುಖ್ಯಸ್ಥ ಪ್ರಕಾಶ್ ನರಸಿಂಹಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಂಡು ಮುನ್ನಡೆಯಬೇಕು. ಮೈಸೂರಿನ ಶ್ರೀಕಂಠಯ್ಯ ಮತ್ತು ಸುಮಿತ್ರಾ ಅವರು ಒಸಾಟ್ ಸಂಸ್ಥೆಯ ಮೂಲಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ನೆರವು ನೀಡಿದ್ದಾರೆ. ಅವರ ಸಾರ್ಥಕ ಸೇವೆಗೆ ನಿಜವಾದ ಗೌರವ ಸಲ್ಲಬೇಕಾದರೆ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧನೆ ಮಾಡಬೇಕು ಎಂದು ತಿಳಿಸಿದರು.


ಎಸ್‌ಡಿಎಂಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ದುಡಿಮೆಯ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಒಸಾಟ್ ಸಂಸ್ಥೆಯವರು ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಕೊಠಡಿಗಳನ್ನು ನಿರ್ಮಿಸಿಕೊಡುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಾಲೆಯ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.


ಈ ಸಂದರ್ಭದಲ್ಲಿ ಪ್ರಭಾರ ಬಿಇಒ ಮಧುಸೂದನ್, ಎಸ್‌ಡಿಎಂಸಿ ಅಧ್ಯಕ್ಷ ಶಿವಕುಮಾರ್ ಹಾಗೂ ಸದಸ್ಯರು, ನಿವೃತ್ತ ಶಿಕ್ಷಕ ಬಿ.ಸಿ. ಶಿವಣ್ಣ, ಒಸಾಟ್ ಸಂಸ್ಥೆಯ ಮುಖ್ಯಸ್ಥ ಪ್ರಕಾಶ್ ನರಸಿಂಹಮೂರ್ತಿ, ಸದಸ್ಯರಾದ ವೀರಣ್ಣಗೌಡ, ಮಂಜುನಾಥ್, ಕಿರಣ್ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.